ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಸ್ಪಂದಿಸಿ: ಡಿಸಿ

KannadaprabhaNewsNetwork |  
Published : Apr 30, 2024, 02:05 AM IST
ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣೆಯಲ್ಲಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಅಥವಾ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ಶೀಘ್ರ ಸ್ಪಂದಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅಧಿಕಾರಿಗಳಿಗೆ ಸೂಚಿಸಿದರು.

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಯಾವುದೇ ಗ್ರಾಮೀಣ ಪ್ರದೇಶದಲ್ಲಿ ಅಥವಾ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ಶೀಘ್ರ ಸ್ಪಂದಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣೆಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವ ಸಂಬಂಧ ಸೋಮವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಪರ್ಯಾಯವಾಗಿ ನೀರು ಪೂರೈಸಲು ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲು ಮೊದಲ ಆದ್ಯತೆ ನೀಡಿ. ಅವಶ್ಯವಿದ್ದಲ್ಲಿ ಖಾಸಗಿ ಟ್ಯಾಂಕರ್ ಗಳ ಮೂಲಕ ನೀರನ್ನು ಪೂರೈಸಲು ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.

ಕೊಳವೆ ಬಾವಿಗಳಲ್ಲೂ ನೀರು ಇಳಿಕೆ:

ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಕುಡಿಯುವ ನೀರಿನ ಪರಿಸ್ಥಿತಿ ನೋಡುವುದಾದರೆ ನೆಲಮಂಗಲದ ನಗರ ವ್ಯಾಪ್ತಿಯಲ್ಲಿ ಕೆಲವು ಭಾಗ ಹಾಗೂ ದೇವನಹಳ್ಳಿ ತಾಲೂಕಿನ ವೆಂಕಟಗಿರಿ ಕೋಟೆ ಪಂಚಾಯಿತಿ ವ್ಯಾಪ್ತಿಯಲ್ಲಿ, ಚನ್ನರಾಯಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ಬೂದಿಗೆರೆಯ ಇಂದ್ರಹಳ್ಳಿ ಗ್ರಾಮಗಳಲ್ಲಿ ಸ್ವಲ್ಪ ಪ್ರಮಾಣದ ಸಮಸ್ಯೆ ಕಂಡು ಬಂದಿದ್ದು ಈಗಾಗಲೇ ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಬರಗಾಲದಿಂದ ಕೊಳವೆಬಾವಿಗಳಲ್ಲಿ 10 ಅಡಿಯಷ್ಟು ನೀರು ಇಳಿಕೆಯಾಗಿದೆ. ಯಾವುದೇ ನಗರ ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆ ಕಂಡುಬಂದಲ್ಲಿ ತ್ವರಿತವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಜಾನುವಾರುಗಳಿಗೆ ಮೇವಿನ ಸಮಸ್ಯೆ ಇದುವರೆಗೂ ಕಂಡುಬಂದಿಲ್ಲ, ಗೋಶಾಲೆಗಳಲ್ಲಿ ಹೆಚ್ಚಿನ ಮೇವು ಸಂಗ್ರಹಿಸಿಡಲು ಅಧಿಕಾರಿಗಳಿಗೆ ಸೂಚಿಸಿದರು.

ಜಾನುವಾರುಗಳಿಗೆ ನೀರು ಒದಗಿಸಿ:

ಕಡ್ಡಾಯವಾಗಿ ಗ್ರಾ.ಪಂ ವ್ಯಾಪ್ತಿಯಲ್ಲಿನ ಜಾನುವಾರುಗಳ ಕುಡಿಯುವ ನೀರಿನ ತೊಟ್ಟಿಗಳನ್ನು ನಿತ್ಯವೂ ಸ್ವಚ್ಛಗೊಳಿಸಿ, ನೀರಿನ ವ್ಯವಸ್ಥೆಯನ್ನು ಒದಗಿಸುವ ಕೆಲಸ ಮಾಡಬೇಕು. ಬರ ಪರಿಸ್ಥಿತಿಯನ್ನು ಸಮಗ್ರವಾಗಿ ನಿರ್ವಹಿಸಲು ತಾಲೂಕುವಾರು ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ ವಾರಕ್ಕೊಮ್ಮೆ ತಾಲೂಕುಗಳಿಗೆ ಭೇಟಿ ನೀಡಿ ವರದಿ ನೀಡಬೇಕು ಎಂದು ಹೇಳಿದರು.

ಬಿಸಿಗಾಳಿಯಿಂದ ರಕ್ಷಣೆ ಪಡೆಯಿರಿ:

ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಗಾಳಿ ಆತಂಕವಿದ್ದು ಉರಿ ಬಿಸಿಲಿನಿಂದ ರಕ್ಷಣೆ ಪಡೆಯುವುದು ಮುಖ್ಯ. ಜನರು ಬಿಸಿಲಿನ ಸಮಯದಲ್ಲಿ ಮನೆಗಳಿಂದ ಅತೀ ಅವಶ್ಯವಿದ್ದಾಗ ಮಾತ್ರ ಹೊರ ಬನ್ನಿ, ಅನಗತ್ಯ ಬಿಸಿಲಿನಲ್ಲಿ ಓಡಾಡುವುದು ನಿಲ್ಲಿಸಬೇಕು. ಮನೆಯಿಂದ ಹೊರಗಡೆ ಓಡಾಡುವ ವೇಳೆ ತಲೆ ಭಾಗಕ್ಕೆ ಟೋಪಿ ಇಲ್ಲವೇ ಬಟ್ಟೆಯನ್ನು ಬಳಸಿಕೊಂಡು ಬಿಸಿಗಾಳಿಯಿಂದ ರಕ್ಷಣೆ ಪಡೆಯಬೇಕು ಎಂದು ಸಲಹೆ ನೀಡಿದರು.

ಗುಡುಗು ಸಿಡಿಲಿನ ಅಪಾಯದಿಂದ ರಕ್ಷಣೆ:ಗುಡುಗು ಸಿಡಿಲಿನ ವೇಳೆಯಲ್ಲಿ ಜನರು ಹಾಗೂ ಜಾನುವಾರು ಸಂರಕ್ಷಿಸಿಕೊಳ್ಳಲು ಹೊಲ-ಗದ್ದೆಗಳಲ್ಲಿ ರೈತರು ಕೆಲಸ ಮಾಡುವಾಗ ಗಿಡ-ಮರಗಳ ಆಶ್ರಯ ಪಡೆಯುವುದನ್ನು ಮಾಡಬಾರದು. ಅಕಾಲಿಕ ಮಳೆ ಸಂದರ್ಭ ಕಂಡುಬಂದಲ್ಲಿ ಮನೆಗಳಿಗೆ ತೆರಳಿ. ಬಿಸಿಗಾಳಿ, ಗುಡುಗು ಸಿಡಿಲು ಬಗ್ಗೆ ಮುನ್ನೆಚ್ಚರಿಕೆ ಪಾಲಿಸಲು ಸ್ಥಳೀಯವಾಗಿ ಜನರಲ್ಲಿ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಸಂಗಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.29ಕೆಡಿಬಿಪಿ1-

ಬೆಂ.ಗ್ರಾ. ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣೆಯಲ್ಲಿ ಪರಿಶೀಲನಾ ಸಭೆ ನಡೆಯಿತು.

PREV

Recommended Stories

ಸೆಂಚುರಿ ಕ್ಲಬ್‌ ಸೇರಿಯೇ ಬಿಟ್ಟಿತು ಸು ಫ್ರಂ ಸೋ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