ಉಪನ್ಯಾಸಕರ ಸಮಸ್ಯೆಗಳಿಗೆ ಶೀಘ್ರ ಪರಿಹಾರ: ಜಿ.ಎಸ್. ಪಾಟೀಲ ಭರವಸೆ

KannadaprabhaNewsNetwork |  
Published : Sep 09, 2026, 02:30 AM IST
ಕಾರ್ಯಕ್ರಮವನ್ನು ವಿಧಾನಸಭಾ ಅಧ್ಯಕ್ಷ ಜಿ.ಎಸ್.ಪಾಟೀಲ ಉದ್ಘಾಟಿಸಿದರು. | Kannada Prabha

ಸಾರಾಂಶ

ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ತರಲು ಸರ್ಕಾರ ಬದ್ಧವಾಗಿದ್ದು, ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಶೀಘ್ರದಲ್ಲಿಯೇ ಪರಿಹಾರ ಕಲ್ಪಿಸಲಾಗುವುದು.

ಕನ್ನಡಪ್ರಭ ವಾರ್ತೆ ಗದಗ

ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆ ತರಲು ಸರ್ಕಾರ ಬದ್ಧವಾಗಿದ್ದು, ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಶೀಘ್ರದಲ್ಲಿಯೇ ಪರಿಹಾರ ಕಲ್ಪಿಸಲಾಗುವುದು ಎಂದು ವಿಧಾನಸಭೆಯ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಹೇಳಿದರು.

ಸೋಮವಾರ ಸಂಜೆ ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಗದಗ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ, ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಹಾಗೂ ಪಿಯು ನೌಕರರ ಸಂಘದ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಜರುಗಿದ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ, ಪದಗ್ರಹಣ ಹಾಗೂ ಧನ್ಯತಾ ಸಮರ್ಪಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಬದಲಾಗುತ್ತಿರುವ ಪಿಯು ಶಿಕ್ಷಣ ವ್ಯವಸ್ಥೆಗೆ ತಕ್ಕಂತೆ ಉಪನ್ಯಾಸಕರು ನಿರಂತರ ಪರಿಶ್ರಮ ವಹಿಸಿ ಗದಗ ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಮತ್ತಷ್ಟು ಉತ್ತಮಪಡಿಸಬೇಕು ಎಂದರು.

ವಿಧಾನಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಹಳೆ ಪಿಂಚಣಿ ಯೋಜನೆ ಜಾರಿ, ಅನುದಾನಿತ ಶಿಕ್ಷಕ ಉಪನ್ಯಾಸಕರ ನೇಮಕಾತಿ ಹಾಗೂ ವಿದ್ಯಾರ್ಥಿ, ಉಪನ್ಯಾಸಕರ ಅನುಪಾತ ಸರಿಪಡಿಸುವುದು ಸೇರಿದಂತೆ ಹಲವು ಗಂಭೀರ ಸಮಸ್ಯೆಗಳನ್ನು ಸರ್ಕಾರ ತಕ್ಷಣ ಬಗೆಹರಿಸಬೇಕು. ಇಲ್ಲವಾದಲ್ಲಿ ನವೆಂಬರ್‌ನಲ್ಲಿ ಅನುದಾನಿತ ಶಾಲೆ ಕಾಲೇಜುಗಳನ್ನು ಬಂದ್ ಮಾಡಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಪಿಯು ವ್ಯವಸ್ಥೆಯನ್ನು ಶಾಲಾ ಶಿಕ್ಷಣ ಇಲಾಖೆಯಲ್ಲಿ ವಿಲೀನಗೊಳಿಸುವ ಪ್ರಸ್ತಾಪ ಕೈಬಿಟ್ಟು, ಉಪನ್ಯಾಸಕರ ನೇಮಕಾತಿ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು. ಪ್ರಾಚಾರ್ಯರ ಸಂಘದ ಅಧ್ಯಕ್ಷ ಎಂ.ಸಿ. ಕಟ್ಟಿಮನಿ ಅಧ್ಯಕ್ಷತೆ ವಹಿಸಿದ್ದರು. ತೋಂಟದಾರ್ಯ ವಿದ್ಯಾಪೀಠದ ಆಡಳಿತಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ, ಡಿಡಿಪಿಯು ಎಸ್.ಬಿ. ಮಸನಾಯಕ, ಡಿಡಿಪಿಐ ಆರ್.ಎಸ್. ಬುರಡಿ, ಜಿಲ್ಲಾಧ್ಯಕ್ಷ ಎಸ್.ಎಸ್. ಸೋಮಣ್ಣನವರ, ವೈ.ಸಿ. ಪಾಟೀಲ, ಅಶೋಕ ಅಂಗಡಿ, ಎಂ.ಕೆ. ಲಮಾಣಿ, ಶ್ರೀಶೈಲ ಬಿರಕಬ್ಬಿ ವೇದಿಕೆಯಲ್ಲಿದ್ದರು.

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳು, ನೂರಕ್ಕೆ ನೂರು ಫಲಿತಾಂಶ ನೀಡಿದ ಉಪನ್ಯಾಸಕರು, ನಿವೃತ್ತ ಪ್ರಾಚಾರ್ಯರು ಹಾಗೂ ಉಪನ್ಯಾಸಕರನ್ನು ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಡಾ. ದತ್ತಪ್ರಸನ್ನ ಪಾಟೀಲ ಹಾಗೂ ಎಫ್.ಎನ್. ಹುಡೇದ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೂಲಿ ಹಣ ಜಮೆಗೆ ಆಗ್ರಹಿಸಿ ಕೂಲಿ ಕಾರ್ಮಿಕರ ಪ್ರತಿಭಟನೆ
ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಪತ್ರ ಚಳವಳಿ