- 1,46,126 ಲಕ್ಷ ಮಕ್ಕಳಿಗೆ ಲಸಿಕೆ ಗುರಿ । ಸಿದ್ಧತಾ ಸಭೆಯಲ್ಲಿ ಮಾಹಿತಿ
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಡಿ ಇದೇ ಡಿ.21 ರಿಂದ 24 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ 5 ವರ್ಷದೊಳಗಿನ 1,46,126 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಪೂರ್ವಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಮತ್ತು ನಗರ ಪ್ರದೇಶದ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿನ 0-5 ವರ್ಷದೊಳಗಿನ ಯಾವುದೇ ಮಗು ಲಸಿಕೆ ಸೌಲಭ್ಯದಿಂದ ಹೊರಗುಳಿಯಬಾರದು. ವಿವಿಧ ರಾಜ್ಯಗಳಿಂದ ಉದ್ಯೋಗ ಹರಸಿ ಬಂದಂತಹ ಕಾರ್ಮಿಕ ಕುಟುಂಬ ಮಕ್ಕಳನ್ನೂ ಗುರುತಿಸಿ ಲಸಿಕೆ ಹಾಕಬೇಕು ಎಂದು ತಿಳಿಸಿದರು.ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆ ವಾಹನಗಳನ್ನು ನಿಗದಿತ ಸಮಯಕ್ಕೆ ನಿಯೋಜಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ವಾಹನಗಳ ಪೂರೈಸಬೇಕು. ಬೆಸ್ಕಾಂ ಇಲಾಖೆ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಈ ಕಾರ್ಯಕ್ರಮ ವ್ಯಾಪಕ ಪ್ರಚಾರಕ್ಕಾಗಿ ಶಾಲಾ ಮಕ್ಕಳಿಂದ ಜಾಥಾ ಏರ್ಪಡಿಸುವುದರ ಮೂಲಕ ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕುರಿತು ಜಾಗೃತಿ ಮೂಡಿಸಬೇಕು. ನಗರಸಭೆ ಮತ್ತು ಇನ್ನಿತರೆ ಸ್ಥಳೀಯ ಸಂಸ್ಥೆಗಳ ವತಿಯಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಆಡಿಯೋ ಮೂಲಕ ಕಸ ವಿಲೇವಾರಿ ವಾಹನಗಳಲ್ಲಿ ಪ್ರಚುರಪಡಿಸಬೇಕು ಎಂದು ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾಗೇಂದ್ರಪ್ಪ, ಪಾಲಿಕೆ ಆಯುಕ್ತೆ ರೇಣುಕಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜನಾಯ್ಕ, ಆರ್‌ಸಿಎಚ್ ಅಧಿಕಾರಿ ಡಾ.ರೇಣುಕಾರಾಧ್ಯ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
- - -(ಬಾಕ್ಸ್) * ಗ್ರಾಮೀಣ, ಕಾನನ ಮಕ್ಕಳ ಮರೆಯಬೇಡಿ: ಸಿಇಒ ಜಿಪಂ ಸಿಇಒ ಗಿತ್ತೆ ಮಾಧವ ವಿಠಲ ರಾವ್ ಮಾತನಾಡಿ, ಜಿಲ್ಲೆಯಲ್ಲಿನ ಯಾವುದೇ ಒಬ್ಬ ಮಗು ಸಹ ಲಸಿಕೆಯಿಂದ ಹೊರಗುಳಿಯಬಾರದು. ವಿಶೇಷವಾಗಿ ಗ್ರಾಮೀಣ ಮತ್ತು ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮಕ್ಕಳನ್ನು ಗಮನಹರಿಸಿ ಅವರಿಗೂ ಕೂಡ ಪಲ್ಸ್ ಪೋಲಿಯೋ ಲಸಿಕೆ ನೀಡಬೇಕು. ಅದರಲ್ಲೂ ಚನ್ನಗಿರಿ ವಲಯದಲ್ಲಿ ಹೆಚ್ಚಾಗಿ ಅರಣ್ಯ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಅಡಕೆ ಕೆಲಸಕ್ಕೆ ತೆರಳುವ ಕಾರ್ಮಿಕರು ತಮ್ಮ ಮಕ್ಕಳನ್ನು ಕೆಲಸದ ಸ್ಥಳಗಳಲ್ಲಿ ಕಾಣ ಸಿಗುತ್ತಾರೆ. ಅವರನ್ನು ಗುರುತಿಸಿ ಪ್ರತಿಯೊಂದು ಮಗುವಿಗೂ ಲಸಿಕೆ ನೀಡಬೇಕು ಎಂದು ತಾಕೀತು ಮಾಡಿದರು.
- - --3ಕೆಡಿವಿಜಿ42:
ದಾವಣಗೆರೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ ನಡೆಯಿತು.