ಕನ್ನಡಪ್ರಭ ವಾರ್ತೆ ಮಂಡ್ಯಮುಂಬರುವ ಪಿಯುಸಿ ಶಿಕ್ಷಣದ ಪ್ರಾಯೋಗಿಕ ಹಾಗೂ ವಾರ್ಷಿಕ ಪರೀಕ್ಷೆಯ ಬಗ್ಗೆ ಮಕ್ಕಳಲ್ಲಿ ಇರುವ ಭಯ ಹೋಗಲಾಡಿಸಿ ಮಕ್ಕಳಿಗೆ ಆತ್ಮಸ್ತೈರ್ಯ ತುಂಬಿರಿ ಎಂದು ಡಿಡಿಪಿಯು ಚೆಲುವಯ್ಯ ಅವರು ಹೇಳಿದರು.
ಬುಧವಾರ ನಗರದ ಪದವಿ ಪೂರ್ವ ಶಿಕ್ಷಣ ಕಾಲೇಜು, ಮಂಡ್ಯ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಸುಂಡಹಳ್ಳಿ ಗ್ರಾಮದಲ್ಲಿ (ಸಿದ್ದಯ್ಯನ ಕೊಪ್ಪಲು ಗ್ರಾಮದ ಗೇಟ್ ಸಮೀಪ) ಕಾವೇರಿ ತಾಂತ್ರಿಕ ಮಹಾ ವಿದ್ಯಾಲಯದ ಸೆಮಿನಾರ್ ಹಾಲ್‌ನಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಸಂಬಂಧಿಸಿದಂತೆ ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಜಿಲ್ಲೆಯ 22 ಕೇಂದ್ರಗಳಲ್ಲೂ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿವೆ. 19076 ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಲಿದ್ದಾರೆ. ವಿದ್ಯಾರ್ಥಿಗಳ ಆಂತರಿಕ ಪಟ್ಟಿಯಲ್ಲಿ ಯಾವುದೇ ರೀತಿಯ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಶಿಕ್ಷಕರು ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಬೇಕು. ಪರೀಕ್ಷಾ ಕೇಂದ್ರದಲ್ಲಿ ಶಿಕ್ಷಕರು ಶಿಸ್ತು ಕಾಪಾಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳು ಇರಲಿ ಎಂದರು.
ಕಾವೇರಿ ತಾಂತ್ರಿಕ ಮಹಾವಿದ್ಯಾಲಯದ ಕಾರ್ಯದರ್ಶಿ ಪ್ರೊ.ಟಿ ನಾಗೇಂದ್ರ ಅವರು ಮಾತನಾಡಿ, ಶಿಕ್ಷಕರು ಪರೀಕ್ಷೆಯ ಬಗ್ಗೆ ಸರಿಯಾಗಿ ತಿಳಿದುಕೊಂಡು ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಮಾಹಿತಿ ನೀಡಬೇಕು. ಈ ನಿಟ್ಟಿನಲ್ಲಿ ಯೋಜನೆ ಸಿದ್ಧಗೊಳಿಸಿ ಜಿಲ್ಲೆಯನ್ನು ರಾಜ್ಯದಲ್ಲಿ ಪ್ರಥಮ ಸ್ಥಾನ ಬರುವಂತೆ ಮಾಡಬೇಕು.ಮಕ್ಕಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಮಾಡುವಾಗ ಸ್ಥಳೀಯ ಶಿಕ್ಷಕರಿಗೆ ಅವಕಾಶ ನೀಡಿ ಎಂದು ನುಡಿದರು.
ಇದೇ ವೇಳೆ ದ್ವಿತೀಯ ಪಿ.ಯು.ಸಿ ಪರೀಕ್ಷೆಗೆ ಸಂಬಂಧಪಟ್ಟ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕಾವೇರಿ ತಾಂತ್ರಿಕ ಮಹಾವಿದ್ಯಾಲಯದ ಅಧ್ಯಕ್ಷ ಡಾ.ಎಚ್ ಪಿ ರಾಜು, ಜಿಲ್ಲಾ ಸಂಯೋಜಕರಾದ ಪ್ರೊ. ಸ್ವಾಮಿ, ಪ್ರೊ.ಎಸ್.ಮಲ್ಲೇಶ್, ಪ್ರೊ.ಮಹದೇವಸ್ವಾಮಿ, ಪ್ರೊ.ಎಂ.ಎನ್.ಮಹೇಶ್ ಚಂದ್ರ ಹಾಗೂ ತಾಲೂಕಿನ ಹಾಗೂ ಜಿಲ್ಲೆಯ ವಿಜ್ಞಾನ ವಿಭಾಗದ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.