ಕನ್ನಡಪ್ರಭ ವಾರ್ತೆ ಮಣಿಪಾಲ
ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮಳ ಹೋರಾಟದ ಮನೋಭಾವ, ಆತ್ಮವಿಶ್ವಾಸ, ಶೌರ್ಯ, ಪರಾಕ್ರಮಗಳ ವ್ಯಕ್ತಿತ್ವ ಇಂದಿನ ಪ್ರತಿಯೊಬ್ಬ ಮಹಿಳೆಯರಿಗೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು.ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆ ಮನಸ್ಸು ಮಾಡಿದರೆ ಯಾವ ಸಾಧನೆಯನ್ನು ಬೇಕಾದರೂ ಮಾಡಬಹುದು ಎನ್ನುವುದಕ್ಕೆ ಸೂಕ್ತ ನಿದರ್ಶನ ಕಿತ್ತೂರು ರಾಣಿ ಚೆನ್ನಮ್ಮ. ಸಮಾಜಕ್ಕೆ ಮಾದರಿಯಾಗುವ ರೀತಿಯಲ್ಲಿ ಜೀವನ ನಡೆಸಿದ ಚೆನ್ನಮ್ಮರ ಆದರ್ಶಗಳನ್ನು ಯುವ ಪೀಳಿಗೆ ಜೀವನದಲ್ಲಿ ಅಳವಡಿಸಿ, ಪಾಲಿಸಬೇಕು ಎಂದರು.ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಾತನಾಡಿ, ರಾಣಿ ಚೆನ್ನಮ್ಮರ ದಿಟ್ಟತನ ಹಾಗೂ ಸ್ವಾಭಿಮಾನದ ಪ್ರತೀಕವಾದ ಜೀವನಶೈಲಿಯನ್ನು ಮಹಿಳೆಯರು ಸ್ಪೂರ್ತಿಯಾಗಿರಿಸಿಕೊಂಡು, ಆಧುನಿಕ ಸಮಾಜದಲ್ಲಿ ಪ್ರತಿನಿತ್ಯ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲಬೇಕು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಕಿತ್ತೂರು ರಾಣಿ ಚೆನ್ನಮ್ಮ ಅವರ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಬಾಲ್ಯದಿಂದಲೇ ಧೀರ ಮಹಿಳೆಯಾಗಿ ರೂಪುಗೊಂಡಿದ್ದ ಇವರು ಪುರುಷರಿಗೆ ಸರಿಸಮಾನವಾದ ಕತ್ತಿವರಸೆ, ಕುದುರೆ ಸವಾರಿ ಮುಂತಾದ ಕೌಶಲ್ಯಗಳನ್ನು ಮೈಗೂಡಿಸಿಕೊಂಡಿದ್ದರು. ಚೆನ್ನಮ್ಮಳು ತನ್ನ ಸಂಸ್ಥಾನ ಹಾಗೂ ಸ್ವಾತಂತ್ರ್ಯ ಉಳಿಸಿಕೊಳ್ಳಲು ನಡೆಸಿದ ಹೋರಾಟ, ತ್ಯಾಗ ಇಂದಿಗೂ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದೆ ಎಂದರು.ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ನಾಯ್ಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪ ಆರ್. ಲಮಾಣಿ, ಕ.ಸಾ.ಪ ದ ಮನೋಹರ್ ಹಾಗೂ ನರಸಿಂಹಮೂರ್ತಿ, ಕರ್ನಾಟಕ ರಕ್ಷಣಾ ವೇದಿಕೆಯ ಉಪಾಧ್ಯಕ್ಷ ಪ್ರಭಾಕರ ಪೂಜಾರಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತದ ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಜಿಲ್ಲಾ ಅಧ್ಯಕ್ಷ ಸಿದ್ದಬಸಯ್ಯ ಸ್ಯಾಮಿ ಚಿಕ್ಕಮಠ ವಂದಿಸಿದರು.