- ಜಿಲ್ಲೆಯಲ್ಲಿ ಈವರೆಗೆ ಆಗಿರುವ ಮಳೆಹಾನಿ ಕುರಿತು ಶಾಸಕರು, ಅಧಿಕಾರಿಗಳೊಂದಿಗೆ ಸಮಾಲೋಚನೆ ।
ತುರ್ತು ಪರಿಹಾರ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನಕನ್ನಡಪ್ರಭ ವಾರ್ತೆ , ಚಿಕ್ಕಮಗಳೂರು, ಜು.28
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಜಿಲ್ಲೆಯಾದ್ಯಂತ ಆಗಿರುವ ಅಪಾರ ಪ್ರಮಾಣದ ಹಾನಿಗೆ ವಿಶೇಷ ಪರಿಹಾರ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿ ಮತ್ತು ಸಮಸ್ಯೆಗಳ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಭೇಟಿಗೆ ಸದ್ಯದಲ್ಲೇ ದಿನಾಂಕ ಮತ್ತು ಸಮಯ ನಿಗದಿ ಪಡಿಸಲಾಗುವುದು. ಈ ಹಿನ್ನೆಲೆಯಲ್ಲಿ ಮಳೆ ಮತ್ತು ಪ್ರವಾಹದಿಂದ ಆಗಿರುವ ಹಾನಿ ಮತ್ತು ಒಟ್ಟಾರೆ ನಷ್ಟದ ಕುರಿತು ಸಮಗ್ರ ವರದಿ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿ ಬಗ್ಗೆ ತಿಳಿಯಲು ಖುದ್ದಾಗಿ ತೆರಳಿ ಪರಿಶೀಲನೆ ನಡೆಸಿದ್ದೇನೆ. ಸಮಸ್ಯೆಗಳಿಗೆ ತಕ್ಷಣ ತಾತ್ಕಾಲಿಕ ಪರಿಹಾರ ಕಲ್ಪಿಸುವ ಜತೆಗೆ ಶಾಶ್ವತ ಪರಿಹಾರಕ್ಕೂ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು. ಈ ಎಲ್ಲಾ ವಿಚಾರ ಗಳನ್ನು ಜಿಲ್ಲೆಯ ಶಾಸಕರು ಮತ್ತು ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿಯವರೊಂದಿಗಿನ ಭೇಟಿ ವೇಳೆ ಚರ್ಚಿಸ ಲಾಗುವುದು ಎಂದರು.ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಪದ್ಮಾವತಿ ಮಳೆ ಮತ್ತು ಗಾಳಿಯಿಂದ ಮರಗಳು ಬಿದ್ದು ವಿದ್ಯುತ್ ಕಂಬ, ತಂತಿ, ಟ್ರಾನ್ಸ್ ಫಾರ್ಮರ್ ಗಳಿಗೆ ಹಾನಿಯಾಗಿ ಮೆಸ್ಕಾಂಗೆ 8.5 ಕೋಟಿ ರು. ನಷ್ಟವಾಗಿದೆ. ದುರಸ್ತಿ ಕಾರ್ಯ ತ್ವರಿತ ಗೊಳಿಸ ಲಾಗಿದ್ದು, ಹೆಚ್ಚುವರಿ ಗ್ಯಾಂಗ್ ಮೆನ್ ಗಳನ್ನು ಒದಗಿಸಿ ದುರಸ್ತಿ ಕೆಲಸ ಮಾಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಆಗಿರುವ ಹಾನಿಗಳಿಗೆ ನಿಯಮಾವಳಿ ಪ್ರಕಾರ ಪರಿಹಾರ ನೀಡಿದರೆ ಅದು ಸಾಕಾಗು ವುದಿಲ್ಲ. ಹೀಗಾಗಿ ವಿಶೇಷ ಪರಿಹಾರಕ್ಕಾಗಿ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವುದು. ಆ ಮೂಲಕ ಜಿಲ್ಲೆಗೆ ಹೆಚ್ಚಿನ ನೆರವು ಕೋರಲಾಗುವುದು ಎಂದು ತಿಳಿಸಿದರು.ಶಾಸಕರ ಸಲಹೆ ಪಡೆಯಬೇಕು:
