ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಪತ್ರಿಕಾ ಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯ ಮಂಡೇಪಂಡ ಸುನಿಲ್ ಸುಬ್ರಮಣಿ ಅವರು ಸಮಾಜದ ಸುಧಾರಣೆಯಲ್ಲಿ ಪುಸ್ತಕಗಳು ಕೂಡ ಪ್ರಮುಖ ಪಾತ್ರ ವಹಿಸುತ್ತದೆ. ಪುಸ್ತಕಗಳು ಸಾಮಾಜಿಕ ಕಾಳಜಿಯೊಂದಿಗೆ ಉತ್ತಮ ಸಂದೇಶವನ್ನು ನೀಡಬೇಕು, ಬಿಡುಗಡೆಗೊಳ್ಳುವ ಪುಸ್ತಕಗಳಿಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ಓದುಗರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬೇಕು ಎಂದರು.
ಅರ್ಜಿ ಹಾಕಿ ಯಾವುದೇ ಜಾತಿಯಲ್ಲಿ ಹುಟ್ಟಲು ಸಾಧ್ಯವಿಲ್ಲ, ಹುಟ್ಟಿದ ಮೇಲೆ ಜಾತಿಯ ಬಗ್ಗೆ ಸ್ವಾಭಿಮಾನ, ಅಭಿಮಾನವಿರಬೇಕು. ಹುಟ್ಟಿದ ಮಣ್ಣಿನ ಮೇಲೆ ಪ್ರೀತಿ ಇರಬೇಕು. ಕೊಡವರಾಗಿ ಹುಟ್ಟಿರುವ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ಅವರು ಕೊಡಗಿನ ನೆಲ, ಜಲ, ಸಂಸ್ಕೃತಿಯನ್ನು ಹೆಚ್ಚು ಪ್ರೀತಿಸುತ್ತಾರೆ. ಇವರ ಸಿನಿಮಾಗಳಲ್ಲಿ ಇದನ್ನು ಕಾಣಬಹುದಾಗಿದೆ. ಸಿನಿಮಾ ಕ್ಷೇತ್ರದೊಂದಿಗೆ ಸಾಹಿತ್ಯ ಕ್ಷೇತ್ರಕ್ಕೂ ಕೊಡುಗೆ ನೀಡುತ್ತಿರುವುದು ಶ್ಲಾಘನೀಯವೆಂದರು.ಹಿರಿಯ ಸಾಹಿತಿ ಬಾಚರಣಿಯಂಡ ಪಿ.ಅಪ್ಪಣ್ಣ ಮಾತನಾಡಿ ಸಾಹಿತ್ಯದ ಮೂಲಕ ಕನ್ನಡ ನಾಡು, ನುಡಿಯನ್ನು ಶ್ರೀಮಂತಗೊಳಿಸಬೇಕು. ಬರಹಗಾರರ ಸಂಖ್ಯೆ ಹೆಚ್ಚಾಗುತ್ತಿದೆ, ಆದರೆ ಓದುಗರ ಸಂಖ್ಯೆ ಕಡಿಮೆ ಇದೆ. ಓದುಗರನ್ನು ಹೆಚ್ಚಿಸಿಕೊಳ್ಳುವುದಕ್ಕೆ ಹೊಸ ಸ್ಕೀಂವೊಂದನ್ನು ಹಾಕಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ನ ನಿವೃತ್ತ ಪಾಂಶುಪಾಲರಾದ ಕಲ್ಲುಮಾಡಂಡ ಸರಸ್ವತಿ ಸುಬ್ಬಯ್ಯ ಮಾತನಾಡಿದರು.
ಕೊಡವ ಮಕ್ಕಡ ಕೂಟದ ಸ್ಥಾಪಕಾಧ್ಯಕ್ಷ ಹಾಗೂ ಪ್ರಕಾಶಕ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಮಾತನಾಡಿ, ಕೊಡವ ಮಕ್ಕಡ ಕೂಟ ಪ್ರಕಟಿಸಿರುವ 105 ಪುಸ್ತಕಗಳಲ್ಲಿ ನಾಲ್ಕು ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದ್ದು, ಚಿಗುರೆಲೆಗಳು ಪುಸ್ತಕಕ್ಕೆ ರಾಜ್ಯ ಪ್ರಶಸ್ತಿ ಲಭಿಸಿದೆ. ನಾಲ್ಕು ಪುಸ್ತಕಗಳು ಕೊಡವ ಸಿನಿಮಾವಾಗಿದೆ. ಈಗಾಗಲೇ ಮಹತ್ವಾಕಾಂಕ್ಷೆಯ 100ನೇ ಪುಸ್ತಕವನ್ನು ಅದ್ದೂರಿಯಾಗಿ ಸಮರ್ಪಿಸಲಾಗಿದ್ದು, ಹೊಸ ಬರಹಗಾರರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ ಎಂದು ತಿಳಿಸಿದರು.