ಕಲ್ಲಡ್ಕ ಹೆದ್ದಾರಿ ವಾರದೊಳಗೆ ದುರಸ್ತಿ ಮಾಡಿ: ಗುಂಡೂರಾವ್‌ ಸೂಚನೆ

KannadaprabhaNewsNetwork |  
Published : Jun 11, 2024, 01:39 AM IST
ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ದಿನೇಶ್‌ ಗುಂಡೂರಾವ್‌. | Kannada Prabha

ಸಾರಾಂಶ

ಬಿಸಿ.ರೋಡ್- ಕಲ್ಲಡ್ಕ- ಮಾಣಿ ರಾಷ್ಟ್ರೀಯ ಹೆದ್ದಾರಿ ದುರಸ್ತಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು, ಮಳೆ ನೀರು ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕು. ಮಳೆಯಿಂದ ಕಾಮಗಾರಿ ಮತ್ತೆ ಹಾನಿ ಆದರೆ ಮತ್ತೆ ದುರಸ್ತಿ ಮಾಡಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾದು ಹೋಗಿರುವ ಎಲ್ಲ ರಾಷ್ಟ್ರೀಯ ಹೆದ್ದಾರಿಗಳನ್ನು ಸಮರ್ಪಕವಾಗಿ ದುರಸ್ತಿ ಮಾಡಿ ಸುಗಮ ಸಂಚಾರಕ್ಕೆ ಅನುಕೂಲಕರವಾಗಿ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೆದ್ದಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಳೆಗಾಲದ ಸಿದ್ಧತೆಗಳ ಬಗ್ಗೆ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಬಿಸಿ.ರೋಡ್- ಕಲ್ಲಡ್ಕ- ಮಾಣಿ ರಾಷ್ಟ್ರೀಯ ಹೆದ್ದಾರಿ ದುರಸ್ತಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು, ಮಳೆ ನೀರು ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದ ಅವರು, ವಾಹನಗಳು ಸುಗಮವಾಗಿ ಸಂಚರಿಸಲು ರಸ್ತೆಯನ್ನು ಅಭಿವೃದ್ಧಿಪಡಿಸಬೇಕು. ಮಳೆಯಿಂದ ಕಾಮಗಾರಿ ಮತ್ತೆ ಹಾನಿ ಆದರೆ ಮತ್ತೆ ದುರಸ್ತಿ ಮಾಡಬೇಕು. ಮಳೆಗಾಲ ಪೂರ್ಣಗೊಳ್ಳುವವರೆಗೂ ಈ ಹೆದ್ದಾರಿ ಮೇಲೆ ನಿಗಾ ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಕಲ್ಲಡ್ಕ ಪೇಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ತೀವ್ರ ದುಸ್ತರವಾಗಿದ್ದು, ಸಾರ್ವಜನಿಕರು ಪ್ರತಿಕ್ಷಣವೂ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಇದರಿಂದ ಮಾಣಿ-ಬಿಸಿ.ರೋಡ್ ಮಧ್ಯೆ ಸಂಚಾರವು ದುಸ್ತರವಾಗಿದ್ದು ಸಾರ್ವಜನಿಕರು ಬೇರೆ ದೂರದ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ ಎಂದು ಸಚಿವರ ಗಮನಕ್ಕೆ ತಂದರು.

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ಪುಂಜಾಲಕಟ್ಟೆ- ಚಾರ್ಮಾಡಿ ಹೆದ್ದಾರಿ ವಿಸ್ತರಣೆಗೆ ಕಾಮಗಾರಿ ನಡೆಯುತ್ತಿದ್ದು, ಮಳೆಗಾಲದಲ್ಲಿ ಸುಗಮ ಸಂಚಾರಕ್ಕೆ ಸಮಸ್ಯೆ ಆಗುತ್ತಿದೆ ಎಂದು ತಿಳಿಸಿದರು. ಈ ಹೆದ್ದಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದರೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಮ ವಹಿಸಲು ಸಚಿವರು ಸೂಚಿಸಿದರು.

ಕೂಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಅಡಿಪಾತ್ರದಲ್ಲಿ ಹಾಕಿರುವ ಮಣ್ಣಿನಿಂದ ಮಳೆಗಾಲದಲ್ಲಿ ನದಿ ನೀರಿನ ಸುಗಮ ಹರಿವಿಗೆ ಅಡ್ಡಿಯಾಗಿ ಹಾಲಿ ಸೇತುವೆಗೆ ಅಪಾಯ ಸಾಧ್ಯತೆ ಇರುವುದರಿಂದ ಈ ಮಣ್ಣನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ನವೀನ್ ಮಾತನಾಡಿ, ಈಗಾಗಲೇ ಕೂಳೂರು ಸೇತುವೆ ಮಣ್ಣನ್ನು ತೆರವುಗೊಳಿಸಲು ಕಾಮಗಾರಿ ನಡೆಯುತ್ತಿದೆ. ಕಲ್ಲಡ್ಕ ಹೆದ್ದಾರಿಯಲ್ಲಿ ರಸ್ತೆಯನ್ನು ಸುಸ್ಥಿತಿಯಲ್ಲಿಡಲು ಆದ್ಯತೆಯಲ್ಲಿ ಕೆಲಸ ನಡೆಯುತ್ತಿದೆ ಎಂದು ಎಂದು ತಿಳಿಸಿದರು.

ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್, ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್ ಸಿಬಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!