ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಸಿದ್ಧತೆಗೆ ಸೂಚನೆ

KannadaprabhaNewsNetwork |  
Published : Dec 02, 2025, 01:08 AM IST
0000 | Kannada Prabha

ಸಾರಾಂಶ

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕಮವು ಡಿಸೆಂಬರ್ 21 ರಿಂದ ಜಿಲ್ಲಾ ಲಸಿಕಾ ಕೇಂದ್ರಗಳಲ್ಲಿ ಪ್ರಾರಂಭವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ತುಮಕೂರು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕಮವು ಡಿಸೆಂಬರ್ 21 ರಿಂದ ಜಿಲ್ಲಾ ಲಸಿಕಾ ಕೇಂದ್ರಗಳಲ್ಲಿ ಪ್ರಾರಂಭವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಚಾಲನಾ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 1,86,969 ಮಕ್ಕಳಿದ್ದು, ಜಿಲ್ಲೆಯಾದ್ಯಂತ 1,211 ಲಸಿಕಾ ಕೇಂದ್ರಗಳಲ್ಲಿ ಡಿಸೆಂಬರ್ 21 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಪ್ರಾರಂಭವಾಗಲಿದೆ. ಡಿಸೆಂಬರ್ 22 ಮತ್ತು 23ರಂದು ಗ್ರಾಮೀಣ ಪ್ರದೇಶ, ಡಿಸೆಂಬರ್ 22, 23 ಹಾಗೂ 24ರಂದು ನಗರ ಪ್ರದೇಶದಗಳಲ್ಲಿ ಮನೆ-ಮನೆಗೆ ಭೇಟಿ ನೀಡಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುವುದು ಎಂದು ಹೇಳಿದರು. ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ಸ್ಥಳಗಳಾದ ದೇವಸ್ಥಾನ, ಪ್ರವಾಸಿ ತಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಅಮಾನಿಕೆರೆ, ಟೋಲ್ ಪ್ಲಾಜಾ ಹಾಗೂ ಜಿಲ್ಲೆಗೆ ಪ್ರವೇಶಿಸುವ ಜಾಗದಲ್ಲಿ ಪಲ್ಸ್ ಪೋಲಿಯೋ ಕೇಂದ್ರಗಳನ್ನು ಕಡ್ಡಾಯವಾಗಿ ತೆರೆಯಬೇಕು ಎಂದರಲ್ಲದೆ, ಲಸಿಕಾ ವ್ಯಾಪ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕಾ ಕೇಂದ್ರಗಳನ್ನು ತೆರೆಯಬೇಕು ಎಂದು ಹೇಳಿದರು. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವು ಅತ್ಯಂತ ಮಹತ್ವದಾಗಿದ್ದು, ಪಲ್ಸ್ ಪೋಲಿಯೋ ಲಸಿಕೆ ವಿತರಣೆ ಹಾಗೂ ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವಲ್ಲಿ ಯಾವುದೇ ರೀತಿ ನಿರ್ಲಕ್ಷ್ಯ ವಹಿಸದೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಅಲೆಮಾರಿ ಮತ್ತು ಕೈಗಾರಿಕಾ ವಲಯದ ಪ್ರದೇಶಗಳಿಗೆ ಹೆಚ್ಚು ಗಮನಹರಿಸಿ ಲಸಿಕೆ ತಲುಪಿಸುವ ಕಾರ್ಯವನ್ನು ವ್ಯವಸ್ಥಿತವಾಗಿ ಮಾಡಬೇಕು. ಲಸಿಕೆ ಹಾಕುವ ಕಾರ್ಯದಲ್ಲಿ ತೊಡಗುವ ಎಲ್ಲ ಸಿಬ್ಬಂದಿಗೆ ಕಡ್ಡಾಯವಾಗಿ ತರಬೇತಿ ನೀಡಬೇಕು. ಕಾರ್ಯಕ್ರಮದ ಯಶಸ್ಸಿಗೆ ಲಸಿಕೆಯ ಗುಣಮಟ್ಟವು ಅತ್ಯಂತ ಮುಖ್ಯ. ಆದ್ದರಿಂದ, ಪಲ್ಸ್ ಪೋಲಿಯೋ ಲಸಿಕೆಯ ಗುಣಮಟ್ಟವನ್ನು ಕಾಪಾಡುವ ಉದ್ದೇಶದಿಂದ, ಡಿಸೆಂಬರ್ 15 ರಿಂದ 24 ರವರೆಗೆ ನಿರಂತರ ವಿದ್ಯುತ್ ಸರಬರಾಜು ಒದಗಿಸಲು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಅರಿವು ಮೂಡಿಸುವಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪಾತ್ರ ಮಹತ್ವದ್ದಾಗಿದೆ. ಪಲ್ಸ್ ಪೋಲಿಯೋ ಬಗ್ಗೆ ಹೆಚ್ಚು ಮಕ್ಕಳಲ್ಲಿ ಅರಿವು ಮೂಡಿಸಬೇಕು. ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಪ್ರತಿದಿನ ಶಾಲೆಯಲ್ಲಿ ಪ್ರಾರ್ಥನೆಯ ಸಂದರ್ಭದಲ್ಲಿ ಪಲ್ಸ್ ಪೋಲಿಯೋ ಬಗ್ಗೆ ಮಕ್ಕಳಿಗೆ ತಪ್ಪದೇ ಮಾಹಿತಿ ನೀಡಬೇಕು ಎಂದು ತಿಳಿಸಿದರು.ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಬೇಕು ಮತ್ತು ಅನೇಕ ಲಸಿಕಾ ಕೇಂದ್ರಗಳನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ತೆರೆಯಬೇಕು ಎಂದು ಸೂಚನೆ ನೀಡಿದ ಅವರು, ಕಾರ್ಯಕ್ರಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮಾಹಿತಿ, ಶಿಕ್ಷಣ ಮತ್ತು ಸಂವಹನ ಕರಪತ್ರಗಳು ಮತ್ತು ಬ್ಯಾನರ್‌ಗಳನ್ನು ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಡಾ. ಚಂದ್ರಶೇಖರ್, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿ ಡಾ. ಮೋಹನ್ ಸಿ.ಆರ್., ವಿಶ್ವ ಆರೋಗ್ಯ ಸಂಸ್ಥೆಯ ಎಸ್‌ಎಂಓ ಡಾ. ಸುಧೀರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ
24ರಿಂದ ಎಬಿವಿಪಿ ರಾಜ್ಯಮಟ್ಟದ ಪ್ರಾಂತ ಸಮ್ಮೇಳನ