
ಕಾರವಾರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು. ಸಾರ್ವಜನಿಕರಿಂದ ನೀರಿನ ಸಮಸ್ಯೆ ಕುರಿತು ಪ್ರತಿಭಟನೆಗಳು ನಡೆದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದರು.
ಕುಡಿಯುವ ನೀರಿನ ತುರ್ತು ಕಾಮಗಾರಿಗಳಿಗಾಗಿ ಈಗಾಗಲೇ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 1 ಕೋಟಿ ಅನುದಾನ ಒದಗಿಸಲಾಗಿದೆ. ಶಾಸಕರ ಅಧ್ಯಕ್ಷತೆಯ ಟಾಸ್ಕ್ ಫೋರ್ಸ್ ಮೂಲಕ ನೀರಿನ ಮೂಲಗಳನ್ನು ಗುರುತಿಸಿ ಕ್ರಿಯಾಯೋಜನೆ ರೂಪಿಸಲು ತಿಳಿಸಲಾಗಿದೆ. ಅನುದಾನದ ಕೊರತೆ ಎದುರಾದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಹೆಚ್ಚುವರಿ ಹಣ ತರಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದರ ಜತೆಗೆ ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 50 ಕೋಟಿ ಮೊತ್ತದ ತುರ್ತು ಸಾರ್ವಜನಿಕ ಕಾಮಗಾರಿಗಳ ಪ್ರಸ್ತಾವನೆ ರೂಪಿಸಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿಗೆ 1 ಕೋಟಿ ಅನುದಾನ ಒದಗಿಸುವ ನಿರ್ಧಾರವೂ ಆಗಿದೆ ಎಂದು ತಿಳಿಸಿದರು.ರಾಜ್ಯದಿಂದ ಗಡಿ ದಾಟಿ ನೆರೆ ರಾಜ್ಯಗಳಿಗೆ ಅಕ್ರಮವಾಗಿ ದೊಡ್ಡ ಪ್ರಮಾಣದಲ್ಲಿ ರೆಕ್ಟಿಫೈಡ್ ಸ್ಪಿರಿಟ್ ಸಾಗಾಟವಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ. ಈ ಸಂಬಂಧ ಅಬಕಾರಿ ಮತ್ತು ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಈಗಾಗಲೇ ತನಿಖೆ ಆರಂಭವಾಗಿದ್ದು, ಕೆಲವು ಟ್ಯಾಂಕರ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದರು.
ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಹಾಗೂ ಸರ್ಕಾರದ ನಾಯಕರ ನಡುವೆ ಭಿನ್ನಾಭಿಪ್ರಾಯವಿದೆ ಎಂಬ ಬಿಜೆಪಿ ನಾಯಕ ಆರ್. ಅಶೋಕ್ ಅವರ ಹೇಳಿಕೆಯನ್ನು ಸಚಿವರು ತಳ್ಳಿಹಾಕಿದರು. ಯಡಿಯೂರಪ್ಪ, ಸದಾನಂದ ಗೌಡ ಹಾಗೂ ಜಗದೀಶ್ ಶೆಟ್ಟರ್ ಅವರ ಅವಧಿಯಲ್ಲಿನ ಬೆಳವಣಿಗೆಗಳು ಅಶೋಕ್ ಅವರಿಗೆ ಪದೇಪದೇ ಕನಸಿನಲ್ಲಿ ಬರುತ್ತಿವೆ. ಬೆಳಗ್ಗೆ ಎದ್ದು ಆ ಕನಸುಗಳನ್ನೇ ಅವರು ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಬೇಡ್ತಿ ನದಿ ತಿರುವು ಯೋಜನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಯೋಜನೆಯ ಡಿಪಿಆರ್ ಸಿದ್ಧಪಡಿಸುವ ಪ್ರಕ್ರಿಯೆಗೆ ಸ್ಥಳೀಯ ಶಾಸಕರು ಹಾಗೂ ಸಾರ್ವಜನಿಕರು ವ್ಯಕ್ತಪಡಿಸುತ್ತಿರುವ ವಿರೋಧ ಮತ್ತು ಇದರಿಂದ ಜಿಲ್ಲೆಗೆ ಹಾನಿಯಾಗಬಹುದು ಎಂಬ ಆತಂಕ ತಮ್ಮ ಗಮನದಲ್ಲಿದೆ ಎಂದರು.