ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದಲ್ಲಿ ಉಡುಪಿ ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಡಾ. ಅಶೋಕ್ ಕಾಮತ್ ಮುಖ್ಯ ಅತಿಥಿಯಾಗಿದ್ದರು.
ಕನ್ನಡಪ್ರಭ ವಾರ್ತೆ ಉಡುಪಿ
ಹೆಚ್ಚುಹೆಚ್ಚು ಪುಸ್ತಕ ಓದುವುದರಿಂದ ಮಕ್ಕಳು ಮಾನಸಿಕವಾಗಿ ಪರಿಪಕ್ವರಾಗುತ್ತಾರೆ. ಮುಂದಿನ ಜೀವನದಲ್ಲಿ ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಗಳಿಸುತ್ತಾರೆ. ವಿವೇಚನಾಶಾಲಿಗಳಾಗಿ ಉತ್ತಮ ನಾಗರಿಕರು ಎನ್ನಿಸಿಕೊಳ್ಳುತ್ತಾರೆ ಎಂದು ಉಡುಪಿ ಜಿಲ್ಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಡಾ. ಅಶೋಕ್ ಕಾಮತ್ ಅಭಿಪ್ರಾಯಪಟ್ಟರು.ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ನಿರಂತರ ಅಭ್ಯಾಸ ಮತ್ತು ಸತತ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆದುಕೊಳ್ಳಬಹುದು ಎಂದು ತಿಳಿಸಿದರು.ಉಡುಪಿ ಡಯಟ್‌ನ ಉಪನ್ಯಾಸಕ ಯೋಗನರಸಿಂಹ ಸ್ವಾಮಿ, ಮಕ್ಕಳ ಕಲಿಕೆಗೆ ಪೂರಕವಾಗುವಂತ ಪೋಷಕರ ಜವಾಬ್ದಾರಿ ಮತ್ತು ಅಭ್ಯಾಸಗಳ ಬಗ್ಗೆ ತಿಳಿಸಿದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ನವ್ಯ ನಾಯಕ್, ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಪುಷ್ಪಾನಂದ ಫೌಂಡೇಶನ್ ವತಿಯಿಂದ ನೀಡಿದ ಸಿಹಿ ವಿತರಿಸಲಾಯಿತು. ಇಂದಿರಾ ಅವರು ಸ್ವಾಗತಿಸಿದರು. ಶೇಖರ್ ನಿರೂಪಿಸಿದರು. ಜ್ಯೋತಿ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.