ಬಳ್ಳಾರಿ: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಏಪ್ರಿಲ್ 26ರಂದು ಲೋಕಸಭಾ ಚುನಾವಣೆ ಪ್ರಚಾರಕ್ಕೆಂದು ನಗರಕ್ಕೆ ಆಗಮಿಸಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ತಿಳಿಸಿದರು.
ರಾಹುಲ್ ಗಾಂಧಿ ಜತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ಸಮಾವೇಶ ಯಶಸ್ವಿ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಬಳ್ಳಾರಿಗೆ ಆಗಮಿಸಿದ್ದರು. ಹೀಗಾಗಿ, ಐದು ಜನ ಶಾಸಕರು ಆಯ್ಕೆಯಾದೆವು. ಲೋಕಸಭಾ ಚುನಾವಣೆಗೂ ರಾಹುಲ್ ಅವರು ಬಂದು ಜಿಲ್ಲೆಯ ಮತದಾರರಿಂದ ಮತಯಾಚನೆ ಮಾಡಲಿದ್ದಾರೆ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ನಮಗೆ ವರವಾಗಲಿವೆ. ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ. ರಾಜ್ಯದ ಜನರು ಕೇಂದ್ರದ ದುರಾಡಳಿತದಿಂದ ರೋಸಿ ಹೋಗಿದ್ದಾರೆ ಎಂದರು.
ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಮಾತನಾಡಿ, ಬಿಜೆಪಿಯಿಂದ ನಾಲ್ವರು ಸಂಸದರಾಗಿ ಈವರೆಗೆ ಆಯ್ಕೆಗೊಂಡಿದ್ದು ಬಳ್ಳಾರಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು.
ಚುನಾವಣೆಯಲ್ಲಿ ಗೆದ್ದ ಬಳಿಕ ನಗರದಲ್ಲಿ ನನೆಗುದಿಗೆ ಬಿದ್ದಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಕೇಂದ್ರದ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಈ.ತುಕಾರಾಂ ತಿಳಿಸಿದರು.