ಶೇ. 64 ಮಳೆ ಕೊರತೆ: ವಾರದೊಳಗೆ ಸರ್ಕಾರಕ್ಕೆ ವರದಿ

KannadaprabhaNewsNetwork |  
Published : Jul 22, 2026, 02:00 AM IST
ವಿಜಯನಗರ ಜಿಲ್ಲೆಯ ವಿವಿಧೆಡೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಬರಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ವಿಜಯನಗರ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಕಡಿಮೆ ಮಳೆಯಾಗಿದ್ದು, ಬರದ ಛಾಯೆ ಆವರಿಸಿದೆ. ಈ ನಿಟ್ಟಿನಲ್ಲಿ ಮಳೆಯಾಶ್ರಿತ ಜಮೀನುಗಳಿಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಲಾಗಿದೆ. ಅಲ್ಲಿನ ನೈಜ ಸ್ಥಿತಿಯ ಕುರಿತು ಒಂದು ವಾರದೊಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾಹಿತಿ ನೀಡಿದರು

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಕಡಿಮೆ ಮಳೆಯಾಗಿದ್ದು, ಬರದ ಛಾಯೆ ಆವರಿಸಿದೆ. ಈ ನಿಟ್ಟಿನಲ್ಲಿ ಮಳೆಯಾಶ್ರಿತ ಜಮೀನುಗಳಿಗೆ ಭೇಟಿ ನೀಡಿ ಬರ ಅಧ್ಯಯನ ನಡೆಸಲಾಗಿದೆ. ಅಲ್ಲಿನ ನೈಜ ಸ್ಥಿತಿಯ ಕುರಿತು ಒಂದು ವಾರದೊಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಮಾಹಿತಿ ನೀಡಿದರು.

ಜಿಲ್ಲಾದ್ಯಂತ ಕೃಷಿ ಬೆಳೆ ಹಾನಿ, ಕುಡಿಯುವ ನೀರು ಹಾಗೂ ಉದ್ಯೋಗ ಖಾತರಿ ಯೋಜನೆ ಕುರಿತು ವಸ್ತು ಸ್ಥಿತಿ ಪರಿಶೀಲನೆಗೆ ವಿವಿಧ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಸರಾಸರಿ ಶೇ. 60ರಷ್ಟು ತೀವ್ರ ಮಳೆ ಕೊರತೆ ದಾಖಲಾಗಿದೆ. ಆದ್ದರಿಂದ ಪ್ರತಿಯೊಂದು ತಾಲೂಕಿನಲ್ಲೂ ಆಯ್ದ ಕೃಷಿ ಭೂಮಿಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಜಮೀನುಗಳ ಪರಿಸ್ಥಿತಿ, ಬೆಳೆ ನಷ್ಟ ಮತ್ತು ರೈತರ ಸಂಕಷ್ಟದ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಕಳೆದ ಎರಡ್ಮೂರು ತಿಂಗಳಿಂದ ಸೂಕ್ತ ಮಳೆಯಾಗದೆ ಜಿಲ್ಲಾದ್ಯಂತ ಬೆಳೆ ಹಾನಿಯಾಗಿದ್ದು, ರೈತರು ಹಾಗೂ ಕೃಷಿ ಕಾರ್ಮಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಉದ್ಯೋಗ ಅರಸಿ ನಗರಗಳಿಗೆ ಗುಳೆ ಹೋಗುತ್ತಿದ್ದಾರೆ. ವಿಬಿ ಜಿ ರಾಮ್ ಜಿ ಯೋಜನೆಯಡಿ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ತಕ್ಷಣವೇ ಕಾಮಗಾರಿ ಆರಂಭಿಸಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗುವುದು. ಸ್ಥಳೀಯವಾಗಿಯೇ ಉದ್ಯೋಗ ದೊರೆಯುವುದರಿಂದ ಗ್ರಾಮಸ್ಥರು ಮತ್ತು ಕೂಲಿ ಕಾರ್ಮಿಕರು ಗುಳೆ ಹೋಗಬಾರದು ಎಂದು ಮನವಿ ಮಾಡಿದರು.

