ಮಳೆಯಿಂದ ಹಾನಿಯಾಗಿರುವ ರಸ್ತೆಗಳನ್ನು ಶೀಘ್ರವಾಗಿ ದುರಸ್ತಿಪಡಿಸಿ : ಸಚಿವ ಜಾರ್ಜ್‌

KannadaprabhaNewsNetwork |  
Published : Nov 04, 2024, 12:18 AM IST
ಚಿಕ್ಕಮಗಳೂರು ಜಿಪಂ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಸಭೆ ಸಚಿವ ಕೆ.ಜೆ. ಜಾರ್ಜ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. | Kannada Prabha

ಸಾರಾಂಶ

ಚಿಕ್ಕಮಗಳೂರು, ಮಳೆಯಿಂದ ಹಾನಿಯಾಗಿರುವ ರಸ್ತೆಗಳನ್ನು ದುರಸ್ತಿಪಡಿಸಿ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡುವಂತೆ ರಾಜ್ಯದ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಸಭೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಮಳೆಯಿಂದ ಹಾನಿಯಾಗಿರುವ ರಸ್ತೆಗಳನ್ನು ದುರಸ್ತಿಪಡಿಸಿ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡುವಂತೆ ರಾಜ್ಯದ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಅನೇಕ ರಸ್ತೆಗಳು ಹಾಳಾಗಿದ್ದು ದುರಸ್ತಿ ಕಾರ್ಯಗಳಿಗೆ ಸರ್ಕಾರ ಈಗಾಗಲೇ ಅನುದಾನ ಬಿಡುಗಡೆ ಮಾಡಿದೆ. ಇವುಗಳ ದುರಸ್ತಿ ಕಾರ್ಯ ಗುಣಮಟ್ಟದಿಂದ ನಿರ್ವಹಿಸಿ ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡಬೇಕು. ಮಳೆ ಪ್ರಮಾಣ ಕಡಿಮೆಯಾದ ನಂತರ ಶಾಶ್ವತವಾಗಿ ರಸ್ತೆ ಕಾಮಗಾರಿ ಕೈಗೊಳ್ಳಬೇಕು ಎಂದ ಅವರು ಮಳೆಯಿಂದ ಹಾನಿ ಗೊಳಗಾದ ಮನೆ ಹಾಗೂ ಬೆಳೆ ನಾಶಗಳ ಕುರಿತು ಪರಿಶೀಲನೆ ನಡೆಸಿ ಪ್ರತಿಯೊಬ್ಬ ಫಲಾನುಭವಿಗೆ ಪರಿಹಾರ ಒದಗಿಸಿಕೊಡಬೇಕು ಎಂದು ತಿಳಿಸಿದರು.ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಜಿಲ್ಲೆಯ ಗುಡ್ಡೆತೋಟ ಗ್ರಾಮವನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಿ ಗ್ರಾಮದ ಜನರ ಸ್ಥಳಾಂತರಕ್ಕೆ 10 ಗುಂಟೆ ಜಾಗ ಗುರುತಿಸಲಾಗಿದೆ. ಅತಿ ಸೂಕ್ಷ್ಮ ಪ್ರದೇಶದ ನಿವಾಸಿಗಳನ್ನು ಸ್ಥಳಾಂತರಗೊಳಿಸಲು ಈಗಾಗಲೇ ಹಲವಾರು ಸಭೆ ಕರೆದು ಚರ್ಚಿಸಲಾಗಿದೆ. ಸ್ಥಳಾಂತರಕ್ಕೆ ನಿವೇಶನ ಗುರುತಿಸಲಾಗಿದ್ದರೂ ಗ್ರಾಮದ ಜನರು ಸ್ಥಳಾಂತರಕ್ಕೆ ನಿರಾಕರಿಸುತ್ತಿದ್ದಾರೆ. ಶೀಘ್ರ ವಾಗಿ ಅವರ ಮನವೊಲಿಸಿ ಸ್ಥಳಾಂತರಿಸಲಾಗುವುದು ಎಂದರು.

