ಅ.1ರಿಂದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ನೋಂದಣಿ

KannadaprabhaNewsNetwork |  
Published : Sep 22, 2025, 01:00 AM IST
21ಕೆಆರ್ ಎಂಎನ್ 3.ಜೆಪಿಜಿರಾಮನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ರಾಮನಗರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಅಕ್ಟೋಬರ್ 1ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ನಿರ್ದೇಶನ ನೀಡಿದರು.

ರಾಮನಗರ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಅಕ್ಟೋಬರ್ 1ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಂ.ಎಸ್.ಪಿ ರಾಗಿ ಮತ್ತು ಭತ್ತ ಖರೀದಿಸಲು ನಿಗದಿಯಾಗಿರುವ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತೀ ಕ್ವಿಂಟಲ್ ರಾಗಿಗೆ 4,886 ರು.ಗಳ ಬೆಂಬಲ ಬೆಲೆಯನ್ನು ಸರ್ಕಾರ ನಿಗಧಿಪಡಿಸಿದ್ದು, 2025ರ ಅಕ್ಟೋಬರ್ 01 ರಿಂದ ಡಿಸೆಂಬರ್ 15ರ ವರೆಗೆ ರಾಗಿ ಖರೀದಿಗೆ ಸಂಬಂಧಿಸಿದಂತೆ ರೈತರ ನೋಂದಣಿ ಕಾರ್ಯ ಕೈಗೊಳ್ಳಲಾಗುವುದು ಹಾಗೂ ಭತ್ತ ಖರೀದಿಗೆ ಈಗಾಗಲೇ ನೋಂದಣಿ ಕಾರ್ಯ ಆರಂಭಗೊಂಡಿದ್ದು, 2025ರ ಅಕ್ಟೋಬರ್ 31ರವರೆಗೆ ರೈತರು ನೋಂದಣಿ ಮಾಡಬಹುದು. ರಾಗಿ ಖರೀದಿ ಕಾರ್ಯವನ್ನು 2026ರ ಜನವರಿ 1ರಿಂದ ಮಾರ್ಚ್ 31ರವರೆಗೆ ಹಾಗೂ ಭತ್ತ ಖರೀದಿ ಕಾರ್ಯವನ್ನು 2025ರ ನವೆಂಬರ್ 1ರಿಂದ 2026ರ ಫೆಬ್ರವರಿ 28ರವರೆಗೆ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಖರೀದಿ ಕೇಂದ್ರಗಳಲ್ಲಿ ದಲ್ಲಾಳಿ, ಮಧ್ಯವರ್ತಿಗಳ ಹಾವಳಿ ತಡೆಗಟ್ಟಬೇಕು, ಖರೀದಿಯಾಗುವ ಭತ್ತ/ರಾಗಿ ದಾಸ್ತಾನನ್ನು ಗೋದಾಮುಗಳಲ್ಲಿ ಸುರಕ್ಷಿತವಾಗಿ ಸಂಗ್ರಹಿಸಲು ಅಗತ್ಯ ಕ್ರಮಗಳನ್ನು ಅನುಸರಿಸಬೇಕು. ರಾಗಿ ಹಾಗೂ ಭತ್ತ ನೀಡಿದ ರೈತರಿಗೆ ನಿಗದಿತ ಅವಧಿಯೊಳಗೆ ಹಣ ಪಾವತಿಸಬೇಕು. ಖರೀದಿ ಕೇಂದ್ರಗಳಲ್ಲಿ ರೈತರಿಗೆ ಕುಡಿಯುವ ನೀರು ಹಾಗೂ ಮೂಲಭೂತ ಸೌಲಭ್ಯ ಒದಗಿಸಬೇಕು. ರೈತರಿಂದ ರಾಗಿ ಖರೀದಿಸುವ ಸಂದರ್ಭದಲ್ಲಿ ಉತ್ತಮ ಗುಣಮಟ್ಟದ ರಾಗಿಯನ್ನು ಮಾತ್ರ ಖರೀದಿಸಬೇಕು ಹಾಗೂ ರೈತರು ಖರೀದಿ ಕೇಂದ್ರಕ್ಕೆ ತರುವ ರಾಗಿಯನ್ನು ಗುಣಮಟ್ಟ ಪರಿವೀಕ್ಷಕರು ಸಮರ್ಪಕವಾಗಿ ಪರಿಶೀಲಿಸಿ ರೈತರಿಂದ ಉತ್ತಮ ಗುಣಮಟ್ಟದ ರಾಗಿಯನ್ನೇ ಖರೀದಿಸಬೇಕು ಎಂದು ಸಂಬಂಧಿಸಿದವರಿಗೆ ಸೂಚಿಸಿದರು.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕಿ ಎ.ಇ.ಶಿಲ್ಪಾ ಮಾತನಾಡಿ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ ನೇಮಿಸಲಾಗುವ ಉಪ ಏಜೆನ್ಸಿಗಳಾದ ಟಿಎಪಿಸಿಎಂಎಸ್/ಪಿಎಸಿಎಸ್/ಎಫ್‌ಪಿಒಎಸ್/ಎಸ್‌ಎಚ್‌ಜಿಎಸ್ ಪ್ರತಿ ಹೋಬಳಿ ಮಟ್ಟದಲ್ಲಿ ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಅಂಬಿಕಾ, ಕೆ.ಎಫ್.ಸಿ.ಎಸ್.ಸಿ ಜಿಲ್ಲಾ ವ್ಯವಸ್ಥಾಪಕರು, ಕಾನೂನು ಮಾಪನಾ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು, ಎಲ್ಲಾ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು, ಕೆ.ಎಫ್.ಸಿ.ಎಸ್.ಸಿ ಖರೀದಿ ಅಧಿಕಾರಿಗಳು ಉಪಸ್ಥಿತರಿದ್ದರು.

21ಕೆಆರ್ ಎಂಎನ್ 3.ಜೆಪಿಜಿ

ರಾಮನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಯಿತು.

PREV

Recommended Stories

ಸಿಬ್ಬಂದಿ ಕೊರತೆ ಬೆಂಗಳೂರು ನಗರದಲ್ಲಿ ಜಾತಿ ಗಣತಿ ವಿಳಂಬ
ಸಮೀಕ್ಷೆ ಹೆಸರಿನಲ್ಲಿ ಹಿಂದೂ ಸಮಾಜ ಒಡೆಯುವ ಹುನ್ನಾರ