ಪೋಷಕರು ಕೆಲಸದ ಹುಡುಕಾಟದಲ್ಲಿ ಮಕ್ಕಳನ್ನು ಶಾಲೆಯಿಂದ ಬಿಡಿಸಿ ತಮ್ಮೊಂದಿಗೆ ಕರೆದೊಯ್ಯಬಾರದು. ಅವರ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ನೋಡಿಕೊಳ್ಳುವುದು, ಗುಣಮಟ್ಟದ ಶಿಕ್ಷಣ ನೀಡುವುದು ಪೋಷಕರು ಮತ್ತು ಸ್ಥಳೀಯ ಆಡಳಿತದ ಜವಾಬ್ದಾರಿ ಎಂದರು.

ಬೆಳೆ ವಿಮೆ ಆಸರೆ

ಮಳೆ ಅಭಾವದಿಂದ ಉಂಟಾಗಿರುವ ಬೆಳೆ ನಷ್ಟಕ್ಕೆ ಪರಿಹಾರ ಕಂಡುಕೊಳ್ಳಲು ರೈತರು ತಪ್ಪದೇ ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕು. ಇದರಿಂದ ಆರ್ಥಿಕ ನಷ್ಟವನ್ನು ತಗ್ಗಿಸಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಭರದಿಂದ ಸಾಗುತ್ತಿದೆ. ಬಿ.ಎಲ್.ಒ.ಗಳು ಮನೆ ಮನೆಗೆ ತಲುಪಿಸಿರುವ ಎನ್ಯುಮರೇಷನ್ ಫಾರ್ಮ್‌ಗಳನ್ನು ನಾಗರಿಕರು ಸರಿಯಾಗಿ ಭರ್ತಿ ಮಾಡಿ ತಕ್ಷಣ ಮರಳಿಸಬೇಕು. ತಪ್ಪಿದಲ್ಲಿ ಮತದಾನದ ಹಕ್ಕಿನಿಂದ ವಂಚಿತರಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.

ಈ ವೇಳೆ ರೈತರೊಬ್ಬರು ಕಬ್ಬು ಬೆಳೆ ವಿಮಾ ವ್ಯಾಪ್ತಿಗೆ ಒಳಪಡುವುದಿಲ್ಲ. ಆದ್ದರಿಂದ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿ ಕಂಗಾಲಾಗಿದ್ದಾರೆ ಎಂದು ಸಂಕಷ್ಟ ತೋಡಿಕೊಂಡರು.

ಜಿಪಂ ಸಿಇಒ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ ಮಾತನಾಡಿ, ವಲಸೆ ತಡೆಯಲು ವಿಬಿಜಿ ರಾಮ್ ಜಿ ಯೋಜನೆಯಡಿ ಸುಮಾರು 318 ಕಾಮಗಾರಿಗಳು ಚಾಲ್ತಿಯಲ್ಲಿವೆ. ಮುಂಬರುವ ದಿನಗಳಲ್ಲಿ ಎಲ್ಲ ಶ್ರಮಿಕ ವರ್ಗಕ್ಕೆ, ಕೂಲಿ ಕಾರ್ಮಿಕರಿಗೆ, ರೈತರಿಗೆ ಉದ್ಯೋಗ ಒದಗಿಸುವ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಪ್ರಸ್ತುತ 36 ಗ್ರಾಮಗಳಲ್ಲಿ ನೀರಿನ ಅಭಾವ ಉಂಟಾಗಿದ್ದು, ಅದಕ್ಕೆ 46 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ಕುಡಿಯುವ ನೀರು ಪೂರೈಸಲಾಗುತ್ತಿದೆ. ವಿಶೇಷವಾಗಿ ಹೂವಿನಹಡಗಲಿ, ಹರಪನಹಳ್ಳಿ ತಾಲೂಕಿನ ಅರಸಿನಕೇರಾ, ಕೂಡ್ಲಿಗಿ ಭಾಗದಲ್ಲಿ ನೀರು ಪೂರೈಕೆಗೆ ಸೂಕ್ತ ಕ್ರಮ ವಹಿಸಲಾಗಿದೆ. ಕೊಟ್ಟೂರು ಮತ್ತು ಹೊಸಪೇಟೆ ತಾಲೂಕುಗಳಲ್ಲಿ ಯಾವುದೇ ರೀತಿಯ ಗಂಭೀರ ಸಮಸ್ಯೆಯಿಲ್ಲದಿದ್ದರೂ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ವಲಸೆ ಹೋಗುವ ಕುಟುಂಬಗಳ ಮಕ್ಕಳ ಶಾಲಾ ಶಿಕ್ಷಣಕ್ಕೆ ತೊಂದರೆಯಾಗದಂತೆ, ಅವರಿಗೆ ಸ್ಥಳೀಯ ವಸತಿ ನಿಲಯಗಳಲ್ಲಿ ಉಳಿದುಕೊಳ್ಳಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ದೀಪಾ, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಮಂಜುನಾಥ್, ಉಪನಿರ್ದೇಶಕ ವಾಮದೇವ ಕೊಳ್ಳಿ, ಸಹಾಯಕ ನಿರ್ದೇಶಕ ಎಸ್.ಮನೋಹರ್ ಗೌಡ, ಹಗರಿಬೊಮ್ಮನಹಳ್ಳಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಪಿ. ಪಾಟೀಲ್, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಅಧಿಕಾರಿಗಳು ಇದ್ದರು.ಬೆಳೆ ವಿಮೆ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ

