ರಾಮನಗರ: ರೈಲ್ವೆ ನೇಮಕಾತಿ ಪ್ರವೇಶ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೇ ಬರೆಯಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಪ್ರಾಂತೀಯ ಭಾಷೆಗಳನ್ನು ಕಡೆಗಣಿಸಿ ಹಿಂದಿ ಹೇರಿಕೆ ಮತ್ತು ಇಂಗ್ಲಿಷ್ ಭಾಷೆಗೆ ಮನ್ನಣೆ ನೀಡಿದ್ದಾರೆ. ಕನ್ನಡ ಭಾಷೆಯಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಉಸ್ತುವಾರಿ ಅಧ್ಯಕ್ಷ ಶಿವುಗೌಡ ಮಾತನಾಡಿ, ಕೇಂದ್ರದಲ್ಲಿ ಅಧಿಕಾರ ನಡೆಸಿದ ಎಲ್ಲ ಸರ್ಕಾರಗಳು ಸಹ ಕನ್ನಡ ಭಾಷೆಗೆ, ಕನ್ನಡಿಗರಿಗೆ ಅಪಮಾನ ಮಾಡುವ ಮೂಲಕ ಕನ್ನಡಪರ ಸಂಘಟನೆಗಳನ್ನು ಕೆಣಕುವ ಕೆಲಸ ಮಾಡುತ್ತಿವೆ. ಕೇಂದ್ರ ಸರ್ಕಾರ ರೈಲ್ವೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಪರೀಕ್ಷೆ ವೇಳೆ ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯುವ ಹಕ್ಕನ್ನು ಕಸಿಯುವ ಕೆಲಸ ನಿರಂತರವಾಗಿ ಮಾಡುತ್ತಿದೆ ಎಂದು ಟೀಕಿಸಿದರು.ಕರ್ನಾಟಕದಿಂದ ಆಯ್ಕೆಯಾದ ಸಂಸದರು, ಕೇಂದ್ರ ಸಚಿವರು ಕಣ್ಣು ಬಾಯಿಮುಚ್ಚಿ ಕುಳಿತಿದ್ದಾರೆ. ಕೇಂದ್ರ ಸಚಿವರಾದ ಕುಮಾರಸ್ವಾಮಿ, ಸೋಮಣ್ಣ ಹಾಗೂ ಸಂಸದ ಡಾ. ಮಂಜುನಾಥ್ ಸೇರಿದಂತೆ ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಈ ಬಗ್ಗೆ ಎಚ್ಚೆತ್ತುಕೊಂಡು ಗ್ರಾಮೀಣ ಪ್ರತಿಭಾನ್ವಿತರು ಸಹ ಕನ್ನಡದಲ್ಲಿ ಪರೀಕ್ಷೆ ಎದುರಿಸಿ ಉದ್ಯೋಗ ಪಡೆಯುವ ಅವಕಾಶಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದರು.