ಉಡುಪಿ: ಜಿಲ್ಲೆಯಲ್ಲಿ ಹೆಚ್ಚು ಮಳೆಯಿಂದಾಗಿ ಹಾಳಾದ ರಸ್ತೆಗಳನ್ನು ತ್ವರಿತವಾಗಿ ದುರಸ್ತಿ ಮಾಡಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಸೂಚನೆ ನೀಡಿದರು.
ಹವಾಮಾನ ಇಲಾಖೆಯಿಂದ ಪ್ರತಿದಿನ ನೀಡುವ ಹವಾಮಾನ ಮುನ್ಸೂಚನೆಯ ಮಾಹಿತಿಯನ್ನು ಸಾರ್ವಜನಿಕರಿಗೆ ಹಾಗೂ ವಿಶೇಷವಾಗಿ ಮೀನುಗಾರಿಕೆಗೆ ತೆರಳುವ ಮೀನುಗಾರರುಗಳಿಗೆ ಒದಗಿಸಬೇಕು. ಮೀನುಗಾರರು ಸಮುದ್ರದಲ್ಲಿ ಮೀನುಗಾರಿಕೆ ಚಟುವಟಿಕೆಗಳಿಗೆ ಹೋಗುವಾಗ ಕಡ್ಡಾಯವಾಗಿ ಲೈಫ್ ಜಾಕೆಟ್ ಗಳನ್ನು ಬಳಸುವಂತೆ ಮನವೊಲಿಸಬೇಕು. ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣವಿದ್ದಲ್ಲಿ ಮೀನುಗಾರಿಕೆಗೆ ಹೋಗದಂತೆ ಎಚ್ಚರವಹಿಸಬೇಕು ಎಂದರು.
ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಬಂದರಿನ ವಿಸ್ತರಣೆಗೆ ಯೋಜನೆ ರೂಪಿಸಬೇಕು. ನೂತನ ಹೆಜಮಾಡಿ ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.ಕರಾವಳಿ ಭಾಗಗಳಲ್ಲಿ ಕಡಲಕೊರೆತ ಪ್ರತಿ ವರ್ಷವೂ ಉಂಟಾಗುತ್ತಿದೆ. ಇವುಗಳ ತಡೆಗೆ ಶಾಶ್ವತ ವೈಜ್ಞಾನಿಕ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಬೇಕು. ಮಳೆಯಿಂದ ಭತ್ತದ ಬೆಳೆ ಹಾಗೂ ತೋಟಗಾರಿಕೆ ಹಾನಿಗಳನ್ನು ನಿಖರವಾಗಿ ಗುರುತಿಸಿ, ರೈತರಿಗೆ ಪರಿಹಾರವನ್ನು ಒದಗಿಸಬೇಕು ಎಂದರು.
ಜನರಿಗೆ ಮನೆಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ 9/11 ಎ ದಾಖಲೆಗಳನ್ನು ಪಡೆಯಲು ಕೆಲವು ನಿಯಮಾವಳಿಗಳಿಂದ ತೊಂದರೆ ಉಂಟಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ನಿಯಮಾವಳಿಯಲ್ಲಿ ಕೆಲವೊಂದು ವಿನಾಯಿತಿ ನೀಡಿದ್ದಲ್ಲಿ ಸಮಸ್ಯೆಗಳು ಪರಿಹರಿಸಬಹುದಾಗಿದೆ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕೂಡಲೇ ಕಳುಹಿಸಿ ಎಂದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.