
ಮಡಿಕೇರಿ: ಶಿಕ್ಷಕರು ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳಾಗಿದ್ದು, ಅವರ ಸೇವೆ ಮತ್ತು ತ್ಯಾಗ ಗುರುತಿಸಿ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ.ಕಾಮತ್ ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿ ನ. 23 ರಂದು ಮುಕ್ತಾಯಗೊಳ್ಳಲಿದೆ. ಈ ಸಂದರ್ಭ ಶಿಕ್ಷಕರ ಸೇವೆ ಸ್ಮರಿಸಿ, ಅವರಿಗೆ ಗೌರವ ಸಲ್ಲಿಸಬೇಕೆಂಬ ಆಶಯದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈ ಹಿಂದೆ 20 ದತ್ತಿ ಕಾರ್ಯಕ್ರಮಗಳಿದ್ದು, ಸಾರ್ವಜನಿಕರ ಸಹಕಾರದಿಂದ ಅವುಗಳ ಸಂಖ್ಯೆಯನ್ನು 45ಕ್ಕೆ ಹೆಚ್ಚಿಸಲಾಗಿದೆ. ಪ್ರಸಕ್ತ ವರ್ಷ 45 ದತ್ತಿ ಕಾರ್ಯಕ್ರಮಗಳ ಪೈಕಿ 40 ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ದತ್ತಿ ಕಾರ್ಯಕ್ರಮಗಳ ಮೂಲಕ ವರ್ಷವಿಡೀ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಿದೆ. ಅದರಂತೆ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.ಕ.ಸಾ.ಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಶಿಕ್ಷಣ ಎನ್ನುವುದು ಲಾಭದಾಯಕ ಉದ್ಯೋಗವಲ್ಲ, ಅದೊಂದು ಪವಿತ್ರ ವ್ರತವಾಗಿದೆ. ಮಕ್ಕಳಿಗೆ ಕೇವಲ ಜ್ಞಾನ ನೀಡುವುದಷ್ಟೇ ಶಿಕ್ಷಣದ ಉದ್ದೇಶವಾಗದೆ, ಅವರ ಹೃದಯ ಮತ್ತು ಭಾವನೆಗಳನ್ನು ಅರಳಿಸಿ, ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಮಾರ್ಗದರ್ಶನ ನೀಡುವುದು ಶಿಕ್ಷಕರ ಪ್ರಮುಖ ಕರ್ತವ್ಯ ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳನ್ನು ಅಜ್ಞಾನದ ಹಂತದಿಂದ ಸುಜ್ಞಾನದತ್ತ, ಸುಜ್ಞಾನದಿಂದ ಪ್ರಜ್ಞಾನದತ್ತ ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಗಣಪತಿ ಮಾತನಾಡಿದರು. ಸನ್ಮಾನಿತರ ಪರವಾಗಿ ಶಿಕ್ಷಕ ಚಂದ್ರಶೇಖರ್ ಮಾತನಾಡಿದರು.
ಕಸಾಪ ತಂಡದವರು ನಾಡಗೀತೆ ಹಾಡಿದರು. ಕಸಾಪ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಅವರು ಸ್ವಾಗತಿಸಿದರು. ಉ.ರಾ.ನಾಗೇಶ್ ನಿರೂಪಿಸಿದರು, ಮಡಿಕೇರಿ ತಾಲೂಕು ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್ ವಂದಿಸಿದರು.