ಗದಗ: ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಸಾರಿದ ರೇಣುಕಾಚಾರ್ಯರ ಸಂದೇಶವು ಇಂದಿನ ಅಶಾಂತಿಯ ಜಗತ್ತಿಗೆ ಅತ್ಯಂತ ಅವಶ್ಯಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.ನಗರದ ಜಿಲ್ಲಾಡಳಿತ ಭವನದಲ್ಲಿ ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಭಾನುವಾರ ನಡೆದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಉಪನ್ಯಾಸಕಿ ಡಾ. ಜಯಶ್ರೀ ಎಂ. ಹೊಸಮನಿ ಮಾತನಾಡಿ, ರೇಣುಕಾಚಾರ್ಯರು ಅಗಸ್ತ್ಯ ಮಹರ್ಷಿಗಳಿಗೆ ಬೋಧಿಸಿದ ಶಿವಾದ್ವೈತ ಸಿದ್ಧಾಂತವು ಸಿದ್ಧಾಂತ ಶಿಖಾಮಣಿ ಗ್ರಂಥದ ಮೂಲಕ ನಮಗೆ ಲಭ್ಯವಾಗಿದೆ. ಈ ಗ್ರಂಥವು ಅಷ್ಟಾವರಣ, ಪಂಚಾಚಾರ ಮತ್ತು ಷಟಸ್ಥಲಗಳ ಮೂಲಕ ಮನುಷ್ಯನು ಹೇಗೆ ಮುಕ್ತಿಯನ್ನು ಪಡೆಯಬಹುದು ಎಂಬುದನ್ನು ಹಂತ- ಹಂತವಾಗಿ ವಿವರಿಸುತ್ತದೆ.
ಮನುಷ್ಯ ಜನ್ಮವು ಅತ್ಯಂತ ದುರ್ಲಭವಾದುದು. ಜೀವನದಲ್ಲಿ ಸಾರ್ಥಕತೆ ಪಡೆಯಲು ಅಹಿಂಸೆ, ಸತ್ಯ, ಅಸ್ತೇಯ, ಬ್ರಹ್ಮಚರ್ಯ, ದಯೆ, ಕ್ಷಮೆ, ದಾನ, ಪೂಜೆ, ಜಪ ಮತ್ತು ಧ್ಯಾನ ಎಂಬ ಹತ್ತು ಧರ್ಮಸೂತ್ರಗಳನ್ನು ಅಳವಡಿಸಿಕೊಳ್ಳಬೇಕು. ರೇಣುಕಾಚಾರ್ಯರು ಅಂದಿನ ಕಾಲದಲ್ಲೇ ಮಹಿಳೆಯರಿಗೆ ಸಮಾನ ಗೌರವ ನೀಡಿದ್ದರು. ಲಿಂಗಧಾರಣೆ ಮಾಡಿದವರೆಲ್ಲರೂ ಸಮಾನರು ಎಂಬ ತತ್ವದ ಮೂಲಕ ಸಾಮಾಜಿಕ ಮತ್ತು ಧಾರ್ಮಿಕ ಕ್ರಾಂತಿಯನ್ನು ಮಾಡಿದ್ದರು ಎಂದರು.ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು. ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ.ಆರ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ಡಾ. ಬಸವರಾಜ ಬಳ್ಳಾರಿ, ಶ್ರೀನಿವಾಸ್ ಮೂರ್ತಿ, ಎಸ್.ಎನ್. ಬಳ್ಳಾರಿ ಸೇರಿದಂತೆ ಸಮಾಜದ ಗಣ್ಯರು, ಮುಖಂಡರು, ಸಾರ್ವಜನಿಕರು ಇದ್ದರು. ಅಕ್ಷತಾ ಹಿರೇಮಠ ಹಾಗೂ ಸಂಗಡಿಗರು ನಾಡಗೀತೆ ಪ್ರಸ್ತುತಪಡಿಸಿದರು. ಪ್ರೊ. ಬಾಹುಬಲಿ ಜೈನರ ನಿರೂಪಿಸಿದರು.