ರಾಣಿಬೆನ್ನೂರು: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಹೋರಾಟದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಣಿಬೆನ್ನೂರು ತಾಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಿದ್ದು ಅದನ್ನು ಹೃತ್ಪೂರ್ವಕವಾಗಿ ಸ್ವಾಗತಿಸುವೆ ಎಂದು ಜೆಡಿಎಸ್ ಹಾವೇರಿ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಹೇಳಿದರು.
ಕಳೆದ ಕೆಲವು ದಿನಗಳಿಂದ ತಾಲೂಕಿನಲ್ಲಿ ಅಘೋಷಿತ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ. ಸರ್ಕಾರ ಕೂಡಲೇ ಲೋಡ್‌ಶೆಡ್ಡಿಂಗ್ ತೆರವುಗೊಳಿಸಿ ಪ್ರತಿದಿನ 10 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು. ವಿದ್ಯುತ್ ವ್ಯತ್ಯಯ ಮುಂದುವರಿದರೆ ರೈತರಿಗೆ ಹಿಂಗಾರು ಬೆಳೆಯನ್ನೂ ರಕ್ಷಿಸಿಕೊಳ್ಳುವುದು ಕಷ್ಟವಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ಹಿತದೃಷ್ಟಿಯಿಂದ ತುರ್ತು ಕ್ರಮ ಕೈಗೊಳ್ಳಬೇಕು ಎಂದರು.
ಕರ್ನಾಟಕ ರಾಜ್ಯದ ದಕ್ಷಿಣ ಭಾಗಕ್ಕೆ ಹೋಲಿಕೆ ಮಾಡಿದಾಗ ಉತ್ತರ ಕರ್ನಾಟಕ ಭಾಗ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದೆ. ಹೀಗಾಗಿಯೇ ಈ ಭಾಗದ ಜನರು ಉದ್ಯೋಗ ಅರಸಿ ಬೆಂಗಳೂರಿಗೆ ದಾಂಗುಡಿಯಿಡುತ್ತಿದ್ದಾರೆ. ಪರಿಸ್ಥಿತಿ ಸುಧಾರಣೆಯಾಗದಿದ್ದರೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ರೀತಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಶುರುವಾದರೂ ಅಚ್ಚರಿಯಿಲ್ಲ. ಆದ್ದರಿಂದ ಸರ್ಕಾರ ಎಚ್ಚೆತ್ತುಕೊಂಡು ಉತ್ತರ ಕರ್ನಾಟಕ ಅಭಿವೃದ್ಧಿ ಹೆಚ್ಚಿನ ಒತ್ತು ನೀಡಬೇಕು. ಹೊಸ ಕಾರ್ಖಾನೆಗಳು, ಕಂಪನಿಗಳು ಹಾಗೂ ಬಿಡದಿ ಅಂತಹ ಸಿಟಿಗಳನ್ನು ಉತ್ತರ ಕರ್ನಾಟಕದಲ್ಲಿ ಸ್ಥಾಪನೆ ಮಾಡಬೇಕು ಎಂದರು.ತಾಲೂಕಿನ ಹುಣಸಿಕಟ್ಟಿ ಬಳಿ ಕಲ್ಲು ಕ್ವಾರಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯು ಸಚಿವ ರುದ್ರಪ್ಪ ಲಮಾಣಿ ಅವರಿಗೆ ರು. 3 ಕೋಟಿ ದಂಡ ವಿಧಿಸಿದೆ. ಇಲಾಖೆಯ ನೋಟಿಸ್ ಪ್ರಕಾರ ದಂಡವನ್ನು ಆರು ತಿಂಗಳ ಅವಧಿಯಲ್ಲಿ ಮೂರು ಕಂತುಗಳಲ್ಲಿ ಪಾವತಿಸಲು ಅವಕಾಶ ನೀಡಲಾಗಿದೆ. ಆದ್ದರಿಂದ ಸರ್ಕಾರದ ಸಂಪತ್ತಿಗೆ ಸಂಬಂಧಿಸಿದ ಅಕ್ರಮದ ಆರೋಪ ಎದುರಾಗಿರುವ ಹಿನ್ನೆಲೆಯಲ್ಲಿ ಸಚಿವ ರುದ್ರಪ್ಪ ಲಮಾಣಿ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.