ಸಚಿವ ಸತೀಶ್ ಜಾರಕಿಹೊಳಿ ಅವರು 2028ಕ್ಕೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ ಎಂದು ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ ಸಿಂಗ್ ಹೇಳಿದ್ದಾರೆ.
ರಾಯಚೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ. ಈ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಸಚಿವ ಸತೀಶ್ ಜಾರಕಿಹೊಳಿ ಅವರು 2028ಕ್ಕೆ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ ಎಂದು ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯ ಸಿಂಗ್ ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಯಾಗರಾಜ್‌ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರ ಅಭಿಮಾನಿಗಳು ಮುಖ್ಯಮಂತ್ರಿಯಾಗಲೆಂದು ಹರಕೆ ತೀರಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಸಿಎಂ ಖುರ್ಚಿ ಖಾಲಿ ಇಲ್ಲ. 2028ಕ್ಕೆ ನಾನು ಸಿಎಂ ಹುದ್ದೆ ಆಕಾಂಕ್ಷಿ ಎಂದು ಸತೀಶ್ ಜಾರಕಿಹೊಳಿ ಅವರೇ ಹೇಳಿದ್ದಾರೆಂದು ತಿಳಿಸಿದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆ ಮೂಲಕ ಮೆಚ್ಚುಗೆಗೆ ಪಾತ್ರವಾಗಿದೆ. ಸರ್ಕಾರ ನಡೆಸಲು ಯಾವುದೇ ಸಮಸ್ಯೆಯಿಲ್ಲ. ಊಹಾಪೂಹಗಳಿಗೆ ಯಾರು ಕಿವಿಗೊಡಬಾರದು ಎಂದು ಸ್ಪಷ್ಟಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಮೂರು ಬಾರಿ ಶಾಸಕನಾಗಿ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾಗಿ, ವಿರೋಧ ಪಕ್ಷದ ಮುಖ್ಯ ಸಚೇತಕನಾಗಿ ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷನಾಗಿ ಶಿಸ್ತಿನ ಶಿಪಾಯಿಯಂತೆ ಕೆಲಸ ಮಾಡಿದ್ದೇನೆ. ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ನಮ್ಮ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿದ್ದೇನೆ. ನಮ್ಮ ತಂದೆ ರಾಜಕೀಯ ತಾಳ್ಮೆಯಿಂದ ಕಾಯುವ ಆಟ ಎಂದು ಹೇಳುತ್ತಿದ್ದರು. ಹಾಗಾಗಿ ನಾನು ತಾಳ್ಮೆಯಿಂದ ಕಾಯುತ್ತಿದ್ದೇನೆ. ಸಮಯ ಬರುತ್ತದೆ ಎಂದು ಪ್ರತಿಕ್ರಿಯಿಸಿದರು.