ಶಿವಮೊಗ್ಗ: ಬಾಲ ಕಾರ್ಮಿಕತೆಯನ್ನು ಹೋಗಲಾಡಿಸಲು ಜಾಗೃತಿ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ತಂಡ ಕಾರ್ಯಪ್ರವೃತ್ತರಾಗಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ನಡೆಸಿದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.ಬಾಲ ಕಾರ್ಮಿಕ ಪದ್ಧತಿಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಅರಿವು ಹೆಚ್ಚಿಸಬೇಕು. ಭಯ ಅಲ್ಲ, ಬದಲಾಗಿ ಜಾಗೃತಿ ಮೂಡಿಸಬೇಕು. ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ಅಭಿಯಾನದ ರೀತಿಯಲ್ಲಿ ಜಾಗೃತಿ ಮೂಡಿಸಬೇಕು. ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಈ ವರ್ಷ 8 ಬಾಲ ಕಾರ್ಮಿಕ ಪ್ರಕರಣ ವರದಿಯಾಗಿದೆ. 5 ಪ್ರಕರಣಗಳು ಬೇರೆ ರಾಜ್ಯದಿಂದ ವಲಸೆ ಬಂದಂತಹ ಪ್ರಕರಣ ಆಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಒಂದು ಪ್ರಕರಣ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಇದೆ. ಮತ್ತಿಬ್ಬರನ್ನು ಮುಖ್ಯವಾಹಿನಿಗೆ ತಂದು ಶಿಕ್ಷಣ ಕೊಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚು ಇಲ್ಲ. ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳ ಮೂಲಕ ಈ ಸಂಖ್ಯೆಯನ್ನೂ ತಗ್ಗಿಸಬಹುದು ಎಂದು ತಿಳಿಸಿದರು.ಕಾರ್ಮಿಕರಲ್ಲದೇ ಇರುವವರೂ ಕಾರ್ಮಿಕರೆಂದು ನೋಂದಣಿಯಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸೆಕ್ಟರ್‌ವಾರು ೪೩ ಸೆಕ್ಟರ್‌ಗಳಲ್ಲಿ ಹೊಸದಾಗಿ ವಾಹನಗಳನ್ನು ಖರೀದಿಸಿ, ಕಟ್ಟಡ ನಿರ್ಮಾಣ ಸ್ಥಳಗಳಿಗೆ ತೆರಳಿ ಕಾರ್ಮಿಕರ ನೈಜತೆಯನ್ನು ಪರಿಶೀಲಿಸಲಾಗುವುದು ಎಂದು ಹೇಳಿದರು.ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಸೊಸೈಟಿಗಳನ್ನು ರಚಿಸಿ, ಜಿಲ್ಲಾಧಿಕಾರಿಗಳ ಮುಖಾಂತರವೇ ಹೊರಗುತ್ತಿಗೆ ನೌಕರರಿಗೆ ವೇತನ ಮತ್ತು ಇತರೆ ಸೌಲಭ್ಯಗಳನ್ನು ನೀಡಲಾಗುವುದು. ಕಾರ್ಮಿಕರ ಸಮಸ್ಯೆಗಳನ್ನು ಹೋಗಲಾಡಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇನ್ನು ಆರು ತಿಂಗಳಲ್ಲಿ ಹಲವಾರು ಬದಲಾವಣೆ ಆಗಲಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ಹಲವು ಇಲಾಖೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಅಧಿಕೃತ ಲೈಸೆನ್ಸ್ ಪಡೆಯದೇ ಹೊರಗುತ್ತಿಗೆ ಏಜೆನ್ಸಿ ನಡೆಸುತ್ತಿರುವ ಬಗ್ಗೆ, ಹಲವು ಕಾರ್ಮಿಕ ಸಮಸ್ಯೆಗಳು ಹಾಗೂ ಕಾರ್ಮಿಕರಲ್ಲದೇ ಇರುವವರೂ ಕಾರ್ಮಿಕರಾಗಿ ನೋಂದಣಿಯಾಗುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಶಾಸಕ ಗೋಪಾಲಕೃಷ್ಣ ಬೇಳೂರು, ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು, ಡಾ.ಧನಂಜಯ ಸರ್ಜಿ, ವಿಧಾನಸಭಾ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್, ಕಾರ್ಮಿಕ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಿಇಒ ಮತ್ತು ಕಾರ್ಯದರ್ಶಿ ಡಿ.ಭಾರತಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ.ಸಿಇಒ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಜರಿದ್ದರು.