ಕನ್ನಡಪ್ರಭ ವಾರ್ತೆ ರಾಮನಗರ
ಹರೀಸಂದ್ರ ಬಳಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ವಿರೋಧಿಸಿ ತಾಲೂಕು ಬಗರ್ ಹುಕ್ಕುಂ ಸಮಿತಿ ಸದಸ್ಯ ಆರ್.ದೊಡ್ಡವೀರಯ್ಯ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ತಾಲೂಕು ಕಚೇರಿಯಲ್ಲಿ ಮಂಗಳವಾರ ಬಗರ್ ಹುಕ್ಕುಂ ಸಮಿತಿ ಸದಸ್ಯ ಕಾರ್ಯದರ್ಶಿಯಾಗಿರುವ ತಹಸೀಲ್ದಾರ್ ತೇಜಸ್ವಿನಿ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಬಗರ್ ಹುಕ್ಕುಂ ಸಮಿತಿಯ ಸದಸ್ಯನಾಗಿ ಸೇವೆ ಸಲ್ಲಿಸುತ್ತಿದ್ದು, ವೈಯಕ್ತಿಕ ಕಾರಣಗಳಿಂದಾಗಿ ನಾನು ಈ ಸ್ಥಾನದಲ್ಲಿ ನಾನು ಮುಂದುವರಿಯುವುದು ಅಸಾಧ್ಯವಾಗಿದೆ. ಆದ್ದರಿಂದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದು, ಕೂಡಲೇ ಅಂಗೀಕರಿಸುವಂತೆ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.ರಾಜೀನಾಮೆಗೆ ಕಾರಣ:
ಹರೀಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ವೇ ನಂ. 166ರ ಸುಮಾರು 19 ಎಕರೆ ಪ್ರದೇಶದಲ್ಲಿ ರಾಮನಗರ ನಗರಸಭೆ ಮತ್ತು ಬಿಡದಿ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಶಾಸಕ ಎಚ್.ಎ.ಇಕ್ಬಾಲ್‌ಹುಸೇನ್ ಮತ್ತು ಜಿಲ್ಲಾಧಿಕಾರಿಗಳು ಹಸಿರು ನಿಶಾನೆ ನೀಡಿದ್ದಾರೆ. ಈ ನಡುವೆ ಆ ಭಾಗದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿ ಗುರ್ತಿಸಿಕೊಂಡಿರುವ ಆರ್.ದೊಡ್ಡವೀರಯ್ಯ ಅವರು ಘಟಕ ನಿರ್ಮಾಣದಿಂದ ಈ ಭಾಗದ ಜನರ ಆರೋಗ್ಯ ಮತ್ತು ಪರಿಸರದ ಮೇಲೆ ಪರಿಣಾಮ ಬೀರಲಿದೆ. ಈ ಸ್ಥಳದಲ್ಲಿ ಘಟಕ ನಿರ್ಮಾಣ ಮಾಡಿದರೆ ಜನರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂದು ಶಾಸಕರಿಗೆ ನೀಡಿದ ಸಲಹೆಗೆ ಮನ್ನಣೆ ನೀಡದಿರುವುದು ರಾಜೀನಾಮೆಗೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ.ಶಾಸಕರಿಗೆ ಪತ್ರ :
ಹರೀಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕೇಗೌಡನದೊಡ್ಡಿ ಗ್ರಾಮದ 8ನೇ ತರಗತಿ ಸಿ.ಎಸ್. ವರ್ಷ ಮತ್ತು 7ನೇ ತರಗತಿ ವಿದ್ಯಾರ್ಥಿನಿ ಭಾವೈಕ್ಯ ಎನ್.ಗೌಡ ರಾಮನಗರ ಶಾಸಕ ಎಚ್.ಎ.ಇಕ್ಬಾಲ್‌ಹುಸೇನ್ ಅವರಿಗೆ ತ್ಯಾಜ್ಯ ಘಟಕ ನಿರ್ಮಾಣ ಮಾಡದಂತೆ ಪತ್ರ ಬರೆದು ಮನವಿ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.