ಸರ್ಕಾರಿ ನೌಕರರು ಡಿಸಿ ಯಶವಂತ್ ಮೂಲಕ ರಾಜ್ಯ ಸರ್ಕಾರಕ್ಕೆ ಪತ್ರಕನ್ನಡಪ್ರಭ ವಾರ್ತೆ ರಾಮನಗರ
ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಅಧ್ಯಕ್ಷ ಕೆ.ಸತೀಶ್ ಮತ್ತು ಜಿಲ್ಲಾ ಕಾರ್ಯದರ್ಶಿ ಶಿವಸ್ವಾಮಿ ನೇತೃತ್ವದಲ್ಲಿ ಸರ್ಕಾರಿ ನೌಕರರು ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ರಾಜ್ಯ 7ನೇ ವೇತನ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಫಾರಸ್ಸು ವರದಿಯಲ್ಲಿನ ಫಿಟ್ಮೆಂಟ್ ಸೌಲಭ್ಯವನ್ನು ಕನಿಷ್ಠ ಶೇ. 27.50ರಷ್ಟಕ್ಕೆ ಹೆಚ್ಚಿಸಿ ಕಾಲ್ಪನಿಕವಾಗಿ 2022ರ ಜುಲೈ 1 ರಿಂದ ಅನ್ವಯವಾಗುವಂತೆ ವೇತನ ನಿಗದಿಪಡಿಸಿ, 2024ರ ಏಪ್ರಿಲ್ 1 ರಿಂದ ಆರ್ಥಿಕ ಸೌಲಭ್ಯವನ್ನು ನೀಡಿ ಸರ್ಕಾರಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.ರಾಜ್ಯದ ಎನ್‌ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್‌ಪಿಎಸ್ ನೌಕರರನ್ನು ಒಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ, ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್‌ಪಿಎಸ್ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಎಂ.ಕಾಂತರಾಜು, ಖಜಾಂಚಿ ಎಂ.ಸಿ.ರಾಜಶೇಖರ ಮೂರ್ತಿ, ರಾಜ್ಯ ಪರಿಷತ್ ಸದಸ್ಯ ಬಿ.ಎಲ್. ಸುರೇಂದ್ರ, ಕಾರ್ಯಾಧ್ಯಕ್ಷ ಎನ್.ರಮೇಶ್, ಹಿರಿಯ ಉಪಾಧ್ಯಕ್ಷ ಭೈರಪ್ಪ, ಕಾರ್ಯಾಧ್ಯಕ್ಷ ರಾಜೇಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಸತೀಶ್ ಪಾದ್ರಳ್ಳಿ, ಚನ್ನಪಟ್ಟಣ ಕಾರ್ಯದರ್ಶಿ ಗುಂಡಪ್ಪ, ಚನ್ನಪಟ್ಟಣ ಖಜಾಂಚಿ ಚಿಕ್ಕಚನ್ನೇಗೌಡ ಮತ್ತಿತರರು ಹಾಜರಿದ್ದರು.