ಮಕ್ಕಳ ಕಾಣೆ ಪ್ರಕರಣ ಅಪಹರಣವೆಂದು ದಾಖಲಿಸಿ

KannadaprabhaNewsNetwork |  
Published : Aug 01, 2025, 12:30 AM IST
31ಕೆಪಿಎಲ್23 ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ “ಅಪಹರಣಕ್ಕೊಳಗಾದ ಮತ್ತು ಕಾಣೆಯಾದ ಮಕ್ಕಳ ಪತ್ತೆಗಾಗಿ ನೂತನವಾಗಿ ರಚನೆಯಾದ ವಿಶೇಷ ಕಾರ್ಯಪಡೆಯ” ಸಭೆ | Kannada Prabha

ಸಾರಾಂಶ

ಮಕ್ಕಳ ಕಾಣೆ ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಸುಪ್ರೀಂಕೋರ್ಟ್‌ ಸಹ ಮಕ್ಕಳ ಕಾಣೆ ಪ್ರಕರಣ ಮಕ್ಕಳ ಅಪಹರಣವೆಂದು ದಾಖಲಿಸಿ ತನಿಖೆ ಕೈಗೊಳ್ಳುವಂತೆ ನಿರ್ದೇಶಿಸಿದ್ದರಿಂದ ಅದರಂತೆ ಕ್ರಮವಹಿಸಬೇಕು ಎಂದು ಎಸ್ಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೊಪ್ಪಳ:

ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಮಕ್ಕಳ ಕಾಣೆ ಪ್ರಕರಣವನ್ನು ಮಕ್ಕಳ ಅಪಹರಣವೆಂದು ದಾಖಲಿಸಿ ತನಿಖೆ ಕೈಗೊಳ್ಳಬೇಕೆಂದು ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ಹೇಳಿದರು.

ನಗರದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಪಹರಣಕ್ಕೊಳಗಾದ ಮತ್ತು ಕಾಣೆಯಾದ ಮಕ್ಕಳ ಪತ್ತೆಗಾಗಿ ನೂತನವಾಗಿ ರಚನೆಯಾದ ವಿಶೇಷ ಕಾರ್ಯಪಡೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಕ್ಕಳ ಕಾಣೆ ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಸುಪ್ರೀಂಕೋರ್ಟ್‌ ಸಹ ಮಕ್ಕಳ ಕಾಣೆ ಪ್ರಕರಣ ಮಕ್ಕಳ ಅಪಹರಣವೆಂದು ದಾಖಲಿಸಿ ತನಿಖೆ ಕೈಗೊಳ್ಳುವಂತೆ ನಿರ್ದೇಶಿಸಿದ್ದರಿಂದ ಅದರಂತೆ ಕ್ರಮವಹಿಸಬೇಕು ಎಂದರು.

ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಬಹುತೇಕ ಪ್ರೇಮ ಪ್ರಕರಣಗಳಾಗಿದ್ದು ಅವರೆಲ್ಲರೂ 18 ವರ್ಷದೊಳಗಿನ ಮಕ್ಕಳಾಗಿದ್ದಾರೆ. ಮಕ್ಕಳ ಸಮ್ಮತಿಯೊಂದಿಗೆ ಪ್ರೀತಿ, ಪ್ರೇಮದ ಹೆಸರಿನಲ್ಲಿಯೂ ಅಪ್ರಾಪ್ತ ವಯಸ್ಸಿನ ಮಗುವನ್ನು ಪುಸಲಾಯಿಸಿ ಕರೆದುಕೊಂಡು ಹೋದಲ್ಲಿ ಅಂತಹವರ ವಿರುದ್ಧ ಅಪಹರಣ ಪ್ರಕರಣ ದಾಖಲಿಸಬೇಕು ಎಂದ ಅವರು, ಈ ಕುರಿತು ಶಾಲಾ-ಕಾಲೇಜು ಮತ್ತು ಸಮುದಾಯದಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತೆರೆದ ಮನೆ ಕಾರ್ಯಕ್ರಮ ಆಯೋಜಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಮಾತನಾಡಿ, ಜಿಲ್ಲೆ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಹಿಳೆ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಾಗಿ ಸಮಿತಿ ರಚಿಸಲಾಗಿದೆ. ಈ ಸಮಿತಿಗಳು ಮತ್ತಷ್ಟು ಸಕ್ರಿಯ ಹಾಗೂ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ ಮಾತನಾಡಿ, ಮಕ್ಕಳಿಗೆ ಮಕ್ಕಳ ಪರವಾದ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಆ ಮೂಲಕ ಅವರನ್ನು ಪ್ರಜ್ಞಾವಂತರಾಗಿಸಿದರೆ ಅಪರಾಧ ತಡೆಗಟ್ಟಬಹುದಾಗಿದೆ. ಈ ಕುರಿತು ಜಾಗೃತಿ ಮೂಡಿಸಲು ಅಗತ್ಯ ಸಹಕಾರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹೇಮಂತಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ್ ಶೆಟ್ಟೆಪ್ಪನವರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಕಾಶ ಕಡಗದ, ಸದಸ್ಯೆ ದಿವ್ಯಾ ಜೋಗಿ, ಬಾಲ ನ್ಯಾಯ ಮಂಡಳಿ ಸದಸ್ಯರಾದ ರವಿ ಗುಡ್ಡದಮೇಗಳ, ನೇತ್ರಾ ಪಾಟೀಲ್, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿ ಆಶಾ, ಜೈ ಕುಮಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಡಿಪಿಒ ಬಸವರಾಜ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ(ಅಸಾಂಸ್ಥಿಕ) ಪ್ರಶಾಂತ ರೆಡ್ಡಿ ವಂದಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