- ಈಗಾಗಲೇ ಶೇ.40 ಸಿಬ್ಬಂದಿಗೆ ವಸತಿ ಗೃಹ ನಿರ್ಮಾಣ
ಕನ್ನಡಪ್ರಭ ವಾರ್ತೆ ವಿಧಾನಸಭೆ2025ರ ವೇಳೆಗೆ ರಾಜ್ಯದ ಶೇ.80 ರಷ್ಟು ಪೊಲೀಸ್ ಸಿಬ್ಬಂದಿಗೆ ವಸತಿ ಗೃಹ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮಂಗಳವಾರ ಪ್ರಶೋತ್ನರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಶಾಂತನಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ಈ ಮೊದಲು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೊಲೀಸ್ ಗೃಹ 2020 ಎಂಬ ಯೋಜನೆಯನ್ನು ರೂಪಿಸಿ ರಾಜ್ಯದಲ್ಲಿ 10 ರಿಂದ 15 ಸಾವಿರ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಪೊಲೀಸ್ ಗೃಹ 2025 ಯೋಜನೆ ಹಾಕಿಕೊಳ್ಳಲಾಗಿದ್ದು, ಕನಿಷ್ಠ ಶೇ.80ರಷ್ಟು ಪೊಲೀಸ್ ಸಿಬ್ಬಂದಿಗೆ ಮನೆಗಳನ್ನು ನೀಡುವ ಉದ್ದೇಶ ಹೊಂದಲಾಗಿದೆ. ಗ್ರಾಮೀಣ ಹಾಗೂ ಅವಶ್ಯಕತೆ ಇರುವ ಕಡೆ ವಸತಿ ಗೃಹಗಳನ್ನು ನಿರ್ಮಿಸಲಾಗುವುದು. ಈಗಾಗಲೇ ಶೇ.40 ರಷ್ಟು ಸಿಬ್ಬಂದಿಗೆ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಪೊಲೀಸ್ ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರ ಆದ್ಯತೆ ನೀಡಿದೆ. ಪೊಲೀಸ್ ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕೈಗೊಳ್ಳಲಿದೆ ಎಂದು ಹೇಳಿದರು.ಹೊನ್ನಾಳಿ ತಾಲ್ಲೂಕು ನ್ಯಾಮಿತಿಯಲ್ಲಿ 12 ಹೊಸ ವಸತಿ ಗೃಹಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಪೊಲೀಸ್ ಠಾಣೆಗೆ 2.26 ಎಕರೆ ಜಮೀನು ನೀಡಿದ್ದ ಎಚ್.ಬಸವರಾಜಪ್ಪ ಎಂಬುವರ ಪತ್ನಿ ಹಾಗೂ ಮಕ್ಕಳು 45 ಲಕ್ಷ ರು. ಹೆಚ್ಚಿನ ಪರಿಹಾರ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಈಗಾಗಲೇ ಅವರಿಗೆ 53.92 ಲಕ್ಷ ರು. ಪರಿಹಾರ ನೀಡಲಾಗಿದೆ. ನ್ಯಾಯಾಲಯದಿಂದ ಪ್ರಕರಣವನ್ನು ಅದಷ್ಟುಬೇಗ ಇತ್ಯರ್ಥವಾಗುವಂತೆ ಕ್ರಮ ಕೈಗೊಂಡು ವಸತಿ ಗೃಹ ನಿರ್ಮಾಣ ಕಾರ್ಯ ಆರಂಭಿಸಲಾಗುವುದು ಎಂದರು.