ಉನ್ನತ ತಜ್ಞರ ಸಮಿತಿಗೆ ಶಿಫಾರಸ್ಸು: ಸಚಿವ ದಿನೇಶ್ ಗುಂಡೂರಾವ್

KannadaprabhaNewsNetwork |  
Published : Dec 08, 2024, 01:18 AM IST
ಬಳ್ಳಾರಿಯ ಜಿಲ್ಲಾಸ್ಪತ್ರೆಗೆ ಶನಿವಾರ ಭೇಟಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಬಾಣಂತಿಯರ ಆರೋಗ್ಯ ಕ್ಷೇಮ ವಿಚಾರಿಸಿದರು. | Kannada Prabha

ಸಾರಾಂಶ

ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಹೇಳಿದರು.

ಬಳ್ಳಾರಿ: ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದರ ಕುರಿತಾಗಿ ಉನ್ನತ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ, ಅವರು ನೀಡುವ ವರದಿಯನ್ನಾಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಹೇಳಿದರು.

ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ, ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬಳಕೆಗೆ ಯೋಗ್ಯವಲ್ಲ ಎಂದು ಕರ್ನಾಟಕ ರಾಜ್ಯ ಡ್ರಗ್ಸ್ ಲಾಜಿಸ್ಟಿಕ್ಸ್ ವರದಿ ನೀಡಿದ್ದರೆ, ಸೆಂಟ್ರಲ್ ಡ್ರಗ್ಸ್‌ ಲ್ಯಾಬ್ (CDL) ಪಾಸಿಟಿವ್‌ ವರದಿ ನೀಡಿದೆ. ಇದನ್ನು ಉಲ್ಲೇಖಿಸಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ)ಗೆ ಪತ್ರ ಬರೆದು ಪ್ರಶ್ನೆ ಮಾಡಿದ್ದೇವೆ. ಪಶ್ಚಿಮ್ ಬಂಗಾ ಫಾರ್ಮಾಸ್ಯುಟಿಕಲ್ಸ್‌ ವಿರುದ್ಧ ಪ್ರಾಸಿಕ್ಯೂಷನ್‌ಗೆ ಆದೇಶಿಸಲಾಗುವುದು ಎಂದರು.

ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ತಜ್ಞರ ಸಮಿತಿ ತಂಡ ಕಳುಹಿಸುತ್ತೇವೆ. ಎಲ್ಲಿ ತಪ್ಪಾಗಿದೆ ಅದನ್ನು ಕಂಡು ಹಿಡಿಯಬೇಕಿದೆ ಎಂದರು.

ಜಿಲ್ಲೆಯ ಬಾಣಂತಿಯರ ಅಸಹಜ ಸಾವಿನ ಬಗ್ಗೆ ಮಾಹಿತಿ ಬರುತ್ತಿದ್ದಂತೆಯೇ ತನಿಖೆ ನಡೆಸಲು ರಾಜೀವ್ ಗಾಂಧಿ ವಿವಿ ಉಪಕುಲಪತಿ ನೇತೃತ್ವದಲ್ಲಿ ತಂಡ ರಚಿಸಿ ವರದಿ ಪಡೆಯಲಾಗಿದೆ. ಆರಂಭದಲ್ಲಿಯೇ ಈ ಐವಿ ಫ್ಲೂಯಿಡ್ ಬಗ್ಗೆ ಅನುಮಾನ ವ್ಯಕ್ತಪಡಿಸಿಸಲಾಗಿತ್ತು. ಸದ್ಯ ಈ ಕಂಪನಿಯ ಐವಿ ಫ್ಲೂಯಿಡ್ ಸಂಪೂರ್ಣವಾಗಿ ಸರಬರಾಜು ಸ್ಥಗಿತ ಮಾಡಲಾಗಿದೆ. ರಾಜ್ಯದಲ್ಲಿ ಇಂತಹ ಸಾವು ಮರುಕಳಿಸದಂತೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

ಬಳಿಕ ಹೆರಿಗೆ ಕೋಣೆಗಳ ಸಮುಚ್ಚಯಕ್ಕೆ ಭೇಟಿ ನೀಡಿ, ಅಲ್ಲಿನ ಬಾಣಂತಿಯರಿಂದ ಜಿಲ್ಲಾ ಆಸ್ಪತ್ರೆಯಿಂದ ಕೈಗೊಳ್ಳುವ ಆರೈಕೆ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡರು.ಈ ವೇಳೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್. ಗಣೇಶ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ., ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎನ್. ಬಸರೆಡ್ಡಿ ಸೇರಿದಂತೆ ವೈದ್ಯಾಧಿಕಾರಿಗಳು ಹಾಗೂ ಇತರರು ಇದ್ದರು.

ಸಂತ್ರಸ್ತರ ಮನೆಗೆ ಸಚಿವ ದಿನೇಶ್ ಭೇಟಿ, ಸಾಂತ್ವನ

ಬಳ್ಳಾರಿ: ಬಳ್ಳಾರಿಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಬಳ್ಳಾರಿ ತಾಲೂಕಿನ ಬಸರಕೋಡು ಮತ್ತು ಬಾಣಾಪುರ ಗ್ರಾಮಗಳ ಸಂತ್ರಸ್ತರ ಮನೆಗೆ ಭೇಟಿ ನೀಡಿದರು. ಬಳ್ಳಾರಿ ತಾಲ್ಲೂಕಿನ ಬಸರಕೋಡು ಗ್ರಾಮದ ಕಮ್ಮಾರಿ ಲಲಿತಾ ಅವರ ಮನೆಗೆ ಭೇಟಿ ನೀಡಿ, ಪೋಷಕರ ಜೊತೆ ಮಾತನಾಡಿ, ಸಾಂತ್ವನ ಹೇಳಿದರು. ಧೈರ್ಯದಿಂದ ಮಗುವನ್ನು ಆರೈಕೆ ಮಾಡಬೇಕು. ಸರ್ಕಾರದಿಂದ ಹೆಚ್ಚಿನ ನೆರವು ನೀಡಲಾಗುವುದು ಎಂದರು. ಇದಕ್ಕೂ ಮುನ್ನ ಬಾಣಾಪುರ ಗ್ರಾಮದ ಮೃತ ಹೂಗಾರ ನಂದಿನಿ ಅವರ ಮನೆಗೂ ಸಚಿವರು ಭೇಟಿ ನೀಡಿದರು. ಈ ವೇಳೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್. ಗಣೇಶ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ., ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು, ತಹಸೀಲ್ದಾರ್ ಗುರುರಾಜ ಸೇರಿದಂತೆ ವೈದ್ಯಾಧಿಕಾರಿಗಳು ಹಾಗೂ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