ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸರ್ಕಾರಕ್ಕೆ ಶಿಫಾರಸು: ಪ್ರೊ.ಗೋವಿಂದ ರಾವ್‌

KannadaprabhaNewsNetwork |  
Published : Apr 22, 2025, 01:49 AM IST
ಪ್ರೊ.ಗೋವಿಂದ ರಾವ್‌ ಅಧ್ಯಕ್ಷತೆಯಲ್ಲಿ ಸಭೆ | Kannada Prabha

ಸಾರಾಂಶ

ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆ ಆರ್ಥಿಕ ತಜ್ಞ ಪ್ರೊ.ಎಂ. ಗೋವಿಂದ ರಾವ್ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ಜಿಲ್ಲಾ ಮಟ್ಟದ ಸಂವಾದ ಸಭೆ ಆರ್ಥಿಕ ತಜ್ಞ ಪ್ರೊ.ಎಂ. ಗೋವಿಂದ ರಾವ್ ಅಧ್ಯಕ್ಷತೆಯಲ್ಲಿ ಇಲ್ಲಿನ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಪ್ರೊ.ಎಂ. ಗೋವಿಂದರಾವ್ ಮಾತನಾಡಿ, ರಾಜ್ಯದಲ್ಲಿ ಉತ್ತರ ಕರ್ನಾಟಕದ 59 ತಾಲೂಕುಗಳು ಹಾಗೂ ದಕ್ಷಿಣ ಕರ್ನಾಟಕದ ಹಿಂದುಳಿದ 55 ತಾಲೂಕುಗಳೆಂದು ಗುರುತಿಸಲಾಗಿದೆ. ಅಭಿವೃದ್ಧಿಗೆ ಅನುದಾನದ ಹಣ ಬಳಕೆಯಾದರೂ ಕೂಡಾ ಕೆಲವು ತಾಲೂಕುಗಳು ಶಿಕ್ಷಣ ಕ್ಷೇತ್ರ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದದೆ ಹಿಂದುಳಿದಿದೆ. ಪ್ರಾದೇಶಿಕ ಅಸಮತೋಲನ ಸಮಿತಿ ರಚಿಸಲಾಗಿದ್ದು, ಅಸಮತೋಲನ ನಿವಾರಿಸಲು ಕೆಲವು ಮುಖ್ಯ ಅಂಶಗಳನ್ನು ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ಹೇಳಿದರು. ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ಮೂಡುಬಿದಿರೆ ತಾಲೂಕಿನಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆ ಇಲ್ಲದಿರುವುದರಿಂದ ಬಡ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದೆ. ಆದ್ದರಿಂದ ತಾಲೂಕು ವಲಯಗಳಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಬೇಕು. ಮೂಲ್ಕಿ, ಕಡಬ, ಉಳ್ಳಾಲ ತಾಲೂಕುಗಳಿಗೆ ಶಿಕ್ಷಣ ಇಲಾಖೆ ವಲಯ ಕಚೇರಿಯನ್ನು ಸ್ಥಾಪಿಸಲು ಅವರು ಸಲಹೆ ನೀಡಿದರು. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿಗೆ ಅವಕಾಶಗಳಿದ್ದರೂ, ಸಿ.ಆರ್.ಝಡ್. ಪ್ರಕ್ರಿಯೆಗಳಿಂದ ತ್ವರಿತ ಅನುಮೋದನೆ ಸಾಧ್ಯವಾಗುತ್ತಿಲ್ಲ. ಆದರೂ ಪ್ರವಾಸೋದ್ಯಮ ಮೂಲಸೌಕರ್ಯಗಳಿಗೆ ಒತ್ತು ನೀಡಲಾಗುತ್ತಿದೆ. ವೆನ್ಲಾಕ್‌ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವುದರಿಂದ ಇನ್ನಷ್ಟು ಉತ್ತಮ ಆರೋಗ್ಯ ವ್ಯವಸ್ಥೆಗಳು ಜನರಿಗೆ ದೊರಕಲಿದೆ ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಮಾತನಾಡಿ, ಪಶ್ಚಿಮ ಘಟ್ಟದ ಸರಹದ್ದಿನಲ್ಲಿರುವ ಕಡಬ, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ಇತರೆ ತಾಲೂಕುಗಳಿಗೆ ಹೋಲಿಕೆ ಮಾಡಿದರೆ ಅಭಿವೃದ್ಧಿಯಲ್ಲಿ ಹಿಂದುಳಿಯುವಿಕೆ ಕಂಡು ಬರುತ್ತಿದೆ. ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಯ ವರದಿಯಲ್ಲಿ ಈ 3 ತಾಲೂಕುಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂದು ಅವರು ತಿಳಿಸಿದರು. ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಕಾರ್ಯದರ್ಶಿ ಹಾಗೂ ವಿತ್ತೀಯ ಸುಧಾರಣೆ ಮತ್ತು ಯೋಜನಾ ಇಲಾಖೆ ಕಾರ್ಯದರ್ಶಿ ಡಾ. ವಿಶಾಲ್ ಆರ್., ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಮಾತನಾಡಿದರು.

ಸಣ್ಣ ಕೈಗಾರಿಕೆಗಳು ಆರ್ಥಿಕ ವ್ಯವಸ್ಥೆಯ ಅಭಿವೃದ್ಧಿ ಒಂದು ಭಾಗವಾಗಿದ್ದು, ಆರ್ಥಿಕ ಅಭಿವೃದ್ಧಿಯಲ್ಲಿ ಸಣ್ಣ ಪ್ರಮಾಣದ ಕೈಗಾರಿಕೆಗಳು ಪ್ರಮುಖ ಪಾತ್ರ ವಹಿಸುತ್ತದೆ. ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಜಮೀನು ನೀಡುವುದರಿಂದ ಸಣ್ಣ ಕೈಗಾರಿಕೆಗಳು ಅಭಿವೃದ್ಧಿಯಾಗುವುದರ ಜೊತೆಗೆ ದಕ್ಷಿಣ ಕನ್ನಡದ ಆರ್ಥಿಕ ವ್ಯವಸ್ಥೆಗೆ ಸಹಾಯವಾಗುತ್ತದೆ ಎಂದು ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ಸಲಹೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