ಕನ್ನಡಪ್ರಭ ವಾರ್ತೆ ದಾವಣಗೆರೆ
ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ರಸ್ತೆ ಅಪಘಾತ ಪ್ರಕರಣಗಳು ಪ್ರತಿ ವರ್ಷ ಹೆಚ್ಚುತ್ತಿದ್ದು, ಇದರಲ್ಲಿ ಶೇ.90ರಷ್ಟು ಪ್ರಕರಣಗಳಲ್ಲಿ ಅತಿವೇಗದ ವಾಹನ ಚಾಲನೆ, ಅಜಾಗರೂಕತೆಗಳಿಂದಾಗಿದೆ. ಕೆಲವು ಕಡೆ ಅವೈಜ್ಞಾನಿಕ ರಸ್ತೆ ಕಾಮಗಾರಿಗಳಿಂದಲೂ ಅಪಘಾತಗಳಾಗಿವೆ ಎಂದರು.
ಪೊಲೀಸ್ ಇಲಾಖೆ ಅಪಘಾತ ಸಂಭವಿಸುವ ಬ್ಲ್ಯಾಕ್ ಸ್ಪಾಟ್ ಗುರುತಿಸಿದೆ. ಕಳೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಆ ಸ್ಥಳಗಳ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಹಾಗೂ ಇತರ ಇಲಾಖೆಗಳಿಗೆ ಸೂಚಿಸಲಾಗಿತ್ತು. ಅವುಗಳಲ್ಲಿ ಬಹುತೇಕ ಕಾಮಗಾರಿ ಕೈಗೊಳ್ಳಲಾಗಿದ್ದು, ಪೊಲೀಸ್ ಇಲಾಖೆ ಹಾಗೂ ಹೆದ್ದಾರಿ ವಿಭಾಗದ ಅಧಿಕಾರಿಗಳು ಜಂಟಿ ಸರ್ವೇ ನಡೆಸಿ ಶೀಘ್ರ ವರದಿ ನೀಡಬೇಕು ಎಂದು ಸೂಚನೆ ನೀಡಿದರು.ಜಿಲ್ಲೆಯಲ್ಲಿ ರಸ್ತೆ ಅಪಘಾತ ಮತ್ತು ಅದರಿಂದ ಉಂಟಾಗುವ ಪ್ರಾಣಹಾನಿ ಹಾಗೂ ಗಾಯಾಳುಗಳ ಪ್ರಮಾಣ ತಗ್ಗಿಸುವ ಅಗತ್ಯವಿದೆ. ಇದಕ್ಕಾಗಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವ್ಯವಸ್ಥಿತವಾದ ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆಯಿದ್ದು ರಸ್ತೆಗಳಲ್ಲಿ ಗುಂಡಿ ಬಿದ್ದಿವೆ ಮತ್ತು ಕೆಲವೆಡೆ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇಂತಹ ಸ್ಥಳಗಳಲ್ಲಿ ನಿಧಾನವಾಗಿ ಹಾಗೂ ಜಾಗರೂಕತೆಯಿಂದ ವಾಹನ ಚಾಲನೆ ಮಾಡಲು ಈ ಬಗ್ಗೆ ಸೈನ್ ಬೋರ್ಡ್ ಅಳವಡಿಸಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತಾನಾಡಿ, ನಗರದಲ್ಲಿ ಜಲಸಿರಿ ಯೋಜನೆ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆ ಗುತ್ತಿಗೆ ದಾರರು ಕಾಮಗಾರಿ ಪೂರ್ಣಗೊಂಡ ಸ್ಥಳಗಳಲ್ಲಿ ಮೊದಲಿನಂತೆ ರಸ್ತೆ ಮಾಡಬೇಕು. ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ನಲ್ಲಿ ಎರಡೂ ಬದಿ ಸರ್ವೀಸ್ ರಸ್ತೆ ಕಾಮಗಾರಿ ವೇಗವಾಗಿ ಪೂರ್ಣಗೊಳಿಸಬೇಕು. ವಿದ್ಯಾನಗರ ಲಾಸ್ಟ್ ಬಸ್‌ಸ್ಟಾಪ್‌ನಿಂದ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿಯವರೆಗೆ ಪಾಲಿಕೆ ವ್ಯಾಪ್ತಿಯಲ್ಲಿನ ಪ್ರಮುಖ ರಸ್ತೆಗಳಲ್ಲಿ ಬೀದಿ ದೀಪಗಳು ಕಾರ್ಯಾರಂಭ ಮಾಡದೇ ಇರುವ ಕಾರಣ ಪಾದಚಾರಿಗಳು ರಸ್ತೆ ದಾಟುವಾಗ ಲಘು ಹಾಗೂ ಮಾರಣಾಂತಿಕ ಅಪಘಾತಗಳು ಸಂಭವಿಸುತ್ತಿದೆ ಎಂದರು.