ಶ್ರೀ ಆದಿಚುಂಚನಗಿರಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭ

KannadaprabhaNewsNetwork | Published : Jan 13, 2025 12:49 AM

ಸಾರಾಂಶ

ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜ.12ರಿಂದ 18 ರವರೆಗೆ ಭೈರವೈಕ್ಯ ಶ್ರೀ ಡಾ.ಬಾಲ ಗಂಗಾಧರನಾಥ ಸ್ವಾಮೀಜಿಯವರ 80ನೇ ಜಯಂತ್ಯುತ್ಸವ ಹಾಗೂ 12ನೇ ವರ್ಷದ ಸಂಸ್ಮರಣಾ ಮಹೋತ್ಸವ ನಡೆಯಲಿದೆ. ಶ್ರೀಕ್ಷೇತ್ರದ ಬಿಜಿಎಸ್ ಸಭಾಂಗಣದಲ್ಲಿ 7ನಡೆಯುವ ವಿವಿಧ ಕಾರ್ಯಕ್ರಮಗಳ ದಿವ್ಯ ಸಾನಿಧ್ಯವನ್ನು ಶ್ರೀ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸುವರು.

ಕನ್ನಡಪ್ರಭ ವಾರ್ತೆ ನಾಗಮಂಗಲ

ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜ.12ರಿಂದ 18 ರವರೆಗೆ ಭೈರವೈಕ್ಯ ಶ್ರೀ ಡಾ.ಬಾಲ ಗಂಗಾಧರನಾಥ ಸ್ವಾಮೀಜಿಯವರ 80ನೇ ಜಯಂತ್ಯುತ್ಸವ ಹಾಗೂ 12ನೇ ವರ್ಷದ ಸಂಸ್ಮರಣಾ ಮಹೋತ್ಸವ ನಡೆಯಲಿದೆ.

ಶ್ರೀಕ್ಷೇತ್ರದ ಬಿಜಿಎಸ್ ಸಭಾಂಗಣದಲ್ಲಿ 7ನಡೆಯುವ ವಿವಿಧ ಕಾರ್ಯಕ್ರಮಗಳ ದಿವ್ಯ ಸಾನಿಧ್ಯವನ್ನು ಶ್ರೀ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸುವರು. ಹೋಮ, ಹವನಾದಿ ಧಾರ್ಮಿಕ ಕಾರ್ಯಕ್ರಮಗಳು ಮತ್ತು ವಿವಿಧ ಪೂಜಾ ಮಹೋತ್ಸವಗಳು ಆರಂಭಗೊಂಡಿವೆ.

ಜ.14ರಂದು ಹಿರಿಯ ವಿದ್ಯಾರ್ಥಿಗಳ ಸಂಗಮ. ಜ.15ರಂದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕಾರ್ಯಾಗಾರ ನಡೆಯಲಿದೆ. ಜ.16ರಂದು ಬೆಳಗ್ಗೆ 10 ಗಂಟೆಗೆ ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಮೂಡಿಸುವ ಸಲುವಾಗಿ ರಾಜ್ಯ ಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ. 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರು ರಾಜ್ಯಮಟ್ಟದ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

5ನೇ ತರಗತಿಯಿಂದ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕವನ, ಚುಟುಕು, ಹನಿಗವನ ಹಾಗೂ ವಿಚಾರಗೋಷ್ಠಿ ಏರ್ಪಡಿಸಲಾಗಿದೆ. ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಹಿಂದಿನ ರಾತ್ರಿ ಊಟ ಮತ್ತು ವಸತಿ ಸೌಲಭ್ಯವನ್ನು ಶ್ರೀಮಠದ ವತಿಯಿಂದ ಕಲ್ಪಿಸಲಾಗುವುದು.

ಈಗಾಗಲೇ ಸಾಹಿತ್ಯ ರಚನೆ ಮಾಡಿರುವ ವಿದ್ಯಾರ್ಥಿಗಳು ಸಂಪೂರ್ಣ ಮಾಹಿತಿಯನ್ನು ತಾವು ಬರೆದಿರುವ ಲೇಖನದೊಂದಿಗೆ ಕಳುಹಿಸಬಹುದು. ನೋಂದಣಿಗೆ ಜ.13 ಕೊನೆ ದಿನ. ಭಾಗವಹಿಸುವ ವಿದ್ಯಾರ್ಥಿಗಳು ಮೊ.8105500119 ಅಥವಾ ಮೊ-8762136438ಗೆ ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು.

ಜ.17ರಂದು ಚುಂಚಾದ್ರಿ ಮಾತೃ ಸಂಗಮ ನಡೆಯಲಿದೆ. ಜ.18ರ ಬೆಳಗ್ಗೆ 10 ಗಂಟೆಗೆ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 80ನೇ ಜಯಂತ್ಯುತ್ಸವ ಹಾಗೂ 12ನೇ ವರ್ಷದ ಸಂಸ್ಮರಣಾ ಮಹೋತ್ಸವ ಬಹಳ ವಿಜೃಂಭಣೆಯಿಂದ ನಡೆಯಲಿದೆ. ನಾಡಿನ ಹಿರಿಯ ರಾಜಕಾರಣಿಗಳು, ಗಣ್ಯರು ಹಾಗೂ ವಿವಿಧ ಶಾಖಾ ಮಠಗಳ ಶ್ರೀಗಳು ಭಾಗವಹಿಸಲಿದ್ದಾರೆ ಎಂದು ಶ್ರೀ ಮಠದ ಪ್ರಧಾನಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದ್ದಾರೆ.

Share this article