ರಸ್ತೆಗಳು ಕುಸಿದಿರುವ ಕಡೆ ಅಪಾಯ ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು. ಮುಂದೆ ಅನಾಹುತ ಸಂಭವಿಸಬಹುದಾದ ಸ್ಥಳಗಳಲ್ಲಿ ಈಗಲೇ ಅಗತ್ಯ ಎಚ್ಚರಿಕೆ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸ್ಥಳೀಯ ಶಾಸಕರ ಸಲಹೆ ಪಡೆದು ಕೆಲಸ ಮಾಡಬೇಕು. ಅದೇ ರೀತಿ ಶಾಸಕರು ಕೂಡ ಅಧಿಕಾರಿಗಳಿಗೆ ಸೂಕ್ತ ಸಲಹೆ ನೀಡಿ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಮಳೆಹಾನಿಗೆ ಸಮಾರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.ಜಿಲ್ಲೆಯನ್ನು ಪ್ರವಾಹ ಪೀಡಿತ ಎಂದು ಘೋಷಿಸುವಂತೆ ಈ ವೇಳೆ ಶಾಸಕರು ಮಾಡಿಕೊಂಡ ಮನವಿಗೆ ಪ್ರತಿಕ್ರಿಯಿಸಿದ ಸಚಿವರು, ಈವರೆಗೆ ಸರ್ಕಾರ ಈ ರೀತಿ ಘೋಷಣೆ ಮಾಡಿಲ್ಲ. ಘೋಷಣೆ ಮಾಡುವ ವೇಳೆ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ಶಾಸಕರಾದ ಟಿ.ಡಿ.ರಾಜೇಗೌಡ, ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ಕೆ.ಎಸ್.ಆನಂದ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಂ ಅಮಟೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.ಬಾಕ್ಸ್--
350 ಮನೆಗಳಿಗೆ ಹಾನಿ: ಜಿಲ್ಲಾಧಿಕಾರಿ ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಶೇ. 64 ರಷ್ಟು ಹೆಚ್ಚುವರಿ ಮಳೆ ಜಿಲ್ಲೆಯಲ್ಲಿ ಆಗಿರುವುದರಿಂದ 350 ಮನೆಗಳಿಗೆ ಹಾನಿಯಾಗಿದೆ ಎಂದು ಮಳೆಹಾನಿ ಕುರಿತ ವಿವರಣೆ ನೀಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದರು. ಈ ಪೈಕಿ 111 ಮನೆಗಳು ಭಾಗಶಃ ಹಾನಿ ಗೊಳಗಾಗಿವೆ. ಉಳಿದ ಮನೆಗಳು ಬಹುತೇಕ ಹಾನಿಗೊಳಗಾಗಿವೆ. ಕಳೆದ 2 ದಿನಗಳಲ್ಲಿ ಕುಸಿದಿರುವ ಮನೆಗಳನ್ನು ಹೊರತುಪಡಿಸಿ ಇತರೆ ಹಾನಿಗೊಳಗಾದ ಮನೆಗಳಿಗೆ ಈಗಾಗಲೇ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಶೇ. 25ಕ್ಕಿಂತ ಹೆಚ್ಚು ಹಾನಿಗೊಳಗಾದ ಮನೆಗಳಿಗೆ 1.20 ಲಕ್ಷ ರು. ಮತ್ತು ಅದಕ್ಕಿಂತ ಕಡಿಮೆ ಹಾನಿಗೊಳಗಾದ ಮನೆಗಳಿಗೆ 6,500 ರು. ತಾತ್ಕಾಲಿಕ ಪರಿಹಾರ ವಿತರಿಸಲಾಗಿದೆ ಎಂದು ಹೇಳಿದರು. ಅದೇ ರೀತಿ ರಸ್ತೆ ಮತ್ತು ಸೇತುವೆಗಳಿಗೂ ಹಾನಿಯಾಗಿದ್ದು, ಸುಮಾರು 55 ಕೋಟಿ ರು. ಹಾನಿಯಾಗಿದೆ. ಕೆಲವೆಡೆ ಸಂಪರ್ಕ ಕಡಿದಿದ್ದು, ಅಂತಹ ಪ್ರದೇಶಗಳ ಸಂಪರ್ಕಕ್ಕೆ ಬೇರೆ ಮಾರ್ಗಗಳ ಮೂಲಕ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು. 29 ಕೆಸಿಕೆಎಂ 1ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿ ಮತ್ತು ಸಮಸ್ಯೆಗಳ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧ್ಯಕ್ಷತೆಯಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಯಿತು. ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಇದ್ದರು.