ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಅಸಮಧಾನ
ಕನ್ನಡಪ್ರಭ ವಾರ್ತೆ ಚಿತ್ರದುರ್ಗಅಲ್ಪಸಂಖ್ಯಾತರಿಗೆ ಸಾಲ ನೀಡುವಲ್ಲಿ ಬ್ಯಾಂಕುಗಳು ತೋರುತ್ತಿರುವ ನಿರಾಸಕ್ತಿಗೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಸಮುದಾಯದವರಿಗೆ ಸಾಲ ಸೌಲಭ್ಯ ನೀಡಿಕೆಯಲ್ಲಿ ಬ್ಯಾಂಕ್‍ಗಳು ತೀವ್ರ ನಿರ್ಲಕ್ಷ್ಯ ತಾಳುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಆಯೋಗಕ್ಕೆ ಬರುತ್ತಿವೆ ಎಂದರು.ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಎಷ್ಟು ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡಲಾಗಿದೆ ಎಂಬ ಮಾತಿಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಉತ್ತರಿಸಿದ ಬಗೆ ಆಯೋಗದ ಅಧ್ಯಕ್ಷರ ಕೆರಳಿಸಿತು. ಅರ್ಜಿಗಳು ತಿರಸ್ಕೃತಗೊಂಡಿರುವ ಬಗ್ಗೆ ನಿರ್ದಿಷ್ಟ ಪ್ರಕರಣಗಳಿದ್ದಲ್ಲಿ ಪರಿಶೀಲಿಸಲಾಗುವುದು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ತಿಪ್ಪೇಶ್ ಪ್ರತಿಕ್ರಿಯಿಸಿದರು. ಅಲ್ಪಸಂಖ್ಯಾತರರಿಗೆ ಸಾಲ ಸೌಲಭ್ಯ ಮಂಜೂರಾತಿ ಅಥವಾ ತಿರಸ್ಕೃತವಾಗಿರುವ ಬಗ್ಗೆ ಯಾವುದೇ ಮಾಹಿತಿಯನ್ನು ಸಭೆಗೆ ತಂದಿಲ್ಲ, ಬದಲಿಗೆ ಮಾಹಿತಿ ನೀಡುವಂತೆ ನಮಗೇ ಕೇಳುತ್ತೀರಿ ಎಂದು ಅಸಮಾಧಾನ ಹೊರ ಹಾಕಿದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಜಾರಿಗೊಳಿಸಲಾಗಿರುವ ಅರಿವು ಸಾಲ, ಶ್ರಮಶಕ್ತಿ ಯೋಜನೆ, ಸ್ವಯಂ ಉದ್ಯೋಗ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಕ್ರಮವಹಿಸಬೇಕು ಎಂದು ಸೂಚಿಸಿದರು.ಜಿಲ್ಲೆಯಲ್ಲಿರುವ ಉರ್ದು ಶಾಲೆಗಳಿಗೆ ಭೇಟಿ ನೀಡಿ, ಕೊಠಡಿಗಳ ಪರಿಶೀಲನೆ ನಡೆಸಿ ದುರಸ್ತಿಗೆ ಕ್ರಮವಹಿಸಬೇಕು. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆಗಳಿಗೆ ನಿವೇಶನ ಗುರುತಿಸಿ, ಶಾಲೆಗಳ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಡಿಎಂಎಫ್ ಹಾಗೂ ಕೆಎಂಇಆರ್‍ಸಿ ಅನುದಾನದಲ್ಲಿ ಶಾಲೆ ಕೊಠಡಿಗಳ ನಿರ್ಮಾಣಕ್ಕೆ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ಯುವ ಜನತೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಉದ್ಯೋಗಾಧಿಕಾರಿಗೆ ಸೂಚನೆ ನೀಡಿದರು. ಕೊಳೆಗೇರಿ ಪ್ರದೇಶದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್, ನಿವೇಶನ, ಮನೆ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಬೇಕು ಎಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗೆ ಸೂಚನೆ ನೀಡಿದರು.ಕೊಳಚೆ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಗೆ 5843 ಮನೆಗಳು ಮಂಜೂರಾಗಿದ್ದು, ಇದರಲ್ಲಿ 3469 ಮನೆಗಳ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದು ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗೆ ಸಭೆಗೆ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ದಿವ್ಯಾಪ್ರಭು , ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾರ್ಯದರ್ಶಿ ಸಲ್ಮಾ ಫಿರ್ದೋಸ್, ಆಯೋಗದ ಉಪನಿರ್ದೇಶಕ ರಘುನಾಥ್, ವಿಶೇಷ ಕರ್ತವ್ಯಾಧಿಕಾರಿ ಮುಜೀಬುಲ್ಲಾ ಜಫಾರಿ, ಜಿಪಂ ಯೋಜನಾ ನಿರ್ದೇಶಕ ಡಾ. ರಂಗಸ್ವಾಮಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕಾಂತರಾಜ್, ಜಿಲ್ಲಾ ವಕ್ಫ್ ಅಧಿಕಾರಿ ನೂರ್ ಬಾಷಾ ನಾಮನಿದೇಶಿತ ಸದಸ್ಯರುಗಳಾದ ಫಾರುಕ್ ಉಲ್ಲಾ ಇದ್ದರು.