-ನ್ಯಾಯಾಧೀಶ ರೋಣ ವಾಸುದೇವ್ ಅಭಿಮತ । ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ
------ಕನ್ನಡಪ್ರಭವಾರ್ತೆ, ಚಿತ್ರದುರ್ಗ
ಮಾನವ ಹಕ್ಕುಗಳ ಹರಣಕ್ಕೆ ಕಡಿವಾಣ ಹಾಕುವ ಅಗತ್ಯ ವ್ಯಾಪಕಗೊಳ್ಳಬೇಕೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ್ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್, ಕಾರ್ಮಿಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಚಿತ್ರದುರ್ಗ ಜಿಲ್ಲೆಯಲ್ಲಿ ಮಾನವ ಕಳ್ಳ ಸಾಗಾಣಿಕೆ ಹಾಗೂ ಬಾಲ ಕಾರ್ಮಿಕ ಪ್ರಕರಣಗಳ ಸಂಖ್ಯೆ ಕಡಿಮೆಯಿದೆ. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರುವಂತಿಲ್ಲ. ಮಾನವ ಕಳ್ಳ ಸಾಗಾಣಿಕೆ ಪಿಡುಗನ್ನು ಸಂಪೂರ್ಣ ತಡೆಯಲು ಪ್ರಯತ್ನಿಸಬೇಕು ಎಂದರು.
ಪುರಾತನ ಕಾಲದಿಂದಲೂ ಮಹಿಳೆ, ಮಕ್ಕಳು ಹಾಗೂ ಕೆಳಮಟ್ಟದ ಜನರನ್ನು ವಸ್ತುಗಳ ಹಾಗೆ ಪರಿಗಣಿಸಿ ಮಾನವ ಹಕ್ಕುಗಳ ಹರಣ ಮಾಡುತ್ತಿರುವುದು ಅವ್ಯಾಹತವಾಗಿ ನಡೆದು ಬಂದಿದೆ. ಇಂದಿಗೂ ಗ್ರಾಮೀಣ ಪ್ರದೇಶಗಳಲ್ಲಿ ಜೀತ ಹಾಗೂ ಬಾಲ ಕಾರ್ಮಿಕ ಪದ್ಧತಿ ಜೀವಂತವಾಗಿರುವುದು ಕಂಡು ಬರುತ್ತದೆ. ಸ್ವಾತಂತ್ರ್ಯ ಲಭಿಸಿ 75ವರ್ಷಗಳಾದರೂ ಇಂತಹ ಪಿಡುಗುಗಳನ್ನು ತೊಡೆದು ಹಾಕಲು ಸಾಧ್ಯವಾಗದಿರುವುದು ಬೇಸರದ ಸಂಗತಿ. ಜಿಲ್ಲೆ ಹಾಗೂ ತಾಲೂಕು ಮಟ್ಟದ ಕಾರ್ಯಪಡೆಗಳೂ ಜಾಗೃತಿ ವಹಿಸಬೇಕು. ವಿಶ್ವ ಸಂಸ್ಥೆಯೂ ಮಾನವ ಕಳ್ಳ ಸಾಗಾಣಿಕೆಯನ್ನು ಗಂಭೀರ ಅಪರಾಧವೆಂದು ಪರಿಗಣಿಸಿದೆ. ಮಕ್ಕಳನ್ನು ಭಿಕ್ಷಾಟನೆಗೆ ಹಚ್ಚುವುದು, ಲೈಂಗಿಕ ಶೋಷಣೆ, ವೇಶ್ಯಾವಾಟಿಕೆ, ಅಂಗಾಂಗ ದೋಚುವಿಕೆ, ಜೀತಪದ್ಧತಿ ಸೇರಿದಂತೆ ಮಾನವ ಹಕ್ಕುಗಳ ಹರಣಗಳು ವಿವಿಧ ಆಯಾಮಗಳಲ್ಲಿ ವಿಸ್ತರಿಸಿವೆ ಎಂದು ನ್ಯಾಯಾಧೀಶ ರೋಣ ವಾಸುದೇವ್ ಹೇಳಿದರು.ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್, ಜಿಲ್ಲೆಯಲ್ಲಿ ದಾಖಲಾಗುವ ಮಹಿಳೆ ಮತ್ತು ಮಕ್ಕಳ ಕಾಣೆ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು. ಒಂದು ವೇಳೆ ಇಂತಹ ಪ್ರಕರಣಗಳಲ್ಲಿ ಮಾನವ ಕಳ್ಳ ಸಾಗಣಿಕೆ ಕಂಡು ಬಂದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಮಾನವ ಕಳ್ಳ ಸಾಗಾಣಿಕೆ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರ. ಇದನ್ನು