
ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಜಿ.ಪಂ.ಸಭಾಂಗಣದಲ್ಲಿ ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಬರ ಪರಿಸ್ಥಿತಿ ಕುರಿತು ಬುಧವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾಹಿತಿ ಪಡೆದು ಸಚಿವರು ಮಾತನಾಡಿದರು.
ಜಿಲ್ಲೆಯಲ್ಲಿ ಮಳೆಯಿಂದಾಗಿ ಸ್ಥಳೀಯ ಸಂಸ್ಥೆ, ಲೋಕೋಪಯೋಗಿ, ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯ ರಸ್ತೆಗಳು ಗುಂಡಿ ಬಿದ್ದಿದ್ದು, ಇವುಗಳನ್ನು ಮುಚ್ಚಲು ಅನುದಾನಕ್ಕೆ ಬಿಡುಗಡೆಗೆ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.ಅತಿವೃಷ್ಟಿ ಮತ್ತು ಅನಾವೃಷ್ಟಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಅಗತ್ಯ ನೆರವು ನೀಡಲಾಗುವುದು, ಸರ್ಕಾರದ ಆಶಯದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದರು.
ಈ ಸಂದರ್ಭ ಮಾತನಾಡಿದ ವಿ.ಪಿ.ಶಶಿಧರ್, ಒಳಚರಂಡಿ ಮಂಡಳಿ ಎಂಜಿನಿಯರ್ ಮತ್ತು ಪುರಸಭೆ ಅಧಿಕಾರಿಗಳು ಹೊಂದಾಣಿಕೆಯಿಂದ ಕೆಲಸ ಮಾಡುತ್ತಿಲ್ಲ. ಇದರಿಂದ ಜನರಿಗೆ ಯಾವುದೇ ರೀತಿಯ ಪ್ರಯೋಜನ ಆಗುತ್ತಿಲ್ಲ ಎಂದು ಸಚಿವರ ಗಮನಕ್ಕೆ ತಂದರು.
ಜುಲೈ ತಿಂಗಳಲ್ಲಿ ವಾಡಿಕೆ ಮಳೆ 859 ಮಿ.ಮೀ ಆಗಿದ್ದು, ಇದರಲ್ಲಿ 599 ಮಿ.ಮೀ ಮಾತ್ರ ಈ ಬಾರಿ ಮಳೆಯಾಗಿದೆ ಎಂದು ವಿವರಿಸಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ , ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಶಶಿಧರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಪ್ರಭು, ಪಂಚಾಯತ್ ರಾಜ್ ಎಂಜಿನಿಯರ್ ನಾಯಕ್, ಸೆಸ್ಕ್ ಎಂಜಿನಿಯರ್ ರಾಮಚಂದ್ರ ಹಾಗೂ ಶಾಲಾ ಶಿಕ್ಷಣಾ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು, ನಗರಾಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ನಿರ್ದೇಶಕರಾದ ಮಂಜುನಾಥ್ ರಾಮಣ್ಣ ಅವರು ತಮ್ಮ ಇಲಾಖೆಗೆ ಅಭಿವೃದ್ಧಿ ಕೆಲಸಗಳ ಸಂಬಂಧ ಮಾಹಿತಿ ನೀಡಿದರು.
ನಗರಸಭೆ ಅಧ್ಯಕ್ಷ ಪಿ.ಕಲಾವತಿ ಮಾತನಾಡಿ, ಮಡಿಕೇರಿಯಲ್ಲಿ ಒಳಚರಂಡಿ ಕಾಮಗಾರಿಯೂ ಅಪೂರ್ಣವಾಗಿದೆ ಎಂದು ಸಚಿವರ ಗಮನಕ್ಕೆ ತಂದರು. ಶಾಸಕ ಡಾ.ಮಂತರ್ ಗೌಡ ಮಾತನಾಡಿ ಪೂರಕ ಮಾಹಿತಿ ನೀಡಿದರು.
ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು, ಹಾರಂಗಿ ಬಳಿಯ ಹುಲಸೆ ಗ್ರಾಮದ ಬಳಿಯ ಜಮೀನಿಗೆ ತೆರಳಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗೆ ನಿಗದಿತ ಅವಧಿಯಲ್ಲಿ ಮಳೆಯಾಗದ ಹಿನ್ನೆಲೆ ಬೆಳೆ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.