ಹೇಮಾವತಿ ಜಲಾಶಯದಿಂದ ಸಾಹುಕಾರ್ ಚನ್ನಯ್ಯ ನಾಲೆಗೆ ನೀರು ಹರಿಸಿ: ಕೆ.ಸಿ.ನಾರಾಯಣಗೌಡ

KannadaprabhaNewsNetwork |  
Published : Aug 05, 2026, 01:45 AM IST
4ಕೆಎಂಎನ್ ಡಿ24 | Kannada Prabha

ಸಾರಾಂಶ

ರೈತರ ಜೀವನದೊಂದಿಗೆ ರಾಜ್ಯ ಸರ್ಕಾರ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ. ನೀರಾವರಿ ಸಚಿವ ರಾಮಲಿಂಗಾರೆಡ್ಡಿಯವರಿಗೆ ರೈತರ ಕಷ್ಟಗಳು ಗೊತ್ತಿಲ್ಲ. ಕೆಆರ್‌ಎಸ್ ಜಲಾಶಯದಿಂದ ವಿಶ್ವೇಶ್ವರಯ್ಯ ನಾಲೆಗೆ ನೀರು ಬಿಡಿಸಿರುವ ಸರ್ಕಾರ ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಆದೇಶ ನೀಡದೆ ನಿರ್ಲಕ್ಷ್ಯ ತಾಳಿದ್ದಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಹಾಸನದ ಗೊರೂರು-ಹೇಮಾವತಿ ಜಲಾಶಯದಲ್ಲಿ ಸಾಕಷ್ಟು ನೀರಿದ್ದು, ಕೂಡಲೇ ಸಾಹುಕಾರ್ ಚನ್ನಯ್ಯ ನಾಲೆಗೆ ನೀರು ಹರಿಸಿ ತಾಲೂಕಿನ ಕೆರೆ-ಕಟ್ಟೆಗಳನ್ನು ತುಂಬಿಸಿ ಜನ-ಜಾನುವಾರುಗಳು ಕುಡಿಯಲು ನೀರು ಒದಗಿಸಬೇಕು. ಇಲ್ಲದಿದ್ದರೆ ತಾಲೂಕಿನ ರೈತರೊಂದಿಗೆ ಜಲಾಶಯಕ್ಕೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಎಚ್ಚರಿಕೆ ನೀಡಿದರು.

ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೇಮಾವತಿ ಜಲಾಶಯ ಯೋಜನೆ ವ್ಯಾಪ್ತಿ ಕೆರೆಕಟ್ಟೆಗಳಲ್ಲಿ ನೀರಿಲ್ಲದೆ ಬರಿದಾಗಿದೆ. ಜನ ಜಾನುವಾರುಗಳು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ಇನ್ನೊಂದು ವಾರದೊಳಗೆ ನೀರು ಹರಿಸಿ ಕೃಷ್ಣರಾಜಪೇಟೆ, ಪಾಂಡವಪುರ, ಚನ್ನರಾಯಪಟ್ಟಣ ಹಾಗೂ ನಾಗಮಂಗಲ ತಾಲೂಕು ವ್ಯಾಪ್ತಿಯ ಕೆರೆಕಟ್ಟೆಗಳನ್ನು ತುಂಬಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗದಿದ್ದರೆ ಜಲಾಶಯಕ್ಕೆ ಮುತ್ತಿಗೆ ಹಾಕಿ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ರೈತರ ಜೀವನದೊಂದಿಗೆ ರಾಜ್ಯ ಸರ್ಕಾರ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ. ನೀರಾವರಿ ಸಚಿವ ರಾಮಲಿಂಗಾರೆಡ್ಡಿಯವರಿಗೆ ರೈತರ ಕಷ್ಟಗಳು ಗೊತ್ತಿಲ್ಲ. ಕೆಆರ್‌ಎಸ್ ಜಲಾಶಯದಿಂದ ವಿಶ್ವೇಶ್ವರಯ್ಯ ನಾಲೆಗೆ ನೀರು ಬಿಡಿಸಿರುವ ಸರ್ಕಾರ ಹೇಮಾವತಿ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸುವಂತೆ ಆದೇಶ ನೀಡದೆ ನಿರ್ಲಕ್ಷ್ಯ ತಾಳಿದ್ದಾರೆ ಎಂದು ದೂರಿದರು.

ಹೇಮಾವತಿ ಜಲಾಶಯ ಯೋಜನಾ ವ್ಯಾಪ್ತಿಯ ನೀರಾವರಿ ಸಲಹಾ ಸಮಿತಿ ಸಭೆ ನಡೆಸದೆ ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಜನಜಾನುವಾರುಗಳು ಕುಡಿಯಲು ಅನುಕೂಲ ಕಲ್ಪಿಸಿಲ್ಲ ಎಂದು ಕಿಡಿಕಾರಿದರು.

ತಾಲೂಕಿನಲ್ಲಿ ಹೇಮಾವತಿ ನದಿ ಹರಿದು ಹೋಗಿ ಕೆಆರ್‌ಎಸ್ ಒಡಲು ಸೇರುತ್ತಿದೆ. ಕೃಷ್ಣರಾಜಸಾಗರ ಜಲಾಶಯದ ಹಿನ್ನೀರು ನಮ್ಮ ತಾಲೂಕಿನ ಸಾವಿರಾರು ಎಕರೆ ಭೂ ಪ್ರದೇಶವಿದೆ. ರೈತರು ತಮ್ಮ ಜಮೀನು ಕಳೆದುಕೊಂಡು ಜಲಾಶಯ ನಿರ್ಮಾಣಕ್ಕೆ ಭೂಮಿ ನೀಡಿ ತ್ಯಾಗಿಗಳಾಗಿದ್ದಾರೆ. ಆದರೆ, ಈ ರೈತರನ್ನು ರಾಜ್ಯ ಸರ್ಕಾರವು ಮಲತಾಯಿ ಮಕ್ಕಳಂತೆ ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಂದು ವಾರ ಕಾಲಾವಕಾಶ ನೀಡುತ್ತೇನೆ. ಅಷ್ಟರೊಳಗೆ ನಾಲೆಗಳಿಗೆ ನೀರು ಹರಿಸಿ ಕೆರೆ ಕಟ್ಟೆಗಳನ್ನು ತುಂಬಿಸದಿದ್ದರೆ ಮುಂದಾಗಲಿರುವ ಅನಾಹುತಕ್ಕೆ ರಾಜ್ಯ ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಎಸ್.ಟಿ.ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ಅಗ್ರಹಾರಬಾಚಹಳ್ಳಿ ಜಗದೀಶ್, ಪುರಸಭೆ ಮಾಜಿ ಸದಸ್ಯರಾದ ಎಚ್.ಆರ್.ಲೋಕೇಶ್, ಕೆ.ವಿನೋದ್ ಕುಮಾರ್, ಕೆ.ಆರ್.ನೀಲಕಂಠ, ಕೆ.ಬಿ.ನಂದೀಶ್ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಉಚಿತ ಕಾರ್ಯಾಗಾರ
ಹುಟ್ಟುಹಬ್ಬದ ನಿಮಿತ್ತ ರಕ್ತದಾನ, ಗಿಡಗಳ ವಿತರಣೆ, ಸಾಧಕರಿಗೆ ಸನ್ಮಾನ