ಗದಗ: ಬರಗಾಲ ತೀವ್ರವಾಗಿದೆ, ಇದರ ಗಾಂಭೀರ್ಯತೆ ಅರಿತು ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು. ಗ್ರಾಮೀಣ ಜನರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಜೆಜೆಎಂ ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಬೇಕು. ಈ ನಿಟ್ಟಿನಲ್ಲಿ ಆಯಾ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು ಗುತ್ತಿಗೆದಾರರೊಂದಿಗೆ ಹಾಗೂ ಪಿಡಿಒಗಳೊಂದಿಗೆ ಖುದ್ದು ಕಾಮಗಾರಿ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದರು.
ಬರಗಾಲದ ಕಾಮಗಾರಿ ಕೈಗೆತ್ತಿಕೊಂಡು ಶೀಘ್ರವಾಗಿ ನಿರ್ವಹಿಸಬೇಕು. ಗ್ರಾಮೀಣ ಭಾಗದ ಕಾಮಗಾರಿಗಳನ್ನು ಅಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸುವ ಮೂಲಕ ಸರ್ಕಾರದ ಅನುದಾನ ಸದ್ಬಳಕೆಯಾಗುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆಗೆ ವಾರಕ್ಕೊಂದು ಬಾರಿ ಸಭೆ ನಡೆಸಬೇಕು ಹಾಗೂ ಸ್ಥಳ ಪರಿಶೀಲನೆ ಮಾಡಬೇಕು. ವಾಸ್ತವಾಂಸ ಅರಿಯುವ ಮೂಲಕ ಸಮಸ್ಯೆಯ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು. ಬರ ನಿರ್ವಹಣೆಗಾಗಿ ಅಧಿಕಾರಿಗಳು ಮೊದಲು ಎಸ್.ಡಿ.ಆರ್.ಎಫ್. ಮಾರ್ಗಸೂಚಿಗಳನ್ನು ಅರಿತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ಎಸ್‌ಡಿಆರ್‌ಎಫ್ ಅನುದಾನ ಹಾಗೂ ಮಾರ್ಗಸೂಚಿಯಲ್ಲಿ ಬರದಿದ್ದಲ್ಲಿ ರಾಜ್ಯದ ಎಲ್ಲ ಜಿಪಂ ಗಳಿಗೆ ₹850 ಕೋಟಿ ಅನುದಾನ ಒದಗಿಸಲಾಗಿದ್ದು, ಈ ಅನುದಾನದಲ್ಲಿ ಅಗತ್ಯಕ್ಕನುಸಾರ ಕಾಮಗಾರಿಗಳನ್ನು ಕೈಗೊಳ್ಳಬೇಕು. ಗದಗ ಜಿಲ್ಲೆಗೆ ₹25 ಕೋಟಿಗಳನ್ನು ಈ ಹಿಂದೆಯೇ ಒದಗಿಸಲಾಗಿದ್ದು, ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಬರ ನಿರ್ವಹಣೆ ಮಾಡುವಂತೆ ತಿಳಿಸಿದರು.ಬರ ನಿರ್ವಹಣೆ ಕುರಿತಂತೆ ಈಗಾಗಲೇ ಮಾರ್ಗಸೂಚಿಗಳನ್ನು ಸರ್ಕಾರದಿಂದ ಹೊರಡಿಸಲಾಗಿದೆ. ಎಲ್ಲ ಸಚಿವರು ಜಿಲ್ಲಾಡಳಿತಗಳೊಂದಿಗೆ ಸಭೆ ನಡೆಸಿ ಬರ ನಿರ್ವಹಣೆ ಕುರಿತಂತೆ ಸೂಚನೆಗಳನ್ನು ನೀಡಿದ್ದಾರೆ ಹಾಗೂ ಬರ ನಿರ್ವಹಣೆಗಾಗಿ ಅನುದಾನವನ್ನು ಸಹ ಒದಗಿಸಿದ್ದು, ತಾಲೂಕು ಹಂತದಲ್ಲಿ ಟಾಸ್ಕ್‌ಫೋರ್ಸ್ ಸಮಿತಿ ಸಭೆಗಳನ್ನು ನಡೆಸಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ಹೇಳಿದರು.
ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಕಳೆದ ಎರಡು ತಿಂಗಳಿಂದ ಗ್ರಾಮೀಣ ಭಾಗದ ಕೆಲವೆಡೆ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿದ್ದು ಸಮಸ್ಯೆ ಪರಿಹಾರಕ್ಕೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಲಾಗಿದ್ದರೂ ನೆಪ ಹೇಳುತ್ತಾ ಕಾಮಗಾರಿಯನ್ನು ಕೈಗೊಳ್ಳಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮಾತನಾಡಿ, ಜಿಲ್ಲೆಯ ಅಗತ್ಯ ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.