ಕನ್ನಡಪ್ರಭ ವಾರ್ತೆ ಕೋಲಾರಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆ.೧೪ ರಂದು ರಾಷ್ಟ್ರೀಯ ಜನತಾ ನ್ಯಾಯಾಲಯ ನಡೆಯಲಿದ್ದು, ರಾಜೀ ಮೂಲಕ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳಲು ಮುಂದಾಗುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜಿ.ಎ ಮಂಜುನಾಥ ಸಲಹೆ ನೀಡಿದರು.ನಗರದ ನ್ಯಾಯಾಲಯದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳಬಹುದು ಎಂದು ತಿಳಿಸಿದರು. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಇವರ ನಿರ್ದೇನದಂತೆ ಕೋಲಾರ ಜಿಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಬಂಗಾರಪೇಟೆ, ಶ್ರೀನಿವಾಸಪುರ, ಮಾಲೂರು, ಮುಳಬಾಗಿಲು ಮತ್ತು ಕೆ.ಜಿ.ಎಫ್ ತಾಲ್ಲೂಕು ನ್ಯಾಯಾಲಯಗಳಲ್ಲಿ ಸೆ.೧೪ ರಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ರಾಷ್ಟ್ರೀಯ ಜನತಾ ನ್ಯಾಯಾಲಯ ಹಮ್ಮಿಕೊಳ್ಳಲಾಗುತ್ತಿದೆ. ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಅವಕಾಶವಿದೆ ಎಂದರು.
ರಾಜೀ ಸಂಧಾನದ ಮೂಲ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ ಎಸ್ ಹೊಸಮನಿ ಇದ್ದರು.