ತಡೆಗಟ್ಟಲು ಸರ್ಕಾರದ ಜೊತೆ ಸಮಾಜದ ಸಹಭಾಗಿತ್ವವು ಅವಶ್ಯ. ಎಷ್ಟೋ ಬಾರಿ ಇಂತಹ ಪ್ರಕರಣಗಳು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ಬರದೆ ನಡೆದು ಹೋಗುತ್ತವೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗಳೇ ಇಲ್ಲಿ ಬಲಿಪಶುಗಳಾಗುತ್ತಾರೆ. ಹೀಗಾಗಿ ಕ್ಷೇತ್ರ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತರು ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಸರ್ಕಾರದಿಂದ ದೊರೆಯುವ ನೆರವು ಒದಗಿಸಿಕೊಡಬೇಕು ಎಂದರು.ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ಒಂದು ಸ್ಥಳ, ಜಿಲ್ಲೆ, ರಾಜ್ಯ, ದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಜಾಗತಿಕವಾಗಿ ಸಮಸ್ಯೆಯಾಗಿ ಮಾರಕ ಎನಿಸಿದೆ. ಮಾದಕ ವಸ್ತು, ಮಾರಕಾಸ್ತ್ರಗಳ ಸಾಗಾಣಿಕೆ, ನಂತರದ ಸ್ಥಾನದಲ್ಲಿ ಮಾನವ ಕಳ್ಳ ಸಾಗಾಣಿಕೆ ಅಪರಾಧಗಳು ನಿಲ್ಲುತ್ತಿವೆ. ಮಹಿಳೆ ಮತ್ತು ಮಕ್ಕಳು ಈ ವಿಷ ವರ್ತುಲದಲ್ಲಿ ಸಿಕ್ಕು ದೌರ್ಜನ್ಯಕ್ಕೆ ಬಲಿಯಾಗುತ್ತಿದ್ದಾರೆ. ಎಲ್ಲಾ ಇಲಾಖೆಗಳು, ಸಂಘ ಸಂಸ್ಥೆಗಳು ಮಾನವ ಕಳ್ಳ ಸಾಗಾಣಿಕೆ ತಡೆಯಲು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಆರ್.ಪ್ರಭಾಕರ್ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾನವ ಕಳ್ಳ ಸಾಗಾಣಿಕೆ ತಡೆ ಪ್ರತಿಜ್ಞೆ ವಿಧಿ ಬೋಧಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ಮಾತನಾಡಿದರು. ದಾವಣಗೆರೆ ಆಜಾದ್ ನಗರ ವೃತ್ತ ನಿರೀಕ್ಷಕ ಬಾಲಚಂದ್ರ ನಾಯಕ್ ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.ಜಿಪಂ ಉಪಕಾರ್ಯದರ್ಶಿ ತಿಮ್ಮಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ ರೇಣುಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್ ಮಂಜುನಾಥ, ಪಿಯು ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಕಾರ್ಮಿಕ ನಿರೀಕ್ಷಕ ರಾಜಣ್ಣ ಇದ್ದರು.
----------------ಪೋಟೋ:
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ರೋಣ ವಾಸುದೇವ್ ಉದ್ಘಾಟಿಸಿದರು.------
ಪೋಟೋ: 30 ಸಿಟಿಡಿ3