)
ಕೊಪ್ಪಳ: ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆಯನ್ವಯ ಜಿಲ್ಲೆಯ ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಸಂಬಂಧಿಸಿದ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಲಿಂಗರಾಜು ಟಿ. ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆಯಡಿ ಭ್ರೂಣ ಲಿಂಗ ಪತ್ತೆ ಮತ್ತು ಭ್ರೂಣಲಿಂಗ ಆಯ್ಕೆಗೆ ಅವಕಾಶವಿಲ್ಲ.ಆದಾಗ್ಯೂ ಇಂತಹ ಕಾನೂನು ಬಾಹಿರ ಕೆಲಸದಲ್ಲಿ ಭಾಗಿಯಾದಲ್ಲಿ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು. ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ-1994 ರಡಿಯಲ್ಲಿ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಕಾಯ್ದೆ ಅನುಸಾರ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕುರಿತಂತೆ ಯಾವುದೇ ರೀತಿಯ ಜಾಹೀರಾತು ನೀಡುವಂತಿಲ್ಲ. ಸರ್ಕಾರಿ ಅಥವಾ ಖಾಸಗಿ ಯಾವುದೇ ವೈದ್ಯರು ಇಂತಹ ಕೃತ್ಯಗಳಲ್ಲಿ ಭಾಗಿಯಾದಲ್ಲಿ ಅವರ ವಿರುದ್ಧ ಕಠಿಣ ಕ್ರಮಕ್ಕೆ ಅವಕಾಶವಿದೆ. ಈ ಕಾಯ್ದೆಯಡಿ ತಪಾಸಣಾ ಮತ್ತು ಮೇಲ್ವಿಚಾರಣೆಗಾಗಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಹಾಗೂ ತಪಾಸಣಾ ಸಮಿತಿ ರಚಿಸಲಾಗಿದೆ. ತಪಾಸಣಾ ಸಮಿತಿಯು ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸಲಹಾ ಸಮಿತಿ ಸಭೆಯಲ್ಲಿ ವರದಿ ನೀಡಬೇಕು ಎಂದರು.
ಎಲ್ಲ ಸ್ಕ್ಯಾನಿಂಗ್ ಸೆಂಟರ್‌ಗಳು ಪಿಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆಯಡಿ ನಿಯಮಾನುಸಾರ ನೋಂದಣಿ ಮಾಡಿಕೊಳ್ಳಬೇಕು ಹಾಗೂ ನೋಂದಣಿ ಅವಧಿ ಪೂರ್ಣಗೊಳ್ಳುವುದಕ್ಕಿಂತ ಮೂರು ತಿಂಗಳ ಮುಂಚೆ ಅರ್ಜಿ ಸಲ್ಲಿಸಿ ನವೀಕರಣ ಮಾಡಿಕೊಳ್ಳಬೇಕು. ಸ್ಕ್ಯಾನಿಂಗ್ ಕುರಿತಾದ ಮಾರ್ಗಸೂಚಿ ಪಾಲಿಸಿ ನಿಗದಿತ ನಮೂನೆ ನಿರ್ವಹಿಸಬೇಕು. ನೋಂದಣಿ/ ಪರವಾನಗಿ ನವೀಕರಣವಿಲ್ಲದ ಆರೋಗ್ಯ ಸಂಸ್ಥೆಗಳ ಮೇಲೆ ನಿಗದಿತ ನಿಯಮ ಪಾಲನೆ ಹಾಗೂ ದಾಖಲಾತಿ ನಿರ್ವಹಿಸದ ಆರೋಗ್ಯ ಸಂಸ್ಥೆಗಳನ್ನು ಮುಚ್ಚಿಸಲು ಅಥವಾ ಸ್ಥಗಿತಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಪಿ.ಸಿ ಮತ್ತು ಪಿ.ಎನ್.ಡಿ.ಟಿ ಕಾಯ್ದೆ ಅನುಸಾರ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧಿಸಲಾಗಿದೆ. ಸರ್ಕಾರಿ ಅಥವಾ ಖಾಸಗಿ ಯಾವುದೇ ವೈದ್ಯರು ಇಂತಹ ಕೃತ್ಯಗಳಲ್ಲಿ ಭಾಗಿಯಾದಲ್ಲಿ ಅವರಿಗೆ ಕಾರಾಗೃಹ ಶಿಕ್ಷೆ ಸಹಿತ ದಂಡ ವಿಧಿಸಲಾಗುವುದು. ಮೊದಲ ಅಪರಾಧಕ್ಕೆ 5 ವರ್ಷ ವೈದ್ಯಕೀಯ ಪರವಾನಗಿ ರದ್ದುಪಡಿಸುವುದು. ನಂತರದ ಅಪರಾಧಕ್ಕೆ ಸಂಬಂಧಿಸಿದ ವೈದ್ಯರ ವೈದ್ಯಕೀಯ ಪರವಾನಗಿ ರಾಜ್ಯ ವೈದ್ಯಕೀಯ ಮಂಡಳಿಯಿಂದ ಶಾಶ್ವತವಾಗಿ ತೆಗೆದು ಹಾಕಿ,ವೈದ್ಯಕೀಯ ವೃತ್ತಿ ನಡೆಸಲು ಆಜೀವ ನಿಷೇಧ ಹೇರಲಾಗುವುದು. ಒಂದು ವೇಳೆ ಸ್ವತಃ ಮಹಿಳೆ, ಆಕೆಯ ಪತಿ ಅಥವಾ ಸಂಬಂಧಿಕರು ಭ್ರೂಣ ಲಿಂಗ ಪತ್ತೆಗೆ ಯತ್ನಿಸಿ, ವೈದ್ಯರಿಗೆ ಒತ್ತಡ ಹೇರಿದಲ್ಲಿ ಅವರಿಗೆ ಮೂರರಿಂದ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹50 ಸಾವಿರದಿಂದ ₹1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.