ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಸಂಬಂಧ ಶಾಸಕ ಎಚ್.ಡಿ.ರೇವಣ್ಣ ವಿರುದ್ಧದ ವಿಚಾರಣೆಯನ್ನು ಕಾನೂನು ರೀತಿ ಮುಂದುವರಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಗುರುವಾರ ಸೂಚಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಸಂಬಂಧ ಶಾಸಕ ಎಚ್.ಡಿ.ರೇವಣ್ಣ ವಿರುದ್ಧದ ವಿಚಾರಣೆಯನ್ನು ಕಾನೂನು ರೀತಿ ಮುಂದುವರಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಗುರುವಾರ ಸೂಚಿಸಿದೆ.
ಪ್ರಕರಣ ಸಂಬಂಧ ಮೈಸೂರು ಜಿಲ್ಲೆಯ ಕೆ.ಆರ್.ಪೇಟೆ ಠಾಣೆಗೆ ಸಂತ್ರಸ್ತೆ ಪುತ್ರ ನೀಡಿದ್ದ ದೂರಿನ ತನಿಖೆ ನಡೆಸಿದ್ದ ಸಿಐಡಿ ಪೊಲೀಸರು ತಮ್ಮ ವಿರುದ್ಧ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪಪಟ್ಟಿ ರದ್ದುಪಡಿಸಬೇಕು ಎಂದು ಕೋರಿ ಎಚ್.ಡಿ.ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಬುಧವಾರ ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹಾಜರಾಗಿ, ವಾದ ಮಂಡನೆಗೆ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಸರ್ಕಾರಿ ಅಭಿಯೋಜಕರು, ಪ್ರಕರಣದಲ್ಲಿ ದೋಷಾರೋಪ ಹೊರಿಸುವ ಪ್ರಕ್ರಿಯೆಗೆ ಈ ಹಿಂದೆ ನೀಡಲಾಗಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್ 2026ರ ಫೆ.5ರಂದು ಆದೇಶಿಸಿದೆ. ಈಗಾಗಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ಆರಂಭಿಸಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಪೀಠ, ದೋಷಾರೋಪ ನಿಗದಿ ಪ್ರಕ್ರಿಯೆ ನಡೆಸಲು ನೀಡಲಾಗಿದ್ದ ತಡೆಯಾಜ್ಞೆ ತೆರವುಗೊಳಿಸಿರುವುದರಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾನೂನು ಪ್ರಕಾರ ವಿಚಾರಣೆ ಮುಂದುವರಿಸಲಿ ಎಂದು ಸೂಚಿಸಿ, ಅರ್ಜಿ ವಿಚಾರಣೆ ಮುಂದೂಡಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.