ಕೊಪ್ಪಳ: ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದ ಹೋಟೆಲ್ ಮತ್ತು ಖಾನಾವಳಿಗಳಲ್ಲಿ ಮನಸೋಇಚ್ಛೆ ದರ ವಸೂಲಿ, ಕಳಪೆ ಆಹಾರ ಪೂರೈಕೆ ಹಾಗೂ ಮೂಲಸೌಕರ್ಯಗಳ ಕೊರತೆಗೆ ಕಡಿವಾಣ ಹಾಕುವಂತೆ ಜನಪರ ಸಂಘಟನೆಗಳ ಒಕ್ಕೂಟ ಬುಧವಾರ ಜಿಲ್ಲಾಡಳಿತಕ್ಕೆ ಅಂತಿಮ ಜ್ಞಾಪನಾ ಪತ್ರ ಸಲ್ಲಿಸಿದೆ.
ಹೋಟೆಲ್‌ಗಳಲ್ಲಿ ಒಂದು ಕೆಟಿ ಚಹಾಕ್ಕೆ ₹30ರಿಂದ ₹35 ಹಾಗೂ ಒಂದು ಇಡ್ಲಿಗೆ ₹20 ವಸೂಲಿ ಮಾಡಲಾಗುತ್ತಿದೆ. ಆದರೆ ಆಹಾರದ ಗುಣಮಟ್ಟ ಮತ್ತು ಪ್ರಮಾಣದಲ್ಲಿ ಯಾವುದೇ ಸುಧಾರಣೆಯಾಗಿಲ್ಲ. ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸದೆ ಗ್ರಾಹಕರಿಂದ ಮನಬಂದಂತೆ ಹಣ ಪಡೆಯಲಾಗುತ್ತಿದೆ. ಇದು ಗ್ರಾಹಕರ ಸಂರಕ್ಷಣಾ ಕಾಯ್ದೆ ಹಾಗೂ ಕಾನೂನು ಮಾಪನಶಾಸ್ತ್ರ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.
ಹೋಟೆಲ್‌ಗಳನ್ನು ಅವಲಂಬಿಸಿರುವ ಕೂಲಿ ಕಾರ್ಮಿಕರು, ವಿದ್ಯಾರ್ಥಿಗಳು, ರೋಗಿಗಳು ಹಾಗೂ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಶುದ್ಧ ಕುಡಿಯುವ ಬಿಸಿ ನೀರು ಮತ್ತು ಸ್ವಚ್ಛ ಶೌಚಾಲಯದ ವ್ಯವಸ್ಥೆಯನ್ನೂ ಕಲ್ಪಿಸುತ್ತಿಲ್ಲ. ಅಡುಗೆಮನೆಗಳಲ್ಲಿ ನೈರ್ಮಲ್ಯ ಕಾಪಾಡುತ್ತಿಲ್ಲ. ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದೆ.ಒಕ್ಕೂಟದ ಪ್ರಮುಖ ಆಗ್ರಹಗಳು: ಕಂದಾಯ, ನಗರಸಭೆ, ಆಹಾರ ಸುರಕ್ಷತೆ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡ ರಚಿಸಿ ಜಿಲ್ಲೆಯ ಎಲ್ಲ ಹೋಟೆಲ್‌ಗಳ ಮೇಲೆ ದಾಳಿ ನಡೆಸಬೇಕು. ನಿಯಮ ಉಲ್ಲಂಘಿಸುವ ಹೋಟೆಲ್‌ಗಳ ವ್ಯಾಪಾರ ಮತ್ತು ಆಹಾರ ಸುರಕ್ಷತಾ ಪರವಾನಗಿ ಅಮಾನತುಗೊಳಿಸಬೇಕು. ಹೋಟೆಲ್ ಮಾಲೀಕರ ಸಭೆ ಕರೆದು ಆಹಾರದ ಗುಣಮಟ್ಟ ಮತ್ತು ಪ್ರಮಾಣಕ್ಕೆ ಅನುಗುಣವಾಗಿ ನ್ಯಾಯಸಮ್ಮತ ದರ ನಿಗದಿಪಡಿಸಬೇಕು. ಗ್ರಾಹಕರಿಗೆ ಕಾಣುವಂತೆ ದರಪಟ್ಟಿ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಒತ್ತಾಯಿಸಿದೆ.
ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಂಜುನಾಥ ಗುಂಡೂರ್ ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಚುನಾವಣಾ ವಿಭಾಗದ ತಹಸೀಲ್ದಾರ್ ರವಿಕುಮಾರ್ ವಸ್ತ್ರದ ಅವರಿಗೆ ಮನವಿ ಸಲ್ಲಿಸಲಾಯಿತು.