
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುನಗರದ ಕಾಫಿ ಮಂಡಳಿ ಕಚೇರಿಯಲ್ಲಿರುವ ಕಾಫಿ ಮ್ಯೂಸಿಯಂಗೆ ರಾಜ್ಯಸಭಾ ಸದಸ್ಯೆ ಹಾಗೂ ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ ಡಾ. ಸುಧಾ ಮೂರ್ತಿ ಅವರು ಶುಕ್ರವಾರ ದಿಢೀರ್ ಭೇಟಿ ನೀಡಿ ಕಾಫಿ ಮಂಡಳಿ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.ವೈಯಕ್ತಿಕ ಕಾರ್ಯನಿಮಿತ್ತ ಚಿಕ್ಕಮಗಳೂರಿಗೆ ಆಗಮಿಸಿದ್ದ ಅವರು, ಕಾಫಿ ಮ್ಯೂಸಿಯಂಗೆ ಭೇಟಿ ನೀಡಿ ಭಾರತದಲ್ಲಿ ಕಾಫಿ ಬೆಳೆಯ ಆರಂಭದ ಇತಿಹಾಸ, ಕಾಫಿ ಉತ್ಪಾದನೆ, ಅಭಿವೃದ್ಧಿ ಹಾಗೂ ಗುಣಮಟ್ಟದ ಕಾಫಿ ಉತ್ಪಾದನೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ಕಾಫಿ ಬೆಳೆಗಾರರ ಹಿತರಕ್ಷಣೆ ಹಾಗೂ ಗುಣಮಟ್ಟದ ಕಾಫಿ ಉತ್ಪಾದನೆಗೆ ಸಂಬಂಧಿಸಿದ ವಿಷಯಗಳನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಸುಧಾ ಮೂರ್ತಿ ತಿಳಿಸಿದರು.ಈ ಸಂದರ್ಭದಲ್ಲಿ ಕಾಫಿ ಮಂಡಳಿ ಸಿಇಒ ಎಂ. ಕೂರ್ಮಾರಾವ್, ಉಪ ನಿರ್ದೇಶಕ ತಂಗರಾಜು ಸೇರಿದಂತೆ ಮಂಡಳಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.