ಮೀಸಲಾತಿ: ವಾಲ್ಮೀಕಿ ಮಹಾಸಭಾದಿಂದ ಹಗರಿಬೊಮ್ಮನಹಳ್ಳಿಯಲ್ಲಿ ಪ್ರತಿಭಟನೆ

KannadaprabhaNewsNetwork |  
Published : Oct 27, 2026, 02:15 AM IST
ಹಗರಿಬೊಮ್ಮನಹಳ್ಳಿಯಲ್ಲಿ ಪರಿಶಿಷ್ಟರ ಮೀಸಲಾತಿ ಹೆಚ್ಚಳದ ಅಧಿಸೂಚನೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು ಖಂಡಿಸಿ ವಾಲ್ಮೀಕಿ ಮಹಾಸಭಾದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತಿಭಟಿಸಿ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ರಾಜ್ಯದಲ್ಲಿ ಮೀಸಲಾತಿಯ ಪ್ರಮಾಣ ಶೇ. ೫೦ನ್ನು ಮೀರಿದ್ದರಿಂದ, ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಉಚ್ಚ ನ್ಯಾಯಾಲಯ ರದ್ದುಪಡಿಸಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣದ ಏರಿಕೆ ಇಂದಿನ ತುರ್ತು ಅಗತ್ಯವಾಗಿದೆ.

ಹಗರಿಬೊಮ್ಮನಹಳ್ಳಿ: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಪ್ರಮಾಣ ಏರಿಕೆ ಕುರಿತಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದು ಈ ಸಮುದಾಯಗಳ ಪಾಲಿಗೆ ಆಘಾತಕಾರಿಯಾಗಿದೆ ಎಂದು ವಾಲ್ಮೀಕಿ ಮಹಾಸಭಾದ ತಾಲೂಕು ಅಧ್ಯಕ್ಷ ಪವಾಡಿ ಹನಮಂತಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಎಸ್‌ಸಿ-ಎಸ್‌ಟಿ ಪಂಗಡದವರಿಗೆ ಶೈಕ್ಷಣಿಕ ಸಂಸ್ಥೆಗಳ ಪ್ರವೇಶಗಳಲ್ಲಿ ಮತ್ತು ನೇಮಕಾತಿಗಳಲ್ಲಿ ಮೀಸಲಾತಿಯ ಹೆಚ್ಚಳದ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಉಚ್ಚ ನ್ಯಾಯಾಲಯ ಅನೂರ್ಜಿತಗೊಳಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ತಾಲೂಕು ಘಟಕ ಪಟ್ಟಣದ ತಾಲೂಕು ಆಡಳಿತ ಸೌಧದ ಬಳಿ ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಮೀಸಲಾತಿಯಲ್ಲಿ ಏರಿಕೆ ಕುರಿತಂತೆ ರಾಜ್ಯ ಸರ್ಕಾರ ರಚಿಸಿದ್ದ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗ ಕ್ರಮವಾಗಿ ಪರಿಶಿಷ್ಟ ಜಾತಿಗೆ ಶೇ. ೧೭ಕ್ಕೆ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. ೭ರಷ್ಟು ಹೆಚ್ಚಿಸಲು ಶಿಫಾರಸು ಮಾಡಿತ್ತು. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಆದರೆ ಪರಿಶಿಷ್ಟರ ಮೀಸಲಾತಿ ಕುರಿತಂತೆ ಅನುಸರಿಸಿದ ವಿಳಂಬ ನೀತಿ ಅಕ್ಷಮ್ಯವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಮೀಸಲಾತಿಯ ಪ್ರಮಾಣ ಶೇ. ೫೦ನ್ನು ಮೀರಿದ್ದರಿಂದ, ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಉಚ್ಚ ನ್ಯಾಯಾಲಯ ರದ್ದುಪಡಿಸಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣದ ಏರಿಕೆ ಇಂದಿನ ತುರ್ತು ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದರು.

ಉಚ್ಚ ನ್ಯಾಯಾಲಯ ಮೀಸಲಾತಿ ಪ್ರಮಾಣದ ಏರಿಕೆಯ ಅಧಿಸೂಚನೆ ರದ್ದುಗೊಳಿಸಿರುವುದರ ವಿರುದ್ಧ ಕೂಡಲೇ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಈ ಮೀಸಲಾತಿ ಹೆಚ್ಚಳ ಜಾರಿಗೆ ಬರುವ ನಿಟ್ಟಿನಲ್ಲಿ ಸಂವಿಧಾನದ ೯ನೆಯ ಶೆಡ್ಯೂಲ್‌ಗೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ, ರಾಜ್ಯ ಸರ್ಕಾರ ಪ್ರಬಲ ಹಕ್ಕೊತ್ತಾಯ ಮಂಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರು ಪಟ್ಟಣದಲ್ಲಿ ಬೈಕ್ ರ‍್ಯಾಲಿ ನಡೆಸಿ ಉಪ ತಹಸೀಲ್ದಾರ್ ಶಿವಕುಮಾರಗೌಡ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಮುಖಂಡರಾದ ಕನ್ನಿಹಳ್ಳಿ ಚಂದ್ರಶೇಖರ್, ಟಿ. ವೆಂಕೋಬಪ್ಪ, ಕೆ.ಎಸ್. ಉಡುಚಪ್ಪ, ಜೆ. ಯೋಗಾನಂದ್, ಡಿಶ್ ಮಂಜುನಾಥ್, ಜೋಗಿ ಹನಮಂತಪ್ಪ, ಸೆರೆಗಾರ್ ಹುಚ್ಚಪ್ಪ, ಅಂಬಣ್ಣ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮನುಕುಲಕ್ಕೆ ರಾಮಾಯಣ ಗ್ರಂಥ ಕೊಡುಗೆ ನೀಡಿದ ಆದಿಕವಿ: ಮಹಾಂತಗೌಡ
ಹುಣ್ಣಿಮೆ ದಿನ ಮಾತಂಗಿ ದೇವಿ ದರ್ಶನಕ್ಕೆ ನಿರ್ಬಂಧ!