ಹಗರಿಬೊಮ್ಮನಹಳ್ಳಿ: ಅತಿವೃಷ್ಟಿ ಹಾಗೂ ಅನಾವೃಷ್ಟಿಯಂತಹ ಪ್ರಕೃತಿ ವಿಕೋಪಗಳಿಂದ ಆಗುವ ನಷ್ಟಗಳನ್ನು ಸರಿಪಡಿಸಲು ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ರೈತ ಸಂಘಟನೆಗಳು ಮತ್ತು ಕೃಷಿ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.ಬರದ ಬವಣೆಯ ಹಿನ್ನೆಲೆಯಲ್ಲಿ ತಾಲೂಕಿನ ಹಂಪಾಪಟ್ಟಣ, ರಾರಾಳು ತಾಂಡಾ, ಮಾದೂರು ಗ್ರಾಮಗಳ ಬೆಳೆ ಹಾನಿ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಕಬ್ಬು ಹಾಗೂ ಮುಸುಕಿನ ಜೋಳ ಮತ್ತಿತರೇ ಮಳೆಯಾಶ್ರಿತ ಬೆಳೆಗಳನ್ನು ಪರಿಶೀಲಿಸಿದರು.

ಈ ವೇಳೆ ರೈತರು ಮಳೆ ಇಲ್ಲದೇ ಕೃಷಿ ಹೂಡಿಕೆಯಲ್ಲಿನ ನಷ್ಟ, ಒಣಗಿರುವ ಬೆಳೆಗಳು, ನಿರೀಕ್ಷಿತ ಇಳುವರಿ ಬಾರದಿರುವ ಕುರಿತು ವಿವರ ನೀಡಿದರು. ಅಲ್ಲದೇ ಕೂಡಲೇ ಬೆಳೆ ಹಾನಿಯನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ ಮಾತನಾಡಿ, ತಾಲೂಕಿನಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಬಿಕ್ಕಟ್ಟು ಇಲ್ಲ. ಕೆಲ ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ನೀರಿನ ಬವಣೆಯ ಮೇಲೆ ನಿಗಾ ವಹಿಸಲಾಗುತ್ತಿದೆ. ಅಗತ್ಯ ಬಿದ್ದರೆ ತಕ್ಷಣ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

ತಹಸೀಲ್ದಾರ್ ಕವಿತಾ, ಕೃಷಿ ಎಡಿಎ ಬಿ.ಎಸ್. ಪಾಟೀಲ್, ತಾಪಂ ಇಒ ಪಿ. ವಿಶ್ವನಾಥ್, ಪಶು ಸಂಗೋಪನಾ ಇಲಾಖೆಯ ಡಾ. ಸೂರಪ್ಪ, ನರೇಗಾ ಎಡಿ ರಮೇಶ್ ಮಾಲಿಂಗಪುರ ಹಾಗೂ ರೈತ ಸಂಘಟನೆಗಳ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗದಗ ಜಿಲ್ಲೆಯ 58 ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಸಾಧ್ಯತೆ
ಕುಡಿವ ನೀರಿನ ಸಮಸ್ಯೆ ನಿವಾರಿಸುವಂತೆ ಆಗ್ರಹಿಸಿ ಪ್ರತಿಭಟನೆ