ಭದ್ರಾವತಿ: ಕಡದಕಟ್ಟೆ ರೈಲ್ವೆ ಗೇಟ್ ಬಳಿ ನಿರ್ಮಾಣಗೊಂಡಿರುವ ರೈಲ್ವೆ ಮೇಲ್ಸೇತುವೆ ನಗರದ ಭವಿಷ್ಯದ ಬೆಳವಣಿಗೆಗೆ ಪೂರಕವಾಗಲಿದ್ದು, ಸಾರ್ವಜನಿಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಶನಿವಾರ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಶೇ.೬೦ ಮತ್ತು ರಾಜ್ಯ ಸರ್ಕಾರದ ಶೇ.೪೦ ಅನುದಾನದಲ್ಲಿ ಸುಮಾರು ೨೫ ಕೋಟಿ ರು. ವೆಚ್ಚದಲ್ಲಿ ಈ ಸೇತುವೆ ನಿರ್ಮಾಣಗೊಳಿಸಲಾಗಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಸಂಸದರು ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯವಿರಲಿ ಯಶಸ್ವಿಯಾಗಿ ಕೈಗೊಳ್ಳುವ ಮೂಲಕ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಮುನ್ನುಡಿ ಬರೆಯುತ್ತಿದ್ದಾರೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು ಮಾತನಾಡಿ, ಸಂಸದರು ಅಭಿವೃದ್ಧಿ ಕಾರ್ಯಗಳಲ್ಲಿ ಪಕ್ಷ, ಭೇದಭಾವ ತೋರದೆ ಎಲ್ಲರನ್ನು ಒಗ್ಗೂಡಿಸಿಕೊಂಡು ಮುನ್ನಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೈಲ್ವೆ ಯೋಜನೆಗಳು ಸೇರಿದಂತೆ ಬಹುತೇಕ ಯೋಜನೆಗಳು ಯಶಸ್ವಿಯಾಗಿ ಮುಕ್ತಾಯಗೊಂಡು ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತಿದ್ದಾರೆಂದು ಬಣ್ಣಿಸಿದರು.ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಉಪಾಧ್ಯಕ್ಷ ಮಣಿ ಎಎನ್‌ಎಸ್, ಹಿರಿಯ ನಗರಸಭಾ ಸದಸ್ಯ ಬಿ.ಕೆ ಮೋಹನ್, ಮುಖಂಡರಾದ ಶಾರದ ಅಪ್ಪಾಜಿ, ಜಗದೀಶ್, ಎಸ್. ಕುಮಾರ್, ಜಿ. ಧರ್ಮಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಪಾಲ್ಗೊಂಡಿದ್ದರು.