ರಾಮನಗರ: ಸಾರ್ವಜನಿಕರ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ವಿದ್ಯುತ್ ಮೀಟರ್ ಅಳವಡಿಸಬಾರದು ಮತ್ತು ವಿಧಿಸುತ್ತಿರುವ ವಿದ್ಯುತ್ ಶುಲ್ಕವನ್ನು ಸರ್ಕಾರವೇ ಭರಿಸುವಂತೆ ಇಂಧನ ಸಚಿವ ಕೆ.ಜೆ ಜಾರ್ಜ್ ಅವರಿಗೆ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣಾಗಾರ ಚನ್ನೇನಹಳ್ಳಿ ಶಂಭುಲಿಂಗಯ್ಯ ಮನವಿ ಸಲ್ಲಿಸಿದರು.
ಈ ವಿಷಯವಾಗಿ ಹಿಂದೆ ಸಚಿವರಾಗಿದ್ದ ಸುನಿಲ್ ಕುಮಾರ್ ಅವರಿಗೆ ಮನವಿ ಮಾಡಿದ್ದೆವು. ಅವರು ಸ್ಥಳದಲ್ಲಿ ಅಧಿಕಾರಿಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ತೊಂದರೆ ಕೊಡದಂತೆ ಸೂಚನೆ ನೀಡಿದ್ದರು. ಪ್ರಸ್ತುತ ತಾವುಗಳು ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಮೀಟರ್ ಅಳವಡಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು. ಜೊತೆಗೆ ಸರ್ಕಾರವೇ ಶುದ್ಧ ಕುಡಿಯುವ ನೀರಿನ ಘಟಕಗಳ ವಿದ್ಯುತ್ ಶುಲ್ಕ ಪಾವತಿಸಲು ಕ್ರಮ ವಹಿಸಬೇಕೆಂದು ಮನವಿ ಪತ್ರದ ಮೂಲಕ ಸಾರ್ವಜನಿಕರ ಪರ ಅವಲತ್ತುಕೊಂಡರು.
ಶಾಸಕ ಎಚ್.ಎ.ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯ ಎಸ್. ರವಿ, ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ, ಉಪಾಧ್ಯಕ್ಷೆ ಆಯಿಷಾಬಾನು, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಗಂಗಾಧರ್ ಮತ್ತಿತರರು ಇದ್ದರು.