ಬಾಲ್ಯವಿವಾಹ, ಪೋಕ್ಸೊ ಬಗ್ಗೆ ಜಾಗೃತಿ ಮೂಡಿಸಿ

KannadaprabhaNewsNetwork |  
Published : Jun 05, 2025, 02:17 AM IST
ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ನಡೆಯಿತು.  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರ ಸಹಯೋಗದೊಂದಿಗೆ ಬಾಲ್ಯವಿವಾಹ ಹಾಗೂ ಪೋಕ್ಸೊ ಕಾಯ್ದೆಗಳ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರ ಸಹಯೋಗದೊಂದಿಗೆ ಬಾಲ್ಯವಿವಾಹ ಹಾಗೂ ಪೋಕ್ಸೊ ಕಾಯ್ದೆಗಳ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಬಾಲ್ಯವಿವಾಹವನ್ನು ತಡೆಗಟ್ಟಲು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಶಿಕ್ಷಣ ಸಂಸ್ಥೆಗಳಲ್ಲಿ ಸಮಿತಿಗಳನ್ನು ರಚಿಸಿ, ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳು, ಪಾಲಕರು ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಬಾಲ್ಯವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಶಾಲೆಗಳಲ್ಲಿ ಒಂದು ವಾರಗಳಿಂತ ಹೆಚ್ಚು ಗೈರಾದ ಮಕ್ಕಳ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಖುದ್ದಾಗಿ ಶಾಲೆಗಳಿಗೆ ಭೇಟಿ ನೀಡಿ ಸಮಗ್ರ ಮಾಹಿತಿ ಪಡೆಯಬೇಕು. ಬಾಲ್ಯ ವಿವಾಹ ಕಂಡುಬಂದಲ್ಲಿ ಅವುಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು. ಬಾಲ್ಯವಿವಾಹ ಕಂಡುಬಂದಲ್ಲಿ ಬಾಲ್ಯ ವಿವಾಹಕ್ಕೆ ಪ್ರೋತ್ಸಾಹ ನೀಡುವವರೂ ಸೇರಿದಂತೆ ಮಗುವಿನ ಪೋಷಕರು, ಮಗುವಿನ ಜವಾಬ್ದಾರಿಯನ್ನು ಹೊತ್ತವರ, ಭಾಗವಹಿಸಿದ ಇತರರ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಅವರು ನಿರ್ದೇಶನ ನೀಡಿದರು. ಬಾಲ್ಯ ವಿವಾಹ ನಡೆಯದಂತೆ ನೋಡಿಕೊಳ್ಳಬೇಕು ಹಾಗೂ ಬಾಲ್ಯ ವಿವಾಹ ತಡೆಗೆ ಇರುವ ಸಹಾಯವಾಣಿ ಸಂಖ್ಯೆ 1098 ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು. ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ ಅಂತಹ ಗ್ರಾಮ ಪಂಚಾಯತಿಗಳಿಗೆ ಸನ್ಮಾನಿಸುವ ಕಾರ್ಯ ನಡೆಯಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.ಬಾಣಂತಿ ಮತ್ತು ಗರ್ಭಿಣಿ ಮಹಿಳೆಯರ ಕ್ಷೇಮಾಭಿವೃದ್ಧಿಗಾಗಿ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರ ಮೂಲಕ ತಾಯಿ ಮತ್ತು ಮಗುವಿನ ಆರೋಗ್ಯ ಮತ್ತು ಪೋಷಣೆಯನ್ನು ಉತ್ತಮಪಡಿಸಲು ಅನುವಾಗಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನೊಂದ ಮಹಿಳೆಯರಿಗಾಗಿ ಸ್ಥಾಪಿಸಲಾಗಿರುವ ಸಖಿ ಒನ್ ಸ್ಟಾಪ್ ಸೆಂಟರ್‌ನಲ್ಲಿ ನೊಂದ ಮಹಿಳೆಯರಿಗೆ ಆರೋಗ್ಯ, ಆರೈಕೆ, ಕಾನೂನು ನೆರವು, ವಸತಿ ಹಾಗೂ ಆಪ್ತ ಸಮಾಲೋಚನೆ ಇತ್ಯಾದಿ ಸೇವೆಗಳನ್ನು ಸಮರ್ಪಕವಾಗಿ ದೊರಕುವಂತೆ ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.ಪೋಕ್ಸೋ ಹಾಗೂ ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ಎಲ್ಲ ರೀತಿಯ ಸಹಾಯ ಸಹಕಾರವನ್ನು ಪೊಲೀಸ್ ಇಲಾಖೆ ವತಿಯಿಂದ ನೀಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಲಕ್ಷ್ಮಣ ನಿಂಬರಗಿ ಹೇಳಿದರು. ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಎಎಸ್ಪಿ ಶಂಕರ್ ಮಾರಿಹಾಳ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಡಿಎಚ್ಓ ಡಾ.ಸಂಪತ್ತ ಗುಣಾರೆ, ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಸಿ.ಬಿ.ಕುಂಬಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಟಿ.ಎಸ್.ಕೊಲ್ಹಾರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.-----

ಕೋಟ್‌ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ನೊಂದ ಮಹಿಳೆಯರಿಗಾಗಿ ಜಿಲ್ಲೆಯಲ್ಲಿ ಒಟ್ಟು 6 ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ಕೇಂದ್ರಗಳಲ್ಲಿ ನೊಂದ ಮಹಿಳೆಯರಿಗೆ ಆಪ್ತ ಸಮಾಲೋಚನೆ, ಕಾನೂನು ಅರಿವು, ನೆರವು ನೀಡಲಾಗುವುದು. ಅಂತಹ ಮಹಿಳೆಯರಿಗೆ ಆತ್ಮ ಸ್ಥೈರ್ಯ ನೀಡಿ ಪುನಃ ಕುಟುಂಬದೊಂದಿಗೆ ಸೇರಿಸುವ ಕಾರ್ಯವಾಗಬೇಕು. ಸಾಂತ್ವನ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳ ಗಮನಕ್ಕೆ ತಂದು ಇತ್ಯರ್ಥ ಪಡೆಸಿಕೊಳ್ಳಿ.

ರಿಷಿ ಆನಂದ, ಜಿಪಂ ಸಿಇಒ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇದು ಹೊಸ ತೆರಿಗೆ ಹಾಕದಜನಹಿತ ಬಜೆಟ್‌: ಅಶೋಕ್‌
ಅರವಿಂದ್‌ ಲಿಂಬಾವಳಿ ಅದ್ಧೂರಿ ಹುಟ್ಟುಹಬ್ಬ