ಸೀಸಿ ಟಿವಿ ಕಣ್ಗಾವಲಿನಲ್ಲಿ ಪಿಯುಸಿ ಪರೀಕ್ಷೆ: ಡಾ.ಕುಮಾರ್

KannadaprabhaNewsNetwork |  
Published : Feb 21, 2025, 12:47 AM IST
20ಕೆಎಂಎನ್‌ಡಿ-3ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ವ ಸಿದ್ಧತೆ ಹಾಗೂ ಪರೀಕ್ಷೆಯ ಸುರಕ್ಷತೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿಯನ್ನು ಆರೋಗ್ಯ ಇಲಾಖೆಯವರು ನಿಯೋಜಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು, ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್, ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಡಿವೈಸ್ ತರುವುದನ್ನು ನಿಷೇಧಿಸಲಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಸಿಸಿಟೀವಿ ಕಣ್ಗಾವಲಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ 2024- 25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಪೂರ್ವ ಸಿದ್ಧತೆ ಹಾಗೂ ಪರೀಕ್ಷೆಯ ಸುರಕ್ಷತೆಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಈ ಬಾರಿ 14,617 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಮಂಡ್ಯದಲ್ಲಿ 5073 ವಿದ್ಯಾರ್ಥಿಗಳು, ಮದ್ದೂರಿನಲ್ಲಿ 2137, ಮಳವಳ್ಳಿಯಲ್ಲಿ 1063, ಕೆ.ಆರ್. ಪೇಟೆಯಲ್ಲಿ 1720, ನಾಗಮಂಗಲದಲ್ಲಿ 1720, ಶ್ರೀರಂಗಪಟ್ಟಣದಲ್ಲಿ 1108, ಪಾಂಡವಪುರದಲ್ಲಿ 1717 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ವಿವರಿಸಿದರು.

ಮಂಡ್ಯ- 7, ಮದ್ದೂರು- 5, ಮಳವಳ್ಳಿ- 3, ಕೆ.ಆರ್ ಪೇಟೆ- 3, ನಾಗಮಂಗಲ- 3, ಶ್ರೀರಂಗಪಟ್ಟಣ- 2, ಪಾಂಡವಪುರ- 3ರಂತೆ ಒಟ್ಟು 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ, ಜಿಲ್ಲೆಯಲ್ಲಿ ಯಾವುದೇ ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳೂ ಇರುವುದಿಲ್ಲ ಎಂದರು.

ಅಕ್ರಮ ನಡೆಯದಂತೆ ಎಚ್ಚರ:

ಯಾವುದೇ ಪರೀಕ್ಷಾ ಅಕ್ರಮಗಳು ನಡೆಯದಂತೆ ಹಾಗೂ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಪರೀಕ್ಷೆ ನಡೆಯುವ ಕೊಠಡಿಯಲ್ಲಿ ಸಿಸಿಟೀವಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗುವುದು. ಸಿಸಿಟೀವಿ ವೆಬ್ ಕಾಸ್ಟಿಂಗ್ ಅನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವೀಕ್ಷಿಸಲು ಪ್ರಾಂಶುಪಾಲರ ತಂಡವನ್ನು ಸಹ ರಚಿಸಲಾಗಿದೆ ಎಂದು ತಿಳಿಸಿದರು.

ಪರೀಕ್ಷೆಗಳಲ್ಲಿ ಯಾವುದೇ ಅಕ್ರಮ ನಡೆಯದಂತೆ ನೋಡಿಕೊಳ್ಳಲು ಪರೀಕ್ಷಾ ಕೇಂದ್ರಗಳಲ್ಲಿ ಸಿಟ್ಟಿಂಗ್ ಸ್ಕ್ವಾಡ್, ಹಾಗೂ 5 ಮೊಬೈಲ್ ಸ್ಕ್ವಾಡ್ ತಂಡ ರಚಿಸಲಾಗುವುದು. ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಪ್ರಾಂಶುಪಾಲರನ್ನೂಳಗೊಂಡ ತ್ರಿಸದಸ್ಯ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.

ಪ್ರಶ್ನೆಪತ್ರಿಕೆ ಒಯ್ಯುವ ವಾಹನಗಳಿಗೆ ಜಿಪಿಎಸ್‌:

ಪ್ರಶ್ನೆಪತ್ರಿಕೆಯನ್ನು ಕೊಂಡೊಯ್ಯುವ ವಾಹನಗಳಿಗೆ ಶಸ್ತ್ರಸಜ್ಜಿತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಹಾಗೂ ವಾಹನಗಳಿಗೆ ಜಿ.ಪಿ.ಎಸ್ ಟ್ರ‍್ಯಾಕರ್ ಕಡ್ಡಾಯವಾಗಿ ಅಳವಡಿಸಿರಬೇಕು, ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಹಾಗೂ ನಿಷೇಧಿತ ಪ್ರದೇಶದಲ್ಲಿ ಯಾವುದೇ ಜೆರಾಕ್ಸ್ ಅಂಗಡಿಗಳನ್ನು ತೆರೆಯುವಂತಿಲ್ಲ ಎಂದು ತಿಳಿಸಿದರು.

ಸಾರಿಗೆ ಬಸ್‌ ವ್ಯವಸ್ಥೆ ಮಾಡಿ:

ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ಉತ್ತಮ ಸ್ಥಿತಿಯಲ್ಲಿರುವ ಬೆಂಚ್ ಗಳ ವ್ಯವಸ್ಥೆಯಾಗಬೇಕು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ಸಾರಿಗೆ ಬಸ್‌ಗಳ ವ್ಯವಸ್ಥೆ ಆಗಬೇಕು ಎಂದರು.

ಎಲೆಕ್ಟ್ರಿಕ್‌ ಸಾಧನಗಳಿಗೆ ನಿಷೇಧ:

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂದಿಯನ್ನು ಆರೋಗ್ಯ ಇಲಾಖೆಯವರು ನಿಯೋಜಿಸಬೇಕು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಹೊಂದಿರಬೇಕು, ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್, ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಡಿವೈಸ್ ತರುವುದನ್ನು ನಿಷೇಧಿಸಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್. ಶಿವರಾಮೇಗೌಡ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಚೆಲುವಯ್ಯ ಹಾಗೂ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾ.ನಗರ: ಚಿನ್ನದ ಆಸೆಗೆ ಗುಡ್ಡವನ್ನೇ ಅಗೆದ ಕಿಡಿಗೇಡಿಗಳು
ವಜ್ರ, ಚಿನ್ನ ಪತ್ತೆಗೆ 6.71 ಲಕ್ಷ ಹೆಕ್ಟೇರ್‌ ಭೂ ಗುರುತು