ಮಳೆ ಅಭಾವ: ಬರ ಪರಿಸ್ಥಿತಿಗೆ ಎದುರಿಸಲು ಸಜ್ಜಾಗಿ

KannadaprabhaNewsNetwork |  
Published : Jul 06, 2026, 03:00 AM IST
ಮಳೆ ಅಭಾವ: ಪರಿಸ್ಥಿತಿಗೆ ಎದುರಿಸಲು ಸಜ್ಜಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌಧರಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರಜಿಲ್ಲೆಯಲ್ಲಿನ ಕುಡಿಯುವ ನೀರಿನ ಲಭ್ಯತೆ, ಹಿಂಗಾರು ಹಾಗೂ ಮುಂಗಾರು ಮಳೆ ಪರಿಸ್ಥಿತಿ, ಮಳೆ ಕೊರತೆಯಾದಲ್ಲಿ ಪರ್ಯಾಯ ಮಾರ್ಗಗಳನ್ನು ಕೈಗೊಳ್ಳುವಂತೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕೈಗಾರಿಕೆ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರೂ ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌಧರಿ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಯಲ್ಲಿನ ಕುಡಿಯುವ ನೀರಿನ ಲಭ್ಯತೆ, ಹಿಂಗಾರು ಹಾಗೂ ಮುಂಗಾರು ಮಳೆ ಪರಿಸ್ಥಿತಿ, ಮಳೆ ಕೊರತೆಯಾದಲ್ಲಿ ಪರ್ಯಾಯ ಮಾರ್ಗಗಳನ್ನು ಕೈಗೊಳ್ಳುವಂತೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಕೈಗಾರಿಕೆ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರೂ ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌಧರಿ ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಪಂ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಂಗಾರು ಮಳೆ ಸಮರ್ಪಕವಾಗಿ ಆಗದೇ ಇದ್ದರೆ, ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಇದಕ್ಕೆ ಯಾವ ರೀತಿಯ ಮುನ್ನೆಚ್ಚರಿಕೆ ಯೋಜನೆ ರೂಪಿಸಲಾಗಿದೆ ಎಂಬುದರ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ನೀರಿನ ಮೂಲಗಳ ಸಂರಕ್ಷಣೆ, ಪರ್ಯಾಯ ನೀರು ಸರಬರಾಜು ವ್ಯವಸ್ಥೆ ಹಾಗೂ ತುರ್ತು ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಂಬಂಧಪಟ್ಟ ಇಲಾಖೆಗಳು ಪೂರ್ವಸಿದ್ಧತೆ ಮಾಡಿಕೊಂಡಿರಬೇಕು ಎಂದು ನಿರ್ದೇಶನ ನೀಡಿದರು.

ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಆಡಳಿತಾತ್ಮಕ ನಿರ್ವಹಣೆ, ಸಾರ್ವಜನಿಕ ಸೇವೆಗಳ ಅನುಷ್ಠಾನ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಕಾರ್ಯನಿರ್ವಹಣೆ ಕುರಿತು ಅಧಿಕಾರಿಗಳಿಂದ ಇಲಾಖಾವಾರು ಪರಿಶೀಲನೆ ನಡೆಸಿದ ಅವರು, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ತ್ವರಿತ ಮತ್ತು ಗುಣಮಟ್ಟದ ಸೇವೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿದ್ಯುತ್ ಪೂರೈಕೆ ಸಮರ್ಪಕವಾಗಿ ಆಗುತ್ತಿದೆಯೇ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಹಳ್ಳಿಗಳಿಗೆ ವಿದ್ಯುತ್ ಸರಬರಾಜು ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆಯೇ, ವಿದ್ಯುತ್ ವ್ಯತ್ಯಯಗಳು ಉಂಟಾಗುತ್ತಿವೆಯೇ ಹಾಗೂ ವಿದ್ಯುತ್ ಸಂಪರ್ಕದಿಂದ ವಂಚಿತವಾಗಿರುವ ಯಾವುದೇ ಗ್ರಾಮ ಅಥವಾ ವಸತಿ ಪ್ರದೇಶಗಳಿವೆಯೇ ಎಂಬುದರ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದರು. ಯಾವುದೇ ಗ್ರಾಮ ವಿದ್ಯುತ್ ಸೌಲಭ್ಯದಿಂದ ವಂಚಿತವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ರೈತರಿಗೆ ನಿಗದಿತ ಅವಧಿಯ ವಿದ್ಯುತ್ ಪೂರೈಕೆ ನಿರಂತರವಾಗಿ ದೊರೆಯುವಂತೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ವಿದ್ಯುತ್ ಸೇವೆ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಗ್ರಾಮೀಣಾಭಿವೃದ್ಧಿ ಯೋಜನೆಗಳು ಹಾಗೂ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಸಭೆಗೆ ಮಾಹಿತಿ ನೀಡಿದರು. ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪುವಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿಷೇಕ ಸೆಹರಾ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಮುಂಗಾರು ಮಳೆ ಪರಿಸ್ಥಿತಿ, ಮಳೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ವಿಪತ್ತು ನಿರ್ವಹಣೆಗೆ ಕೈಗೊಂಡಿರುವ ಸಿದ್ಧತೆಗಳ ಕುರಿತು ಸಭೆಗೆ ಮಾಹಿತಿ ನೀಡಿದರು. ಇದೇ ವೇಳೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕಾರ್ಯ ಜಿಲ್ಲೆಯಾದ್ಯಂತ ಸುಸೂತ್ರವಾಗಿ ನಡೆಯುತ್ತಿದ್ದು, ಬೂತ್ ಮಟ್ಟದ ಅಧಿಕಾರಿಗಳ ಮೂಲಕ ಮನೆ ಮನೆಗೆ ತೆರಳಿ ಗಣತಿ ನಮೂನೆಗಳ ವಿತರಣೆ ಹಾಗೂ ಸಂಗ್ರಹ ಕಾರ್ಯ ಪ್ರಗತಿಯಲ್ಲಿದೆ.

- ಡಾ.ಆನಂದ.ಕೆ ಜಿಲ್ಲಾಧಿಕಾರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಳೆಗೆ ರೈತ ಸಂತಸ, ನಗರದಲ್ಲಿ ಅವಾಂತರ
ಮತದಾರರ ಪಟ್ಟಿವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