ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಕೆರೆಕಟ್ಟೆ, ತೊರೆ ಹಾಗೂ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಆ ದಿಸೆಯಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಯ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಈಗಾಗಲೇ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ವಾರಕ್ಕೊಮ್ಮೆಯಾದರೂ ತಮ್ಮ ಹೋಬಳಿ ವ್ಯಾಪ್ತಿಗೆ ಭೇಟಿ ನೀಡಿ ಪ್ರಾಕೃತಿಕ ವಿಕೋಪ ಸಂಬಂಧ ಮಾಹಿತಿ ಪಡೆಯುವುದರ ಜೊತೆಗೆ, ಹೆಚ್ಚಿನ ಮಳೆಯಾದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಹೆಚ್ಚಿನ ಮಳೆಯಾದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆಗೆ ಸಂಬಂಧಿಸಿದಂತೆ ಡಿಡಿಪಿಐ ಅವರಿಗೆ ಮಾಹಿತಿ ನೀಡಬೇಕು. ಡಿಡಿಪಿಐ ರಜೆ ಘೋಷಣೆ ಸಂಬಂಧ ಜಿಲ್ಲಾ ಮಟ್ಟದಲ್ಲಿ ಅಗತ್ಯ ಕ್ರಮವಹಿಸಬೇಕು ಎಂದರು.
ಅತಿವೃಷ್ಟಿ ಪರಿಸ್ಥಿತಿ ಎದುರಿಸಲು ಎಲ್ಲಾ ರೀತಿಯ ಮುನ್ನೆಚ್ಚರ ಕ್ರಮಗಳನ್ನು ಕೈಗೊಳ್ಳಬೇಕು. ತುರ್ತು ಸಂದರ್ಭದಲ್ಲಿ ಯಾವ ರೀತಿ ಕ್ರಮಕೈಗೊಳ್ಳಬೇಕು ಎಂದು ಮಾಹಿತಿ ಇರಬೇಕು. ಅಂತಹ ಸಮಯದಲ್ಲಿ ಹೆಚ್ಚಿನ ಅರಿವು ಪ್ರತಿಯೊಬ್ಬರಲ್ಲಿಯೂ ಇರಬೇಕು ಎಂದು ಹೇಳಿದರು.
2018 ರಿಂದ ಮೂರು ವರ್ಷದ ಅವಧಿಯಲ್ಲಿ ಆಗಸ್ಟ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಹೆಚ್ಚಿನ ಎಚ್ಚರವಹಿಸಬೇಕು. ಕರೆ ಮಾಡಿದಾಗ ಸ್ವೀಕರಿಸಬೇಕು. ಸಾರ್ವಜನಿಕರಿಗೆ ಅಧಿಕಾರಿಗಳು ಸ್ಪಂದಿಸಬೇಕು. ಜೊತೆಗೆ ತಹಸೀಲ್ದಾರರು ಕಾಲ ಕಾಲಕ್ಕೆ ಮಾಹಿತಿ ನೀಡುವುದು ಸಹ ಅತೀ ಮುಖ್ಯವಾಗಿದೆ ಎಂದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಕೆಡಿಪಿ ಸಭೆಗೆ ಸಿದ್ಧತೆ ಕೈಗೊಂಡಿರುವ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.