ಪ್ರವಾಹ ಹಾಗೂ ಇತರೆ ವಿಪತ್ತು ಪರಿಸ್ಥಿತಿ ಎದುರಿಸಲು ಎನ್‌ಡಿಆರ್‌ಎಫ್ ತಂಡ ರಚಿಸಿ ತರಬೇತಿ ನೀಡಲಾಗಿದೆ. ಜಿಲ್ಲೆಯಲ್ಲಿ ಕಡೂರು, ಅಜ್ಜಂಪುರ, ಕಳಸ ಹಾಗೂ ಕೊಪ್ಪ ತಾಲೂಕುಗಳಲ್ಲಿ ಒಟ್ಟು ನಾಲ್ಕು ಅಗ್ನಿಶಾಮಕ ಕಚೇರಿ ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ ಎಂದು ಹೇಳಿದರು.2019 ರಲ್ಲಿ ಅತಿವೃಷ್ಠಿಯಿಂದ ಹಾನಿಯಾದ ಚನ್ನಹಡ್ಲು ಗ್ರಾಮದ ನಿರಾಶ್ರಿತರಿಗೆ ಪುನರ್ವಸತಿ ಯೋಜನೆಯಡಿ ಹಕ್ಕುಪತ್ರ ವಿತರಿಸಲಾಗಿದೆ. ಹಾನಿಯಾಗಿರುವ ಮನೆಗಳ ಕುರಿತು ಪರಿಶೀಲನೆ ನಡೆಸಿ ಫಲಾನುಭವಿಗಳಿಗೆ ಪರಿಹಾರ ಒದಗಿಸಲಾಗುತ್ತಿದೆ. ಹಾನಿಯಾದ ರಸ್ತೆಗಳಿಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಮಳೆ ಪ್ರಮಾಣ ಇಳಿಕೆಯಾದ ನಂತರ ರಸ್ತೆ ಕಾಮಗಾರಿ ನಿರ್ವಹಿಸಲಾಗುವುದು ಎಂದರು.ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿ, ರಸ್ತೆ ದುರಸ್ತಿ ಕಾಮಗಾರಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಅದೇ ರೀತಿ ದುರಸ್ತಿ ಕಾರ್ಯ ಗುಣಮಟ್ಟದಿಂದ ಪೂರ್ಣಗೊಳಿಸಬೇಕು. ಮಳೆಯಿಂದ ಕಾಫಿ, ಅಡಕೆ ಹಾಗೂ ಕಾಳು ಮೆಣಸು ಬೆಳೆ ನಾಶವಾಗಿದೆ. ಬೆಳೆ ನಾಶವಾಗಿರುವ ರೈತರಿಗೆ ಪರಿಹಾರ ನೀಡಲು ಕ್ರಮವಹಿಸಿ ಎಂದು ಹೇಳಿದರು. ತರೀಕೆರೆ ಶಾಸಕ ಬಿ.ಎಚ್. ಶ್ರೀನಿವಾಸ್ ಮಾತನಾಡಿ, ಭಾರಿ ಮಳೆಯಿಂದ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಶೀಘ್ರ ಪರಿಹಾರ ಒದಗಿಸಿ ಕೊಡಬೇಕು. ಅಜ್ಜಂಪುರ ಕೇತ್ರದಲ್ಲಿ ಅನೇಕ ರಸ್ತೆಗಳು ಹಾನಿಯಾಗಿವೆ. ಅವುಗಳ ಪೂರ್ಣ ದುರಸ್ತಿಗೆ ಅನುದಾನದ ಕೊರತೆಯಿದೆ. ವಿಶೇಷ ಅನುದಾನ ನೀಡಿ ವ್ಯವಸ್ಥಿತವಾದ ರಸ್ತೆ ನಿರ್ಮಾಣಕ್ಕೆ ಸಹಕರಿಸಬೇಕು ಎಂದರು.ಕಡೂರು ಕ್ಷೇತ್ರದ ಶಾಸಕ ಕೆ.ಎಸ್. ಆನಂದ್ ಮಾತನಾಡಿ, ಕಡೂರು ತಾಲೂಕಿನಲ್ಲಿ ಸಣ್ಣ ನೀರಾವರಿ ಇಲಾಖೆಗೆ ಒಳಪಟ್ಟ 2 ಕೆರೆಗಳು ಅಪಾಯದಲ್ಲಿವೆ. ಇವುಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿ ಯಾವುದೇ ಅಪಾಯ ಸಂಭವಿಸದಂತೆ ಎಚ್ಚರಿಕೆಯಿಂದ ಕ್ರಮ ವಹಿಸಬೇಕು. ರಸ್ತೆ ದುರಸ್ತಿ ಕಾರ್ಯದಲ್ಲಿ ವೇಗ ಪಡೆದು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಹೇಳಿದರು.ಚಿಕ್ಕಮಗಳೂರು ಕ್ಷೇತ್ರದ ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ಕೇತ್ರದಲ್ಲಿ ವಿದ್ಯುತ್ ಹಾನಿಗೊಳಗಾದ 3 ಮನೆಗಳಿಗೆ ಇನ್ನೂ ಪರಿಹಾರ ನೀಡಿಲ್ಲ. ಅಧಿಕಾರಿಗಳು ಇವುಗಳನ್ನು ಪರಿಶೀಲಿಸಿ ಫಲಾನುಭವಿಗಳಿಗೆ ಪರಿಹಾರ ಒದಗಿಸಿ ಕೊಡಲು ಕ್ರಮವಹಿಸಿ ಎಂದರು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ, ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಕೃಷ್ಣ ಮೂರ್ತಿ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ, ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್. ಹರೀಶ್, ಭದ್ರಾ ಕಾಡಾ ಅಧ್ಯಕ್ಷ ಡಾ.ಅಂಶುಮಂತ್ ಉಪಸ್ಥಿತರಿದ್ದರು. 3 ಕೆಸಿಕೆಎಂ 1ಚಿಕ್ಕಮಗಳೂರು ಜಿಪಂ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಸಭೆ ಸಚಿವ ಕೆ.ಜೆ. ಜಾರ್ಜ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!