ಮಂಗಳೂರು: ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಿದ ಬೆನ್ನಿಗೇ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಕಾವೂರು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಈ ಮಧ್ಯೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಮೂರು ದಿನಗಳೊಳಗೆ ವಿಚಾರಣೆಗೆ ಹಾಜರಾಗುವಂತೆ ಠಾಣಾ ಇನ್‌ಸ್ಪೆಕ್ಟರ್ ರಾಘವೇಂದ್ರ ಬೈಂದೂರು ಅವರು ಗುರುವಾರ ನೋಟಿಸ್ ಜಾರಿ ಮಾಡಿದ್ದರು. ಈ ನಡುವೆ ಶಾಸಕ ಡಾ.ಭರತ್ ಶೆಟ್ಟಿ ಕೋರ್ಟ್ ಮೆಟ್ಟಿಲೇರಿದ್ದು, ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶಸಂತೋಷ್ ಗಜಾನನ ಭಟ್ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿ ಆದೇಶಿಸಿದರು. ಶಾಸಕರ ಪರವಾಗಿ ಹಿರಿಯ ವಕೀಲ ಅರುಣ್‌ಶ್ಯಾಮ್ ವಾದಿಸಿದ್ದರು.ಮಂಗಳೂರು ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ಅನಿಲ್ ಕುಮಾರ್ ನೀಡಿದ ದೂರಿನ ಮೇರೆಗೆ ಶಾಸಕ ಡಾ.ಭರತ್ ಶೆಟ್ಟಿ ವಿರುದ್ಧ ಮಂಗಳವಾರ ರಾತ್ರಿ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್) 353 ಸೆಕ್ಷನ್ ಅಡಿಯಲ್ಲಿ ಕಾವೂರು ಠಾಣೆಯಲ್ಲಿ ಕೇಸು ದಾಖಲಿಸಲಾಗಿತ್ತು.
ಲೋಕಸಭೆಯಲ್ಲಿ ಹಿಂದು ನಿಂದನೆಗಾಗಿ ರಾಹುಲ್ ಗಾಂಧಿ ವಿರುದ್ಧ ಕಾವೂರಿನಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ರಾಹುಲ್ ಗಾಂಧಿ ಬಗ್ಗೆ ಕೇಳಿದರೆ ಲೋಕಸಭೆಯಲ್ಲಿ ಕೆನ್ನೆಗೆ ಬಾರಿಸಬೇಕಿತ್ತು ಎಂದು ಅನಿಸುತ್ತಿದೆ ಎಂದು ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಮುಖಂಡರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತಲ್ಲದೆ, ಡಾ.ಭರತ್ ಶೆಟ್ಟಿ ವಿರುದ್ಧ ಸ್ವಯಂಪ್ರೇರಿತ ಕೇಸು ದಾಖಲಿಸುವಂತೆ ಒತ್ತಾಯಿಸಲಾಗಿತ್ತು.ಬಿಎನ್‌ಎಸ್ ಅಡಿ ಮೊದಲ ಕೇಸ್, ಮೊದಲ ಜಾಮೀನು
ದೇಶಾದ್ಯಂತ ಜಾರಿಯಾದ ಭಾರತೀಯ ನ್ಯಾಯ ಸಂಹಿತೆ(ಬಿಎನ್ಎಸ್) ಅಡಿಯಲ್ಲಿ ಶಾಸಕರೊಬ್ಬರ ವಿರುದ್ಧ ದಾಖಲಾದ ಹಾಗೂ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರಾದ ರಾಜ್ಯದ ಮೊದಲ ಪ್ರಕರಣ ಇದಾಗಿದೆ. ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದಲ್ಲಿ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವಿರುದ್ಧ ಮಂಗಳವಾರ ರಾತ್ರಿ ಕಾವೂರು ಪೊಲೀಸರು ಬಿಎನ್‌ಎಸ್ ಅಡಿ 353 ಮತ್ತು 351 ಸೆಕ್ಷನ್ ಅನ್ವಯ ಕೇಸು ದಾಖಲಿಸಲಾಗಿತ್ತು. ಈ ಬಗ್ಗೆ ಹೈಕೋರ್ಟ್‌ನ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಗುರುವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಇದು ಕೂಡ ಈ ಕೇಸಿನಲ್ಲಿ ಮೊದಲ ನಿರೀಕ್ಷಣಾ ಜಾಮೀನು ಆಗಿದೆ.