ಹೊಸಪೇಟೆ: ಆರ್‌ಟಿಇ ಮಕ್ಕಳ ಶಿಕ್ಷಣ ಹಕ್ಕಾಗಿದೆ. ಜೊತೆಗೆ ಮಕ್ಕಳ ರಕ್ಷಣೆಗೆ ಇರುವ ಕಾನೂನುಗಳ ಬಗ್ಗೆ ಪ್ರತಿ ಶಾಲೆಯಲ್ಲಿ ಜಾಗೃತಿ ಮೂಡಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೊಸಂಬೆ ಹೇಳಿದರು.ನಗರದ ಜಿಪಂ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು,
ಸ್ಯಾಟ್ಸ್ ನಿಂದ ಕೇಂದ್ರ ಸರ್ಕಾರದ ಅಪಾರ ತಂತ್ರಾಂಶದಲ್ಲಿ ಬಾಕಿ ಉಳಿದಿರುವ ಮಕ್ಕಳ ದಾಖಲಾತಿಯನ್ನು ಒಂದು ತಿಂಗಳೊಳಗಾಗಿ ದಾಖಲಿಸಬೇಕು. ಜಿಲ್ಲೆಯಲ್ಲಿ 88 ಬಾಲ್ಯ ವಿವಾಹ ನಡೆದಿದ್ದು, 67 ಪ್ರಕರಣ ದಾಖಲಿಸಲಾಗಿದೆ. ಉಳಿದ 21 ಪ್ರಕರಣಗಳು ಯಾವ ಕಾರಣಕ್ಕಾಗಿ ದಾಖಲಿಸಿಲ್ಲ, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಒಂದು ವಾರದೊಳಗೆ ದಾಖಲಿಸಬೇಕು. ವಿಫಲರಾದ ಅಧಿಕಾರಿಗಳ ವಿರುದ್ಧ ಬಾಲ್ಯವಿವಾಹ ನಿಷೇಧ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮಕ್ಕಳಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು ಎಂದು ಸಂಬಂಧಪಟ್ಟ ಸಿಆರ್‌ಪಿ ಮತ್ತು ಮುಖ್ಯ ಗುರುಗಳ ಸಭೆ ಕರೆಯುವ ಮೂಲಕ ಮಾಹಿತಿ ಪಡೆದುಕೊಂಡು ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥಾಪಕರಿಂದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಬೇಕು. ಅಕಾಲಿಕವಾಗಿ ಮರಣ ಹೊಂದುವ ವಿದ್ಯಾರ್ಥಿಗಳ ಕುಟುಂಬದವರಿಗೆ ಶಿಕ್ಷಣ ಇಲಾಖೆ ಹಾಗೂ ವಿವಿಧ ಇಲಾಖೆಯಿಂದ ಪರಿಹಾರವನ್ನು ನೀಡಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೆಂಕಟೇಶ ರಾಮಚಂದ್ರಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುದೀಪ್ ಕುಮಾರ್ ಉಂಕಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.