ಪುತ್ತೂರು: ಇಂದು ವಿವೇಕಾನಂದ ಕಾಲೇಜಿನಲ್ಲಿ ವಿಚಾರಗೋಷ್ಠಿ, ಪ್ರಶಸ್ತಿ ಪ್ರದಾನ

KannadaprabhaNewsNetwork | Published : Apr 28, 2025 11:48 PM

ಸಾರಾಂಶ

ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ) ಮತ್ತು ವಿವೇಕಾನಂದ ಸಂಶೋಧನಾ ಕೇಂದ್ರ, ಡಾ. ಕೆ. ಶಿವರಾಮ ಕಾರಂತ ಅಧ್ಯಯನ ಕೇಂದ್ರ, ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತರ ಕುರಿತು ವಿಚಾರಗೋಷ್ಠಿ ಮಂಗಳವಾರ ಕಾಲೇಜನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಪುತ್ತೂರು

ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ) ಮತ್ತು ವಿವೇಕಾನಂದ ಸಂಶೋಧನಾ ಕೇಂದ್ರ, ಡಾ. ಕೆ. ಶಿವರಾಮ ಕಾರಂತ ಅಧ್ಯಯನ ಕೇಂದ್ರ, ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತರ ಕುರಿತು ವಿಚಾರಗೋಷ್ಠಿ ಮಂಗಳವಾರ ಕಾಲೇಜನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿದೆ.

ಇದೇ ಸಂದರ್ಭ ಪಡೀಲು ಶಂಕರಭಟ್ಟ ಸಂಸ್ಮರಣಾ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ಹಾಗೂ ‘ನಿರಂಜನ’ ಮತ್ತು ‘ಶಂಕರ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ ನೆರವೇರಲಿದೆ ಎಂದು ಕಾಲೇಜಿನ ಸಂಚಾಲಕ ಮುರಳಿಕೃಷ್ಣ ಕೆ. ಎನ್. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಬೆಳಗ್ಗೆ ನಡೆಯುವ ವಿಚಾರಗೋಷ್ಠಿಯಲ್ಲಿ ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ತಾಳ್ತಜೆ ವಸಂತಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ. ಕೆ.ಶಿವರಾಮ ಕಾರಂತರ ‘ಚೋಮನ ದುಡಿ’ ಚಲನಚಿತ್ರದಲ್ಲಿ ನಟರಾಗಿ ಭಾಗವಹಿಸಿದ ಕಲಾವಿದರ ಜೊತೆ ಸಂವಾದ ಮತ್ತು ಸಾಕ್ಷ್ಯ ಚಿತ್ರ ಪ್ರದರ್ಶನ ನಡೆಯಲಿದೆ ಎಂದು ಹೇಳಿದರು.ಪ್ರಶಸ್ತಿ ಪ್ರದಾನ: ಅಪರಾಹ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಟ್ಟಂಪಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಅಭಿನಂದನಾ ಮಾತುಗಳನ್ನಾಡಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ ಕೃಷ್ಣ ಭಟ್, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಬಾಲಮಂಗಳ ಚಿತ್ರಕತಾ ಖ್ಯಾತಿಯ ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅತೀವ ಆಸಕ್ತಿ ಹೊಂದಿದ ಹಾಗೂ ಸಾಧನೆ ಮಾಡಿದ ಡಾ. ಬಾಬು ಕೃಷ್ಣಮೂರ್ತಿ ಅವರಿಗೆ ನಿರಂಜನ ಪ್ರಶಸ್ತಿ ಪ್ರದಾನ ಮಾಡಲಾಗುವುದು.ಶಂಕರ ಸಾಹಿತ್ಯ ಪ್ರಶಸ್ತಿಯನ್ನು ಪ್ರಸ್ತುತ ಸಾಲಿನಲ್ಲಿ ಡಾ. ಡಿ. ಸದಾಶಿವ ಭಟ್ ಪಳ್ಳು ಅವರಿಗೆ ನೀಡಿ ಗೌರವಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು. ವಿವೇಕಾನಂದ ಸಂಶೋಧನಾ ಕೇಂದ್ರದ ನಿರ್ದೇಶಕಿ ಡಾ. ವಿಜಯಸರಸ್ವತಿ, ಡಾ. ಕೆ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಪ್ರಮೋದ್ ಎಂ.ಜಿ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ., ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕಿ ಹವ್ಯಶ್ರೀ ಇದ್ದರು.

Share this article